

ವಿರಾಜಪೇಟೆ: ವಿದ್ಯಾರ್ಥಿ ದಿಸೆಯಿಂದಲೇ ಗುರಿ ಇದ್ದರೆ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಗೋಣಿಕೊಪ್ಪ ಕಾವೇರಿ ಕಾಲೇಜು ಪ್ರಾಂಶುಪಾಲ ಡಾ.ಮಾಳೇಟಿರ ಕಾವೇರಪ್ಪ ಹೇಳಿದರು.
ಇಲ್ಲಿನ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕ್ಷಣಿಕ ಸುಖಕ್ಕಾಗಿ ಬದುಕನ್ನು ನಾಶ ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿ ಜೀವನದಲ್ಲಿ ಮನಸ್ಸು ಚಂಚಲವಾಗಿರುತ್ತದೆ. ಹಾಗಾಗಿ, ಏಕಾಗ್ರತೆ ಬೆಳೆಸಿಕೊಳ್ಳುವುದು ಅತ್ಯಗತ್ಯ ಎಂದರು.
ಪಾಲಕರ ಬುದ್ಧಿಮಾತಿಗೆ ಮಕ್ಕಳು ಬೆಲೆ ಕೊಡಬೇಕು. ಜತೆಗೆ ಪ್ರತಿಭೆಯನ್ನು ಬದುಕಿನ ಒಳಿತಿಗಾಗಿ ಬಳಸಿಕೊಳ್ಳಬೇಕು. ಈ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದವರು ಉನ್ನತ ಹುದ್ದೆ ಅಲಂಕರಿಸಿದ್ದು, ಅವರಂತೆಯೇ ಎಲ್ಲರೂ ಮುನ್ನಡೆಯಬೇಕು ಎಂದು ಕಿವಿಮಾತು ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಪುಟ್ಟರಾಜು ಮಾತನಾಡಿ, ಪಠ್ಯೇತರ ಚಟುವಟಿಕೆಗಳಿಗೆ ವಿರಾಮ ಹಾಕುವ ಸಮಯ ಬಂದಿದೆ. ಮುಂದಿನ ದಿನಗಳಲ್ಲಿ ಪಠ್ಯದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕಿದೆ. ಕಳೆದು ಹೋದ ಕಾಲವನ್ನು ಚಿಂತಿಸದೆ ಮುಂದೆ ಎದುರಿಸುವ ಪರೀಕ್ಷೆಗಳಿಗೆ ಸಿದ್ಧರಾಗಬೇಕು ಎಂದು ಸಲಹೆ ನೀಡಿದರು.
ಕಾಲೇಜು ಆಡಳಿತ ಮಂಡಳಿ ಉಪಾಧ್ಯಕ್ಷ ಪಟ್ರಪಂಡ ರಘುನಾಣಯ್ಯ ಅಧ್ಯಕ್ಷತೆ ವಹಿಸಿದ್ದರು. ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ತಾತಂಡ ಜ್ಯೋತಿ, ಉಪ ಪ್ರಾಂಶುಪಾಲೆ ಪ್ರತಿಕಾ, ಆಡಳಿತ ಮಂಡಳಿ ಸದಸ್ಯರಾದ ಜೋಕಿಂ ರಾಡ್ರಿಗಸ್, ಆಶಾ ಸುಬ್ಬಯ್ಯ, ಪೋಷಕರ ಸದಸ್ಯ ತೋಲ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭ ಗೋಣಿಕೊಪ್ಪ ಕಾವೇರಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಮಾಳೇಟಿರ ಕಾವೇರಪ್ಪ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಟ್ಟರಾಜು ಅವರನ್ನು ಸನ್ಮಾನಿಸಲಾಯಿತು.