ನೂರೇ ದಿನದಲ್ಲಿ ಕಾಂಗ್ರೆಸ್ ಬಗ್ಗೆ ವಿಶ್ವಾಸವಿಲ್ಲ

A. Narayanaswamy
Published on

ಚಿತ್ರದುರ್ಗ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ನೂರೇ ದಿನಕ್ಕೆ ವಿಶ್ವಾಸ ಕಳೆದುಕೊಂಡಿದೆ. ಅಭಿವೃದ್ಧಿ ಸಂಪೂರ್ಣ ಕುಂಠಿತವಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಾರಿಯಾದ ನಾಲ್ಕು ಗ್ಯಾರಂಟಿ ಪೈಕಿ ಎರಡನ್ನೂ ಜನರಿಗೆ ತಲುಪಿಸುವಲ್ಲಿ ಕಾಂಗ್ರೆಸ್ ನಾಯಕರು ವಿಫಲರಾಗಿದ್ದಾರೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ದೂರಿದರು.

ಸಾಮಾಜಿಕ ನ್ಯಾಯದ ಪರಿಕಲ್ಪನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಲ್ಲ. ಸಮಾಜವಾದ ಕೇವಲ ಬಾಯಿ ಮಾತಿಗೆ ಸೀಮಿತವಾಗಿದೆ. ಇದನ್ನು ಬಿಜೆಪಿ, ಜೆಡಿಎಸ್ ನಾಯಕರು ಹೇಳುತ್ತಿಲ್ಲ. ಕಾಂಗ್ರೆಸ್‌ನ ಪ್ರಭಾವಿ ನಾಯಕ ಹರಿಪ್ರಸಾದ್ ಅವರೇ ಬಹಿರಂಗವಾಗಿ ಹೇಳಿದ್ದಾರೆ ಎಂದರು.

ಕಾಂಗ್ರೆಸ್‌ಗೆ 136 ಸೀಟು ನೀಡಿದರೂ ನಾಡಿನ ಜನತೆಗೆ ಆ ಪಕ್ಷದ ಮೇಲಿನ ವಿಶ್ವಾಸ ಹೋಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ನ ದುರಾಡಳಿತ ಮುಂದುವರೆದಿದೆ. ಅವರದೇ ಪಕ್ಷದ ಶಾಸಕರ, ಎಂಎಲ್ಸಿಗಳ ಗುಂಪೊಂದು ಆಡಳಿತ, ವರ್ಗಾವಣೆ ಕುರಿತು ಜನಪ್ರತಿನಿಧಿಗಳಿಗೆ ಗೌರವ ಕೊಡುತ್ತಿಲ್ಲವೆಂದು ಹೇಳಿಕೆ ನೀಡಿದೆ ಎಂದು ಪ್ರತಿಕ್ರಿಯಿಸಿದರು.

ಬಿಜೆಪಿಗೆ ದೇಶದ ಅಭಿವೃದ್ಧಿ ದೃಷ್ಟಿಕೋನ ಮುಖ್ಯ. ಹೀಗಾಗಿ ರಾಜ್ಯದಲ್ಲೂ ಬಿಜೆಪಿ, ಜೆಡಿಎಸ್‌ನೊಂದಿಗೆ ಮೈತ್ರಿಯಾಗಲು ಮುಂದಾಗಿದೆ. ಆ ಪಕ್ಷದ ಹಿರಿಯ ನಾಯಕರಾದ ಎಚ್.ಡಿ.ದೇವೇಗೌಡರು ಸಹಮತ ವ್ಯಕ್ತಪಡಿಸಿದ್ದಾರೆ. ಇದು ಹೊಂದಾಣಿಕೆ ರಾಜಕೀಯವಲ್ಲ ಎಂದು ಸ್ಪಷ್ಟಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net