

ಬಾಗಲಕೋಟೆ: ರಾಜ್ಯ ಸರ್ಕಾರದ ಸಾಧನೆಗಳು, ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನುಡಿದಂತೆ ನಡೆದ ಕಾಂಗ್ರೆಸ್ ಬೇಕಾ? ಮಾತು ತಪ್ಪಿದ ಮೋದಿ ಬೇಕಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ರಬಕವಿ-ಬನಹಟ್ಟಿಯ ಎಸ್‌ಆರ್ ಎ ಹೈಸ್ಕೂಲ್ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮೊದಲ ಹಂತದಲ್ಲಿ ನಡೆದ 102 ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿರುವುದು ಸ್ಪಷ್ಟವಾಗುತ್ತಿದ್ದಂತೆ ನರೇಂದ್ರ ಮೋದಿ ಅವರು ಮನ ಬಂದಂತೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.
ಪ್ರಧಾನಿಯಾದವರು ದೇಶದ ಜನರ ಮಾನ, ಪ್ರಾಣ, ಆಸ್ತಿ ರಕ್ಷಣೆ ಮಾಡಬೇಕು. ಆದರೆ ಅವರು ಜಾತಿ-ಜಾತಿ, ಧರ್ಮ-ಧರ್ಮಗಳ ನಡುವೆ ಸಂಘರ್ಷ ಉಂಟು ಮಾಡುತಿದ್ದಾರೆ. ಇದು ಆರ್‌ಎಸ್‌ಎಸ್‌ನ ಗೌಪ್ಯ ಕಾರ್ಯಸೂಚಿಯೂ ಹೌದು ಎಂದರು.
ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ಐದೂ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದೆ. ಎಐಸಿಸಿ ಕೂಡ ಹಲವು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು, ಅಧಿಕಾರಕ್ಕೆ ಬಂದರೆ ನಿಶ್ಚಿತವಾಗಿ ಜಾರಿಗೆ ತರಲಿದೆ. ಪಿ.ವಿ. ನರಸಿಂಹರಾವ್ ಪ್ರಧಾನಿಯಾಗಿದ್ದಾರ ರೈತರ ಸಾಲ ಮನ್ನಾ ಮಾಡಿದರು. ಈ ಹಿಂದೆ ನನು ಸಹಕಾರ ಸಂಘಗಳಲ್ಲಿನ ರೈತರ ಸಾಲ ಮನ್ನಾ ಮಾಡಿದ್ದೇನೆ. ನರೇಂದ್ರ ಮೋದಿ ಅವರು ಹತ್ತು ವರ್ಷಗಳ ಹಿಂದೆ ಮತ ಕೇಳಲು ಬಂದಾಗ ಕೊಟ್ಟಿದ್ದ ಯಾವುದೇ ಮಾತನ್ನು ಉಳಿಸಿಕೊಂಡಿಲ್ಲ ಎಂದರು.
ಅಚ್ಛೆ ದಿನ್ ಬರಲಿಲ್ಲ. ಕಪ್ಪು ಹಣದ ಸುದ್ದಿ ಇಲ್ಲ, ರೈತರ ಆದಾಯ ದ್ವಿಗುಣವಾಗಲಿಲ್ಲ. ನಿರುದ್ಯೋಗ ಸಮಸ್ಯೆ ನಿವಾರಣೆಗೆ ಉದ್ಯೋಗ ಸೃಷ್ಟಿಸಲಿಲ್ಲ. ಇಂಥ ಸರ್ಕಾರ ಮತ್ತೆ ಬೇಕಾ? ಅಥವಾ ನುಡಿದಂತೆ ನಡೆಯುವ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾ? ಎಂಬುದನ್ನು ನೀವು ನಿರ್ಧರಿಸಿ ಎಂದರು. ಜನಸಾಮಾನ್ಯರು, ರೈತರ ಬದುಕು ಹಸನಾಗಬೇಕಾದರೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿದರು.
ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ, ಅವಕಾಶ ವಂಚಿತರಾದವರಿಗೆ ಮೀಸಲಾತಿ ಕೊಡಬೇಕೆಂದು ಸಂವಿಧಾನ ಹೇಳಿದೆ. ನರೇಂದ್ರ ಮೋದಿ ಅವರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಸಂವಿಧಾನ ತಿದ್ದುಪಡಿ ಮಾಡಿ ಅವರಿಗೂ 10% ಮೀಸಲಾತಿ ನೀಡಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚನೆ ಮಾಡಿರುವ ಮೂಲ ಸಂವಿಧಾನದಲ್ಲಿ ಅದು ಇಲ್ಲ. ಆದರೂ ಸಂವಿಧಾನ ತಿದ್ದುಪಡಿ ಮಾಡಿ ಮೀಸಲಾತಿ ನೀಡಿದೆ.
1992ನೇ ಇಸವಿಯಲ್ಲಿ ಸುಪ್ರೀಂ ಕೋರ್ಟ್ ನ ಸಂವಿಧಾನ ಪೀಠವು ಮಂಡಲ್ ಆಯೋಗದ ವರದಿಯ ಶಿಫಾರಸುಗಳನ್ನು ಒಪ್ಪಿಕೊಂಡಿದ್ದು, ಮೀಸಲಾತಿಯ ಸೀಲಿಂಗ್ ಎಷ್ಟಿರಬೇಕೆಂದು ಕೂಡ ಹೇಳಿದೆ. ಮೀಸಲಾತಿ 50% ಗಿಂತ ಹೆಚ್ಚಿರಬಾರದು ಎಂದು ಹೇಳಿದ್ದಾರೆ.ಮಂಡಲ್ ಆಯೋಗದ ವರದಿ ಜಾರಿಯಾದಾಗ ಮೀಸಲಾತಿ ವಿರೋಧಿಸಿದವರು ಬಿಜೆಪಿಯವರು. ಶಾಲಾ - ಕಾಲೇಜುಗಳ ಮಕ್ಕಳನ್ನು ಎತ್ತಿ ಕಟ್ಟಿ ಮೀಸಲಾತಿ ವಿರೋಧಿಸಲು ಹೇಳಿ ಆತ್ಮಹತ್ಯೆಗೆ ಪ್ರೇರೇಪಿಸಿದರು ಎಂದರು.
ಲಾಲ್ ಕೃಷ್ಣ ಅದ್ವಾನಿಯವರು ಹಿಂದುಳಿದವರು, ಮಹಿಳೆಯರು ಮತ್ತು ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುವುದನ್ನು ವಿರೋಧಿಸಿ ರಥಯಾತ್ರೆ ಹಮ್ಮಿಕೊಂಡಿದ್ದರು. ಮೊದಲಿನಿಂದಲೂ ಬಿಜೆಪಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ.
ರಾಜೀವ್ ಗಾಂಧಿಯವರು ಪ್ರಧಾನಿಯಾಗಿದ್ದಾಗ ಸಂವಿಧಾನಕ್ಕೆ 73, 74 ನೇ ತಿದ್ದುಪಡಿ ಮಾಡಿದರು. 73 ನೇ ತಿದ್ದುಪಡಿ ಮೂಲಕ ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯತಿಗಳಲ್ಲಿ ಮಹಿಳೆಯರಿಗೆ, ಹಿಂದುಳಿದವರಿಗೆ ಮೀಸಲಾತಿ ತಂದರು. ನರಸಿಂಹರಾಯರು ಪ್ರಧಾನಮಂತ್ರಿಗಳಾಗಿದ್ದಾಗ ಜಾರಿಗೆ ಬಂತು ಎಂದರು
ಮುಸಲ್ಮಾನರಿಗೆ ಮೀಸಲಾತಿ ಕಳೆದ 30 ವರ್ಷದಿಂದ ಜಾರಿಯಲ್ಲಿದೆ. ನಂತರ ಬಸವರಾಜ ಬೊಮ್ಮಾಯಿ
ಸಿಎಂ ಆಗಿದ್ದಾಗ ಲಿಂಗಾಯತರು, ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಿಸಲು ಮುಸಲ್ಮಾನರಿಗಿದ್ದ ಮೀಸಲಾತಿಯನ್ನು ತೆಗೆದು ಹಾಕಿದರು. ಮುಸಲ್ಮಾನರಿಗೆ ನೀಡಿದ ಮೀಸಲಾತಿ ಧರ್ಮಾಧಾರಿತ ಅಲ್ಲ, ಸಂವಿಧಾನದ ಆರ್ಟಿಕಲ್ 15 ಹಾಗೂ 16 ರಂತೆ ನೀಡಲಾಗಿದೆ. ಬಸವರಾಜ ಬೊಮ್ಮಾಯಿಯವರ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ಸಮುದಾಯ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ, ಮುಸಲ್ಮಾನರಿಗೆ ನೀಡುವ ಮೀಸಲಾತಿಯನ್ನು ಮುಂದುವರೆಸುವುದಾಗಿ ಮುಚ್ಚಳಿಕೆ ರೆದುಕೊಟ್ಟರು.
