

ಚಾಮರಾಜನಗರ: ಪ್ರಸ್ತುತ ನಶಿಸಿ ಹೋಗುತ್ತಿರುವ ಜಾನಪದ ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಜಾನಪದ ವೈಭವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹಿಂದಿನ ಕಾಲದ ಜನರು ತಮ್ಮ ದಿನನಿತ್ಯದ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದ ವೇಳೆಯಲ್ಲಿ ಜನಪದವನ್ನು ಕಟ್ಟಿದರು. ಮಹಿಳೆಯರು ನಾಟಿ ಮಾಡುವಾಗ, ದವಸ ಧಾನ್ಯಗಳನ್ನು ಹದ ಮಾಡುವಾಗ ಜನಪದವನ್ನು ಹಾಡುತ್ತಿದ್ದರು. ಮದುವೆ ಸಮಾರಂಭಗಳಲ್ಲಿ ಸೋಬಾನೆ ಪದಗಳನ್ನು ಹಾಡುತ್ತಿದ್ದರು. ಆದರೇ ಇತ್ತೀಚೆಗೆ ಪಾಶ್ಚಾತ್ಯ ಸಂಸ್ಕೃತಿಯ ಹೊಡೆತಕ್ಕೆ ಸಿಕ್ಕಿ ನಮ್ಮ ಜಾನಪದ ಸಂಸ್ಕೃತಿ ನಶಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸರ್ಕಾರಗಳು ಜಾನಪದ ಕಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಹಲವಾರು ಸವಲತ್ತುಗಳನ್ನು ನೀಡುತ್ತಿದೆ. ಅದರಲ್ಲೂ ಜಿಲ್ಲೆ ಜಾನಪದ ಕಲೆಗಳ ತವರೂರು ಎಂದೇ ಖ್ಯಾತಿಯನ್ನು ಪಡೆದುಕೊಂಡಿದ್ದು, ಸರ್ಕಾರದ ಸವಲತ್ತುಗಳನ್ನು ಬಳಸಿಕೊಂಡು ಇಂದಿನ ಯುವ ಜನಾಂಗ ಜಾನಪದ ಕಲೆಗಳನ್ನು ಉಳಿಸಿ ಬೆಳೆಸಬೇಕಾಗಿದೆ ಎಂದು ಸಲಹೆ ನೀಡಿದರು.
ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ.ಎಸ್.ಗುರುಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಗಳನ್ನು ಅನಾವರಣಗೊಳಿಸಲು ಇಂತಹ ವೇದಿಕೆಗಳು ಅತ್ಯಂತ ಸಹಕಾರಿಯಾಗಿದೆ ಎಂದರು. ಈ ಸಂದರ್ಭದಲ್ಲಿ ಜಾನಪದ ರಾಜ್ಯ ಪ್ರಶಸ್ತಿ ವಿಜೇತ ದೊಡ್ಡಗವಿ ಬಸಪ್ಪ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಸಾಂಸ್ಕೃತಿಕ ವೇದಿಕೆ ಸಂಚಾಲಕ ಲೋಕೇಶ್, ಜಿಲ್ಲಾ ಯುವ ಪ್ರಶಸ್ತಿ ಪುರಸ್ಕೃತ ಜಿ.ಬಂಗಾರು, ಉಪನ್ಯಾಸಕ ಗುರುರಾಜ್ ಯರಗನಹಳ್ಳಿ ಹಾಗೂ ಇತರರು ಉಪಸ್ಥಿತರಿದ್ದರು.
ಎತ್ತಿನ ಗಾಡಿಯಲ್ಲಿ ಮೆರವಣಿಗೆ:
ಜಾನಪದ ವೈಭವ ಕಾರ್ಯಕ್ರಮದ ಅಂಗವಾಗಿ ಪ್ರವಾಸಿ ಮಂದಿರದಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವರೆಗೂ ಎತ್ತಿನಗಾಡಿ ಮೂಲಕ ಮೆರವಣಿಗೆ ನಡೆಯಿತು. ಶಾಸಕ ಪುಟ್ಟರಂಗಶೆಟ್ಟಿ ಎತ್ತಿನಗಾಡಿ ಓಡಿಸುವ ಮೂಲಕ ಗಮನಸೆಳೆದರು. ವೇದಿಕೆ ಕಾರ್ಯಕ್ರಮ ಮುಕ್ತಾಯವಾದ ಬಳಿಕ ವಿದ್ಯಾರ್ಥಿಗಳು ಜಾನಪದ ನೃತ್ಯ ವೈಭವ ಕಾರ್ಯಕ್ರಮವನ್ನು ನಡೆಸಿಕೊಟ್ಟರು.