ನೀರಿನ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಪ್ರತಿಭಟನೆ

Aluru protest
ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣವೇ ನಿವಾರಿಸಬೇಕೆಂದು ಆಗ್ರಹಿಸಿ ತಾಲೂಕಿನ ಕಾಮತಿ ಗ್ರಾಮಸ್ಥರು ಮಡಬಲು ಪಂಚಾಯಿತಿ ಆಡಳಿತದ ವಿರುದ್ಧ ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದರು.
Published on

ಆಲೂರು: ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣವೇ ನಿವಾರಿಸಬೇಕೆಂದು ಆಗ್ರಹಿಸಿ ತಾಲೂಕಿನ ಕಾಮತಿ ಗ್ರಾಮಸ್ಥರು ಮಡಬಲು ಪಂಚಾಯಿತಿ ಆಡಳಿತದ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಪಾಳ್ಯ ಹೋಬಳಿ ಮಡಬಲು ಪಂಚಾಯಿತಿಗೆ ಒಳಪಡುವ ಕಾಮತಿ ಗ್ರಾಮದಲ್ಲಿ ಕೆಲ ತಿಂಗಳಿಂದ ನೀರಿನ ಸಮಸ್ಯೆ ಬಿಗಡಾಯಿಸಿದೆ. ಹೀಗಾಗಿ ಗ್ರಾಮಸ್ಥರು ತೊಂದರೆ ಅನುಭವಿಸುವಂತಾಗಿದೆ. ಅದಕ್ಕಾಗಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ಗ್ರಾಮದ ಜನತೆ ಗ್ರಾಮ ಪಂಚಾಯಿತಿಗೆ ಹಲವಾರು ಬಾರಿ ಮನವಿ ಕೊಟ್ಟರೂ ಯಾವುದೇ ರೀತಿಯಿಂದ ಬೆಲೆ ಇಲ್ಲದಂತಾಗಿದೆ. ಕುಡಿಯಲು ನೀರು ಸಿಗದೇ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದೂರಿದರು.

ಗ್ರಾಮ ಪಂಚಾಯಿತಿ ಸದಸ್ಯೆ ವನಿತಾ ಮಾತನಾಡಿ, ಗ್ರಾಪಂ ಅಭಿವೃಧ್ಧಿ ಅಧಿಕಾರಿ ಹಾಗೂ ವಾಟರ್‌ಮ್ಯಾನ್‌ಗಳ ನಿರ್ಲಕ್ಷವೇ ಇದಕ್ಕೆ ಕಾರಣವಾಗಿದೆ. ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಒದಗಿಸುವಂತೆ ಸಾಕಷ್ಟು ಬಾರಿ ಪಂಚಾಯಿತಿಯ ಅಧಿಕಾರಿಗಳಿಗೆ ಮನವಿ ಮಾಡಿದರೂ ಅಧಿಕಾರಿಗಳು ಯಾವುದೇ ರೀತಿಯ ಕ್ರಮ ಕೈಗೊಂಡಿರುವುದಿಲ್ಲ ಎಂದು ಬೇಸರವ್ಯಕ್ತಪಡಿಸಿದರು.

ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಜಯಲಕ್ಷ್ಮೀ ರಾಜು ಮಾತನಾಡಿ, ಗ್ರಾಮದಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ವಿಪರೀತವಾಗಿದೆ. ಒಳಚರಂಡಿಗಳ ವ್ಯವಸ್ಥೆ ಸಮರ್ಪಕವಾಗಿ ಇಲ್ಲದಂತಾಗಿದೆ. ಇನ್ನೂ ಕೆಲವೆಡೆಗಳಲ್ಲಿ ಒಳಚರಂಡಿಗಳನ್ನು ಸರಿಯಾಗಿ ಸ್ವಚ್ಛತೆ ಮಾಡಿಲ್ಲ. ಇದರಿಂದಾಗಿ ಗ್ರಾಮದಲ್ಲಿ ಚರಂಡಿ ದುರ್ವಾಸನೆ ಬೀರುತ್ತಿದ್ದು, ಸಾಂಕ್ರಾಮಿಕ ರೋಗಗಳಿಗೆ ಎಡೆಮಾಡಿಕೊಡುತ್ತದೆ. ಅಧಿಕಾರಿಗಳು ಮಾತ್ರ ಇದಕ್ಕೂ ತಮಗೂ ಯಾವುದೇ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ದೂರಿದರು.

ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಕೂಡಲೇ ಕಟ್ಟುನಿಟ್ಟಿನ ಸೂಚನೆ ನೀಡಿ ಮಡಬಲು ಗ್ರಾಮ ಪಂಚಾಯಿತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಹೋರಾಟ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಮಡಬಲು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಜಯಲಕ್ಷ್ಮಿ ರಾಜು, ಗ್ರಾಮಸ್ಥರಾದ ಸಾವಿತ್ರಿ, ಧರ್ಮಮ್ಮ, ಸುಧಾ, ಭವ್ಯ, ಮಂಜುಳಾ, ಪವಿತ್ರ ಇನ್ನಿತರ ಮಹಿಳೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net