

ಹಾಸನ: ಕರ್ನಾಟಕ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ 34ನೇ ರಾಜ್ಯ ಮಟ್ಟದ ಮಹಾಸಮಾವೇಶವನ್ನು ನ.8ರಂದು ನಗರದ ಹಿಮ್ಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೆಎಸ್‌ಒಜಿಎ ಅಧ್ಯಕ್ಷೆ ಡಾ.ಭಾರತಿ ರಾಜಶೇಖರ್ ಅವರು ತಿಳಿಸಿದರು.
ಕಾರ್ಯಕ್ರಮವನ್ನು ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಉದ್ಘಾಟಿಸುವರು. ಮುಖ್ಯಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಆರೋಗ್ಯ ಸಚಿವ ದಿನೇಶ್ ಗುಂಡುರಾವ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಸಂಸದ ಶ್ರೇಯಸ್ ಪಟೇಲ್, ಶಾಸಕ ಹೆಚ್.ಪಿ.ಸ್ವರೂಪ್, ಹಿಮ್ಸ್ ನಿರ್ದೇಶಕ ಡಾ.ರಾಜಣ್ಣ, ಪ್ರಾಂಶುಪಾಲ ಡಾ.ರವಿಕುಮಾರ್ ಸೇರಿ ಹಲವು ಭಾಗವಹಿಸಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ವೈದ್ಯಕೀಯ ವಿಜ್ಞಾನ ಮುಂದುವರೆದಂತೆ ವೃತ್ತಿಪರತೆಯನ್ನು ಅಭಿವೃದ್ಧಿಗೊಳಿಸಿಕೊಳ್ಳಬೇಕು ಹಾಗು ಮಹಿಳೆಯರ ಸಮಗ್ರ ಆರೋಗ್ಯ ರಕ್ಷಣೆಯಲ್ಲಿ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರ ಪಾತ್ರ ಪ್ರಮುಖವಾಗಿರುವುರಿಂದ ಕೆಎಸ್‌ಒಜಿಎ 34ನೇ ಸಮಾವೇಶ ಉತ್ತಮ ವೇದಿಕೆಯಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಖ್ಯಾತ ವಾಗ್ಮಿಗಳು, ಸಂಪನ್ಮೂಲ ವ್ಯಕ್ತಿಗಳು ಸಮಾವೇಶದಲ್ಲಿ ಭಾಗವಹಿಸಿ ವಿಚಾರ ವಿನಿಮಯ ಮಾಡಿಕೊಳ್ಳಲಿದ್ದಾರೆ ಎಂದು ತಿಳಿಸಿದರು.
ಈ ಸಮಾವೇಶ ವೈದ್ಯರಿಗಷ್ಟೇ ಸೀಮಿತವಾಗದೆ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಸ್ತನ ಕ್ಯಾನ್ಸರ್, ಗರ್ಭಕೊರಳ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸಲಾಗುವುದು. ನರ್ಸಿಂಗ್ ವಿದ್ಯಾರ್ಥಿಗಳಿಗೆ ಚಿಕಿತ್ಸಾ ಪ್ರಯೋಗಿಕ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಿಂದ 700ಕ್ಕೂ ಹೆಚ್ಚು ವೈದ್ಯರು ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮಕ್ಕೂ ಮೊದಲು ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮಹಿಳಾ ಆರೋಗ್ಯ ಜಾಗೃತಿ ಬಗ್ಗೆ ಜಾಥಾವನ್ನು ಹಮ್ಮಿಕೊಂಡಿದ್ದು, ಜಾಥಾ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮದ್ ಸುಜೀತಾ ಅವರು ಚಾಲನೆ ನೀಡುವರು ಎಂದು ತಿಳಿಸಿದರು.
ಡಾ.ಶ್ರೀವಿದ್ಯಾ, ಡಾ.ಗಿರಿಜಾ, ಡಾ.ಸೌಮ್ಯಮಣಿ, ಡಾ.ಸಾವಿತ್ರಿ, ಡಾ.ಪೂರ್ಣಿಮಾ ಹಾಜರಿದ್ದರು.