

ಬೀದರ್: ಇಲ್ಲಿಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಅವರು ಪ್ರಸಕ್ತ ಸಾಲಿನ ರಾಜ್ಯಮಟ್ಟದ ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶನಿವಾರ ಜರುಗಿದ 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಮೂರು ದಶಕಗಳಿಂದ ಸಹಕಾರ ಕ್ಷೇತ್ರದಲ್ಲಿ ಇರುವ ಉಮಾಕಾಂತ ನಾಗಮಾರಪಳ್ಳಿ ಅವರು ಜಿಲ್ಲಾಮಟ್ಟದಿಂದ ರಾಜ್ಯದವರೆಗಿನ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ, ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಹಾಗೂ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಸದ್ಯ ಎರಡನೇ ಅವಧಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಪ್ರಸ್ತುತ ಅಪೆಕ್ಸ್ ಬ್ಯಾಂಕ್ ನಿರ್ದೇಶಕ, ಸಹಕಾರ ವಸತಿ ಮಹಾಮಂಡಳ ನಿರ್ದೇಶಕ ಹಾಗೂ ಸಹಕಾರ ಗ್ರಾಹಕರ ಮಹಾಮಂಡಳದ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.
ಡಿಸಿಸಿ ಬ್ಯಾಂಕ್ ಗ್ರಾಹಕರ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ ಒದಗಿಸಲು ಎಟಿಎಂ ಹೊಂದಿರುವ ಸುಸಜ್ಜಿತ ಮೊಬೈಲ್ ಬ್ಯಾಂಕಿಂಗ್ ವ್ಯಾನ್, ಎಟಿಎಂ ಸೇವೆ ಶುರು ಮಾಡಿದ ಶ್ರೇಯಸ್ಸು ಉಮಾಕಾಂತ ಅವರಿಗೆ ಸಲ್ಲುತ್ತದೆ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ನೋಂದಣಿಯಲ್ಲಿ ಬ್ಯಾಂಕ್ ದೇಶದ ಸಹಕಾರ ಬ್ಯಾಂಕ್ ಗಳಲ್ಲಿ ಮೊದಲ ಸ್ಥಾನದಲ್ಲಿರುವುದು ಅವರ ರೈತ ಸ್ನೇಹಿ ಕಾರ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ, ಸಹಕಾರ ಸಚಿವ ಎಚ್.ಟಿ.ಸೋಮಶೇಖರ, ಕಂದಾಯ ಸಚಿವ ಆರ್.ಅಶೋಕ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ ಹಾಗೂ ಹಿರಿಯ ಅಧಿಕಾರಿಗಳು ಇದ್ದರು.