ನಿಡ್ತ, ಗೋಪಾಲಪುರ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗೆ ಚಾಲನೆ

14ss2gopalapura school
Published on

ಶನಿವಾರಸಂತೆ: ಹಂಡ್ಲಿ ಕ್ಲಸ್ಟರ್ ವ್ಯಾಪ್ತಿಗೆ ಒಳಪಡುವ ನಿಡ್ತ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮತ್ತು ಗೋಪಾಲಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದನೆ ತರಗತಿಯಿಂದ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಚಾಲನೆ ನೀಡಲಾಯಿತು.

ನಿಡ್ತ ಮತ್ತು ಗೋಪಾಲಪುರ ಸರಕಾರಿ ಪ್ರಾಥಮಿಕ ಶಾಲೆಗಳು ನಿಡ್ತ ಗ್ರಾಪಂ ವ್ಯಾಪ್ತಿಗೆ ಒಳಪಟ್ಟಿರುವ ಹಿನ್ನೆಲೆಯಲ್ಲಿ ಗ್ರಾಪಂ ಅಧ್ಯಕ್ಷ ಟಿ.ಕೆ.ಅಶೋಕ್ ಆಂಗ್ಲ ಮಾಧ್ಯಮ ಶಿಕ್ಷಣ ಪ್ರಯುಕ್ತ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಟಿ.ಕೆ.ಅಶೋಕ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯುವುದರಿಂದ ಮಕ್ಕಳ ಹಾಜರಾತಿ ಪ್ರಮಾಣ ಹೆಚ್ಚಾಗುತ್ತದೆಯಲ್ಲದೆ, ಸರ್ಕಾರಿ ಶಾಲೆಗಳು ಅಭಿವೃದ್ಧಿ ಹೊಂದುತ್ತವೆ. ಈ ನಿಟ್ಟಿನಲ್ಲಿ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವಂತೆ ಮನವಿ ಮಾಡಿದರು.

ಸಮೂಹ ಸಂಪನ್ಮೂಲ ವ್ಯಕ್ತಿ ಸಿ.ಕೆ.ದಿನೇಶ್ ಮಾತನಾಡಿ, ಸರ್ಕಾರ ಮತ್ತು ಶಿಕ್ಷಣ ಇಲಾಖೆ ಕ್ಲಸ್ಟರ್ ವ್ಯಾಪ್ತಿಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚು ಇರುವ ಶಾಲೆಗಳಲ್ಲಿ ಒಂದನೆ ತರಗತಿಯಿಂದ ಆಂಗ್ಲ ಮಾಧ್ಯಮ ಶಿಕ್ಷಣ ಪ್ರಾರಂಬಿಸಲು ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಹಂಡ್ಲಿ ಕ್ಲಸ್ಟರ್ ವ್ಯಾಪ್ತಿಯಲ್ಲಿ ನಿಡ್ತ ಮತ್ತು ಗೋಪಾಲಪುರ ಪ್ರಾಥಮಿಕ ಶಾಲೆಗಳಲ್ಲಿ ಒಂದನೆ ತರಗತಿಯಿಂದ ಆಂಗ್ಲ ಮಾಧ್ಯಮ ಶಿಕ್ಷಣ ಪ್ರಾರಂಭಿಸಲು ಅನುಮೋದನೆ ದೊರೆತ್ತಿರುವುದರಿಂದ ಸಾಂಕೇತಿಕವಾಗಿ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಒಂದನೆ ತರಗತಿಗೆ ಆಂಗ್ಲ ಮಾಧ್ಯಮ ಪ್ರಾರಂಭಿಸಲಾಗಿದೆ ಎಂದು ಹೇಳಿದರು.

ಉಭಯ ಶಾಲೆಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯ ತೀರ್ಥಾನಂದ್, ಗ್ರಾಪಂ ಅಭಿವೃದ್ಧಿ ಅಧಿಕಾರಿ ಮಾನಸ, ಎರಡೂ ಶಾಲೆಗಳ ಮುಖ್ಯ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಶಿಕ್ಷಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net