ನೂತನ ಜಿಲ್ಲಾಧಿಕಾರಿ ಸಂಗಪ್ಪ ಎಂ. ಅಧಿಕಾರ ಸ್ವೀಕಾರ

Published on

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಂಗಪ್ಪ ಎಂ. ಬುಧವಾರ ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಪುಷ್ಪ ನೀಡಿ ಸ್ವಾಗತಿಸುವ ಮೂಲಕ ಅಧಿಕಾರವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶೀಧರ ಕುರೇರ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪವಿಭಾಗಾಧಿಕಾರಿಗಳಾದ ಸಂತೋಷ ಜಗಲಾಸರ, ಶ್ವೇತಾ ಬೀಡಿಕರ ಸೇರಿದಂತೆ ಆಯಾ ತಾಲೂಕಿನ ತಹಶೀಲ್ದಾರರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಪುಷ್ಪ ಅರ್ಪಿಸಿ ನೂತನ ಜಿಲ್ಲಾಧಿಕಾರಿಯನ್ನು ಸ್ವಾಗತಿಸಿದರು.

ನೂತನ ಜಿಲ್ಲಾಧಿಕಾರಿಗಳು ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನವರಾಗಿದ್ದು, ಪ್ರಾಥಮಿಕ ಶಿಕ್ಷಣವನ್ನು ಬೀಳಗಿ, ಮುಧೋಳ, ಬಾಗಲಕೋಟೆಯಲ್ಲಿ ಮುಗಿಸಿದ್ದಾರೆ. ಮಾದ್ಯಮಿಕ ಹಾಗೂ ಕಾಲೇಜು ಶಿಕ್ಷಣವನ್ನು ಬಾಗಲಕೋಟೆ ಬಸವೇಶ್ವರ ಮಹಾವಿದ್ಯಾಲಯದಲ್ಲಿ ಪಡೆದು ಎಂ.ಎಸ್.ಸಿ ಮೈಕ್ರೋ ಬಯಾಲಜಿಯನ್ನು ಬೆಂಗಳೂರಿನ ಜಿ.ಕೆ.ವಿ.ಕೆ ಮಹಾವಿದ್ಯಾಲಯದಲ್ಲಿ ಮುಗಿಸಿದ್ದಾರೆ.

2007ರಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ (ಎಸ್.ಎಲ್.ಓ) ಮುನಿರಾಬಾದ್, ಮೈಬೂನ ನಗರ ರೈಲ್ವೆ ಯೋಜನೆಯಲ್ಲಿ ಕಾರ್ಯನಿರ್ವಹಿಸಿದ್ದಾರೆ. 2009ರಲ್ಲಿ ಗುಲಬರ್ಗಾದ ಉಪವಿಭಾಗಾಧಿಕಾರಿ, ಬೆಂಗಳೂರಿನ ಕೆಐಡಿಬಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ, ನಂತರ ಬಿಬಿಎಂಪಿ ಚುನಾವಣಾ ವಿಭಾಗದ ಉಪವಿಭಾಗ ಅಧಿಕಾರಿಯಾಗಿ, ಬೆಂಗಳೂರಿನ ಆರ್‍ಟಿಐ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಕೋಲ್ಹಾರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ, ನಂತರ 2014ರಲ್ಲಿ ವೈದ್ಯಕೀಯ ಶಿಕ್ಷಣ ಸಚಿವರ ಆಪ್ತ ಕಾರ್ಯದರ್ಶಿಗಳಾಗಿ ಸಹ ಕೆಲಸ ನಿರ್ವಹಿಸಿದ್ದಾರೆ.

ಬೆಂಗಳೂರಿನ ಬುಡಕಟ್ಟು ಕಲ್ಯಾಣ ಇಲಾಖೆಯ ನಿರ್ದೇಶಕರಾಗಿ, 2016ರಲ್ಲಿ ಬೆಂಗಳೂರು ನಗರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಹಾಗೂ ಬೆಂಗಳೂರು ನಗರ ಹೆಚ್ಚುವರಿ (ಪ್ರಭಾರ) ಜಿಲ್ಲಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ನಂತರ ಕಿಯೋನಿಕ್ಸ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ, ಸುವರ್ಣ ಆರೋಗ್ಯ ಟ್ರಸ್ಟ್‍ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ, ಸದ್ಯ ಬಾಗಲಕೋಟೆ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net