ನಾಳೆ ವಾಲ್ಮೀಕಿ ಮಹರ್ಷಿ ಜಯಂತಿ ಆಚರಣೆ

ನಾಳೆ ವಾಲ್ಮೀಕಿ ಮಹರ್ಷಿ ಜಯಂತಿ ಆಚರಣೆ
Published on

ಹಾಸನ: ಪ್ರತಿ ವರ್ಷದಂತೆ ಈ ವರ್ಷವೂ ಸಂಸ್ಕೃತ ಸಾಹಿತ್ಯದ ಮೊದಲ ಕವಿ ಹಾಗೂ ಶ್ರೀ ರಾಮಾಯಣದ ಕರ್ತೃ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಸಹಯೋಗದಲ್ಲಿ ಆ.17ರ ಗುರುವಾರ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಆಚರಿಸಲಾಗುತ್ತಿದೆ ಎಂದು ವಾಲ್ಮೀಕಿ ನಾಯಕ ಜನಾಂಗದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಧರ್ಮಪ್ಪನಾಯಕ ತಿಳಿಸಿದರು.
ಗುರುವಾರ ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಹಾಸನಾಂಬ ಕಲಾಕ್ಷೇತ್ರದವರಿಗೂ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರ ಹಾಗೂ ವಿವಿಧ ಕಲಾ ತಂಡಗಳೊಂದಿಗೆ ಅದ್ಧೂರಿ ಮೆರವಣಿಗೆ ಜರುಗಲಿದೆ. ನಂತರ ಕಲಾಕ್ಷೇತ್ರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡರು ಗೌರವಾನ್ವಿತ ಉಪಸ್ಧಿತಿ ವಹಿಸುವರು. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಸಂಸದ ಶ್ರೇಯಸ್ ಪಟೇಲ್, ಶಾಸಕರಾದ ಕೆ.ಎಂ. ಶಿವಲಿಂಗೇಗೌಡ, ಎಚ್.ಡಿ. ರೇವಣ್ಣ, ಸಿ.ಎನ್. ಬಾಲಕೃಷ್ನ, ಎ.ಮಂಜು, ಎಚ್.ಕೆ. ಸುರೇಶ್, ಸಿಮೆಂಟ್ ಮಂಜು, ಡಾ.ಸೂರಜ್, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್ ಅಧ್ಯಕ್ಷತೆ ವಹಿಸಲಿದ್ದಾರೆ.
ನಗರಸಭೆ ಅಧ್ಯಕ್ಷ ಎಂ.ಚಂದ್ರೇಗೌಡ, ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಆರ್ ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ಸಂಘಟನೆಗಳ ಮುಖಂಡರು ಭಾಗಿಯಾಗಲಿದ್ದಾರೆ. ಸಾಹಿತಿ ಟಿ.ಎಚ್. ಅಪ್ಪಾಜಿಗೌಡ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮ ಮುಗಿದ ನಂತರ ಮಧ್ಯಾಹ್ನದಿಂದ ನಮ್ಮ ಸಂಘದ ಕಲಾವಿದರ ವತಿಯಿಂದ ಮಹರ್ಷಿ ವಾಲ್ಮೀಕಿ ವಿರಚಿತ ಸಂಪೂರ್ಣ ರಾಮಾಯಣ ಪೌರಾಣಿಕ ನಾಟಕ ಪ್ರದರ್ಶನಗೊಳ್ಳಲಿದೆ. ಪರಿಶಿಷ್ಟ ಜಾತಿ-ವರ್ಗಗಳ ಸಮುದಾಯಕ್ಕೆ ಅಹರ್ನಿಶಿ ದುಡಿದಿರುವ ನಗರ ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳ 9 ಮಂದಿಯನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷ ಮಧುನಾಯಕ್, ಉಪಾಧ್ಯಕ್ಷ ರಾಜಶೇಖರ್, ಕಲಾವಿದ ಟಿ.ನಾಗರಾಜು, ಆಟೋ ನಾಗರಾಜ್ ಇದ್ದರು.

ಮಹರ್ಷಿ ವಾಲ್ಮೀಕಿ ಹೆಸರಿಡಿ
ಹಾಸನ ನಗರದ ಯಾವುದಾದರೊಂದು ವೃತ್ತಕ್ಕೆ ಮಹರ್ಷಿ ವಾಲ್ಮೀಕಿ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂಬುದು ನಮ್ಮ ಬಹು ದಿನಗಳ ಬೇಡಿಕೆ ಆಗಿದೆ. ಹಾಗೆಯೇ ನಮ್ಮ ಸಮುದಾಯದ ವಿವಿಧ ಕಾರ್ಯಕ್ರಮಗಳಿಗೆ ಅನುಕೂಲ ಆಗಲು ಸಮುದಾಯ ಭವನವೊಂದನ್ನು ನಿರ್ಮಿಸಲು ನಗರ ವ್ಯಾಪ್ತಿಯಲ್ಲಿ ನಿವೇಶನ ನೀಡಬೇಕು ಎಂದು ಇದೇ ವೇಳೆ ಧರ್ಮಪ್ಪನಾಯಕ ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net