"ಹಿಂದುಳಿದವರಿಗೆ ನೀಡಲಾದ ಮೀಸಲಾತಿಯನ್ನು ರದ್ದುಪಡಿಸಿ ಮುಸಲ್ಮಾನರಿಗೆ ನೀಡಲಾಗುತ್ತದೆ" ಎಂಬ ನರೇಂದ್ರ ಮೋದಿಯವರ ಹೇಳಿಕೆ ಅಪ್ಪಟ ಸುಳ್ಳು. ಮತಗಳನ್ನು ಧ್ರುವೀಕರಣ ಮಾಡುವ ಉದ್ದೇಶದಿಂದ ಮೋದಿಯವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದು, ಅವರ ಸ್ಥಾನಕ್ಕೆ ಇದು ಶೋಭೆ ತರುವುದಿಲ್ಲ ಎಂದರು.
ಎಲ್ಲ ಭಾರತೀಯರ ರಕ್ಷಣೆ ಮಾಡುವುದು ಪ್ರಧಾನಮಂತ್ರಿಗಳ ಕರ್ತವ್ಯ. ಮುಸಲ್ಮಾನರನ್ನು ಪ್ರತ್ಯೇಕಿಸಿ ಮತಗಳ ಧ್ರುವೀಕರಣ ಮಾಡುತ್ತಿರುವ ಮೋದಿಯವರ ಕಾರ್ಯ ಸಂವಿಧಾನ ಬಾಹಿರವಾದುದು. ಮೀಸಲಾತಿ ನೀಡಿಕೆ ಸಂವಿಧಾನಿಕವಾಗಿ ಸರಿಯೆಂದು ಸುಪ್ರೀಂ ಕೋರ್ಟ ತಿಳಿಸಿದ್ದರೂ, ಮೋದಿಯವರು ಹತಾಶೆಯಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮೀಸಲಾತಿಯನ್ನು ವಿರೋಧಿಸುವ ಬಿಜೆಪಿ ಧೋರಣೆ ಖಂಡಿಸುತ್ತೇನೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಸಚಿವರಾದ ಆರ್.ಬಿ. ತಿಮ್ಮಾಪುರ, ಶಿವಾನಂದ ಪಾಟೀಲ, ಶಾಸಕರಾದ ಎಚ್.ವೈ. ಮೇಟಿ, ಜೆ.ಟಿ. ಪಾಟೀಲ, ವಿಜಯಾನಂದ ಕಾಶಪ್ಪನವರ್, ಬಿ.ಬಿ. ಚಿಮ್ಮನಕಟ್ಟಿ, ವಿಧಾನಪರಿಷತ್ ಸದಸ್ಯ ಸುನಿಲ್‌ಗೌಡ ಪಾಟೀಲ, ಶಾಸಕ ವಿನಯ್ ಕುಲಕರ್ಣಿ, ಕೆಪಿಸಿಸಿ ಉಪಾಧ್ಯಕ್ಷರಾದ ಅಜಯಕುಮಾರ ಸರನಾಯಕ, ಎಂ.ಬಿ. ಸೌದಾಗಾರ್, ಮಾಜಿ ಸಚಿವ ಉಮಾಶ್ರೀ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಕ್ಷಿತಾ ಈಟಿ, ಮಾಜಿ ಸಚಿವ ಬಿ.ಆರ್. ಯಾವಗಲ್, ಮಾಜಿ ಶಾಸಕ ಆನಂದ ನ್ಯಾಮಗೌಡ, ಫಾರಸ್‌ಮಲ್ ಜೈನ್, ಮತ್ತಿತರ ಮುಖಂಡರು ಇದ್ದರು.