

ಹಾಸನ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂಚರಿಸುತ್ತಿರುವ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಶುಕ್ರವಾರ ಹಾಸನದಿಂದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ನೂರಾರು ವಾಹನಗಳಲ್ಲಿ ಪ್ರಯಾಣ ಬೆಳೆಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿಗೆ ಬೆಳಗ್ಗೆಯಿಂದಲೇ ಜಿಲ್ಲೆಯ ವಿವಿಧೆಡೆಯಿಂದ ಕಾರ್ಯಕರ್ತರು ಸೇರಲಾರಂಭಿಸಿದರು. ಕಾರ್ಯಕರ್ತರಿಗೆ ಬೆಳಗಿನ ಉಪಾಹಾರ ಮತ್ತು ಮಧ್ಯಾಹ್ನಕ್ಕೆ ಮುಖಂಡರು ಊಟದ ವ್ಯವಸ್ಥೆ ಮಾಡಿದ್ದರು.
ಈ ಸಂದರ್ಭದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಹಾಸನ ಜಿಲ್ಲಾ ಉಸ್ತುವಾರಿ ಆಗಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ್, ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದುವರೆಗೂ ಯಾವ ರಾಜಕೀಯ ಪಕ್ಷವೂ ನಡೆಸದ ಪಾದಯಾತ್ರೆಯನ್ನು ದೇಶದ ಭರವಸೆಯ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ನಡೆಸುತ್ತಿದೆ ಎಂದರು.
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು 151 ದಿನಗಳ ಕಾಲ ನಡೆಯುವ 3,500 ಕಿ.ಮೀ. ಪಾದಯಾತ್ರೆ ಈಗ ಕರ್ನಾಟಕದಲ್ಲಿ ಸಂಚರಿಸುತ್ತಿದೆ. ರಾಜ್ಯದಲ್ಲಿ ಪಾದಯಾತ್ರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಜಾತಿ, ಮತ, ಧರ್ಮ, ಭಾಷೆಗಳ ಹೆಸರಲ್ಲಿ ಜನರನ್ನು ವಿಭಜಿಸುತ್ತಿರುವುದನ್ನು ತಡೆದು ಸೌಹಾರ್ದ, ಸಹಬಾಳ್ವೆಯ ಸಂದೇಶ ನೀಡಿ ಭಾರತವನ್ನು ಒಗ್ಗೂಡಿಸುವ ಉದ್ದೇಶದಿಂದ ಪಕ್ಷಾತೀತವಾಗಿ ಈ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಯಾವುದೇ ರಾಜಕೀಯ ಆಸೆ ಇಲ್ಲದೆ, ಕೇವಲ ಜನರ ಒಳಿತಿಗಾಗಿ ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್ ಮಾರ್ಗದಲ್ಲಿ ರಾಹುಲ್ ಗಾಂಧಿ ಪಾದಯಾತ್ರೆ ನಡೆಸುತ್ತಿದ್ದಾರೆ. ಈ ಮಹತ್ವದ ಯಾತ್ರೆಗೆ ಜತೆಯಾಗಲು ಹಾಸನ ಜಿಲ್ಲೆಯಿಂದ ಸಾವಿರಾರು ಕಾರ್ಯಕರ್ತರು ತೆರಳುತ್ತಿರುವುದು ಹೆಮ್ಮೆಯ ಸಂಗತಿ. ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ದೇಶದಲ್ಲಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.