

ಮೈಸೂರು: ನಾಡದೇವತೆ ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವದ ಅಂಗವಾಗಿ ಚಾಮುಂಡಿಬೆಟ್ಟದಲ್ಲಿ ಬುಧವಾರ ಚಿನ್ನದ ಪಲ್ಲಕ್ಕಿಯಲ್ಲಿ ಉತ್ಸವಮೂರ್ತಿ ಮೆರವಣಿಗೆ ನಡೆಯಿತು. ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಸಾವಿರಾರು ಭಕ್ತರು ಬೆಟ್ಟದ ತಾಯಿ, ನಾಡದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು ಪುನೀತರಾದರು.
ಭಕ್ತಿಯ ಹೊಳೆಯಲ್ಲಿ ಮಿಂದೆದ್ದ ಭಕ್ತರಿಂದ ‘ಜೈ ಚಾಮುಂಡೇಶ್ವರಿ’, ‘ಜೈ ನಾಡದೇವತೆ’, ‘ಜೈ ಶಕ್ತಿದೇವಿ’ ಎಂಬ ಜಯಘೋಷಗಳು ಮೊಳಗಿದವು. ಹರಕೆ ಹೊತ್ತ ಮಹಿಳೆಯರು ದೇವಸ್ಥಾನದ ಆವರಣದಲ್ಲಿ ಎಣ್ಣೆ ದೀಪಗಳನ್ನು ಹಚ್ಚಿ ಹರಕೆ ತೀರಿಸಿದರು.
ಆಷಾಢ ಮಾಸದ ಕೃಷ್ಣಪಕ್ಷ, ಸಪ್ತಮಿ ರೇವತಿ ನಕ್ಷತ್ರದಲ್ಲಿ ಜರುಗಿದ ವರ್ಧಂತಿ ಮಹೋತ್ಸವದಲ್ಲಿ ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ತ್ರಿಷಿಕಾದೇವಿ ಒಡೆಯರ್ ದಂಪತಿ ಪೂಜೆ ಸಲ್ಲಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು. ದೇಗುಲ ಮುಂಭಾಗದಿಂದ ಆರಂಭಗೊಂಡ ಮೆರವಣಿಗೆ, ದೇವಸ್ಥಾನವನ್ನು ಒಂದು ಸುತ್ತು ಹಾಕಿ ಮರಳಿ ಸ್ವಸ್ಥಾನ ತಲುಪಿತು. ಈ ವೇಳೆ ನೆರೆದಿದ್ದ ಅಪಾರ ಭಕ್ತಸಮೂಹ ಚಿನ್ನದ ಪಲ್ಲಕ್ಕಿಯಲ್ಲಿ ವಿರಾಜಮಾನಳಾಗಿದ್ದ ದೇವಿಯನ್ನು ಕಣ್ತುಂಬಿಕೊಂಡಿತು.
ಮುಂಜಾನೆ 4 ಗಂಟೆಯಿಂದಲೇ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಗಳು ಆರಂಭವಾದವು. ತಾಯಿಯ ವರ್ಧಂತ್ಯುತ್ಸವದ ವಿಶೇಷ ದಿನವಾದ್ದರಿಂದ ಮೊದಲು ಅಮ್ಮನಿಗೆ ಅಭ್ಯಂಜನ ಸ್ನಾನ ಮಾಡಿಸಿ, ಬಳಿಕ ಅಲಂಕಾರ ಮಾಡಿ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ದೇವಾಲಯದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಕುಂಕುಮಾರ್ಚನೆ, ಏಕದಶ ಪುಷ್ಪಾರ್ಚನೆ, ಸಹಸ್ರನಾಮಾರ್ಚನೆ ಸೇರಿ ವಿವಿಧ ಪೂಜೆಗಳನ್ನು ನೆರವೇರಿಸಲಾಯಿತು. ಬಳಿಕ 8 ಗಂಟೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ಈ ಮಧ್ಯೆ ಬೆಳಗ್ಗೆ 9.30ಕ್ಕೆ ಮಹಾಮಂಗಳಾರತಿ, ಸಂಜೆ 6.30ರಿಂದ 7ರವರೆಗೆ ತಾಯಿಗೆ ನೆರವೇರಿಸಲಾಯಿತು. ರಾತ್ರಿ 9 ಗಂಟೆವರೆಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ದರ್ಶನದ ವೇಳೆ ಯಾವುದೇ ನೂಕು ನುಗ್ಗಲಿಗೆ ಅವಕಾಶವಾಗದಂತೆ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು.
ದೇವಸ್ಥಾನದ ಒಳಾವರಣವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಗುಲಾಬಿ, ಸೇವಂತಿಗೆ, ಚೆಂಡು ಹೂ ಸೇರಿದಂತೆ ಬಗೆ ಬಗೆಯ ಹೂಗಳಿಂದ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ದೇವಾಲಯದ ಪ್ರವೇಶದ್ವಾರ, ಹೊರಭಾಗವನ್ನೂ ವಿಶೇಷವಾಗಿ ಅಲಂಕರಿಸಲಾಗಿತ್ತು.