ನಾಳೆ ರೈತ ಸಂಘದಿಂದ ಬೃಹತ್ ಪಾದಯಾತ್ರೆ: ಕೋಡಿಹಳ್ಳಿ ಚಂದ್ರಶೇಖರ್

ನಾಳೆ ರೈತ ಸಂಘದಿಂದ ಬೃಹತ್ ಪಾದಯಾತ್ರೆ: ಕೋಡಿಹಳ್ಳಿ ಚಂದ್ರಶೇಖರ್
Published on

ಹಾಸನ: ಕಾವೇರಿ ನೀರು ಹಂಚಿಕೆ, ಕೊಬ್ಬರಿಗೆ ವೈಜ್ಞಾನಿಕ ಬೆಲೆ ನಿಗದಿ ಹಾಗೂ ಬಿಜೆಪಿ ಸರಕಾರದಲ್ಲಿ ರೈತರಿಗೆ ಮಾರಕವಾದ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದ ವತಿಯಿಂದ ಸೆ.26ರಂದು ಅರಸೀಕೆರೆ ಎಪಿಎಂಸಿ ಮಾರುಕಟ್ಟೆಯಿಂದ ಬೆಂಗಳೂರಿಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.

ಚುನಾವಣೆ ಪೂರ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೈತರ ಹಿತ ಕಾಯುವುದಾಗಿ ಭರವಸೆ ನೀಡಿದ್ದರು. ಆದರೆ ಅಧಿಕಾರಕ್ಕೆ ಬಂದ ಮೇಲೆ ಕಾವೇರಿ ವಿಚಾರದಲ್ಲಿ ದೃಢ ನಿರ್ಧಾರ ತೆಗೆದುಕೊಳ್ಳಲಿಲ್ಲ, ಕೊಬ್ಬರಿಗೆ ಬೆಂಬಲ ಬೆಲೆ ನಿಗದಿಪಡಿಸುವಲ್ಲಿ ವಿಫಲರಾಗಿದ್ದಾರೆ. ಅಲ್ಲದೆ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳದೆ ಅನ್ಯಾಯ ಮಾಡಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ರೈತರ ಭರವಸೆಗಳನ್ನು ಈಡೇರಿಸಬೇಕು. ಕಾವೇರಿ ವಿಚಾರದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಬೆಂಗಳೂರು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ. ಪಾದಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಮಳೆ ಇಲ್ಲದೆ ಬರಗಾಲ ಆವರಿಸಿದೆ. ರಾಜ್ಯದ ವಸ್ತು ಸ್ಥಿತಿಯನ್ನು ಅರಿಯದೆ ತಮಿಳುನಾಡಿಗೆ ನೀರು ಹರಿಸಲಾಯಿತು. ಪ್ರಾಧಿಕಾರ ಮತ್ತು ನ್ಯಾಯಾಲಯಕ್ಕೂ ವಾಸ್ತವವನ್ನು ಅರ್ಥೈಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲರಾಗಿದೆ. ರಾಜ್ಯದ ಹವಾಮಾನ ಇಲಾಖೆ ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿ ಶೇ.70ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ವರದಿ ನೀಡಿದೆ. ಈ ವರದಿಯನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಸಮರ್ಥವಾಗಿ ಮಂಡಿಸಲು ರಾಜ್ಯ ಸರಕಾರ ವಿಫಲರಾಗಿದ್ದಾರೆ ಎಂದು ದೂರಿದರು.

ಸರ್ಕಾರ ಈಗಾಗಲೇ 195 ತಾಲೂಕುಗಳನ್ನ ಬರಪೀಡಿತ ಎಂದು ಘೋಷಣೆ ಮಾಡಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ತಾಲೂಕುಗಳು ಸೇರ್ಪಡೆಯಾಗಲಿವೆ. ಇಷ್ಟೆಲ್ಲ ವಾಸ್ತವ ಸ್ಥಿತಿ ತಿಳಿದಿದ್ದರೂ ಕೂಡ ತಮಿಳುನಾಡಿಗೆ ನೀರು ಹರಿಸಿರುವುದು ಖಂಡನೀಯ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಕೂಡ ಹಾಹಾಕಾರ ಉಂಟಾಗಲಿದೆ. ರೈತರು ಮಳೆಗಾಲ ಮತ್ತು ಜಲಾಶಯಗಳನ್ನು ನಂಬಿಕೊಂಡು ಬಿತ್ತನೆ ಕಾರ್ಯ ಮಾಡಿದ್ದಾರೆ. ಅವರ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದೆ. ಸರ್ಕಾರ ತಕ್ಷಣವೇ ಸೂಕ್ತ ಪರಿಹಾರ ವಿತರಣೆ ಮಾಡಬೇಕು. ಮುಂದಿನ ದಿನಗಳಲ್ಲಿ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡುಗಡೆ ಮಾಡಬಾರದು ಎಂದು ಅಗ್ರಹಿಸಿದರು.

ಕೊಬ್ಬರಿಗೆ ಸರ್ಕಾರ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸಬೇಕು. ಈ ಹಿಂದೆಯೂ ಕೂಡ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಆದರೆ ಇನ್ನೂ ಜಾರಿಯಾಗಿಲ್ಲ. ಇದೇ ರೀತಿ ಮುಂದುವರೆದರೆ ರೈತರು ಬೀದಿಗೆ ಇಳಿದು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ರೈತ ಸಂಘಟನೆ ಮುಖಂಡರಾದ ಯೋಗೇಶ್, ಅರುಣ್ ಕುಮಾರ್, ಆನೆಕೆರೆ ರವಿ, ಮೊಹಮ್ಮದ್ ಸಾದಿಕ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net