ನೊಂದವರ ಬದುಕಿಗೆ ಗ್ರಾಮಾಭಿವೃದ್ಧಿ ಯೋಜನೆ ಆಶಾಕಿರಣ

darmastala bc trust
Published on

 ಆಲೂರು: ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡುವ ಮೂಲಕ ನೊಂದವರ ಬದುಕಿಗೆ ನೆರವಾಗಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚಟುವಟಿಕೆ ಶ್ಲಾಘನೀಯ ಎಂದು ಶಿಕ್ಷಣ ಸಂಯೋಜಕ ರವಿಕಿರಣ್ ಅಭಿಪ್ರಾಯಪಟ್ಟರು.

ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಶೈಕ್ಷಣಿಕವಾಗಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವುದು, ವಸತಿರಹಿತರಿಗೆ ವಸತಿ ನಿರ್ಮಾಣಕ್ಕೆ ಆರ್ಥಿಕ ಸಹಾಯ ಒದಗಿಸುವುದು, ಗ್ರಾಮೀಣ ಪ್ರದೇಶಗಳಲ್ಲಿ ಸಮುದಾಯ ಭವನಗಳ ನಿರ್ಮಾಣ, ವೃದ್ಧರಿಗೆ ಮಾಶಾಸನ, ಅಂಗವಿಕಲರಿಗೆ ಪರಿಕರಗಳ ವಿತರಣೆ, ಡೇರಿಗಳ ಕಟ್ಟಡ ನಿರ್ಮಾಣಕ್ಕೆ ಸಹಾಯಧನ ಸೇರಿದಂತೆ ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾಡಲಾಗುತ್ತಿದೆ. ಕಾರ್ಯಕ್ರಮಗಳ ಪ್ರಯೋಜನವನ್ನು ಸದ್ಬಳಕೆ ಮಾಡಿಕೊಂಡು ಜನರು ಅಭಿವೃದ್ಧಿ ಹೊಂದಬೇಕು ಎಂದರು.

ಯೋಜನೆಯ ಹಾಸನ ಜಿಲ್ಲಾ ನಿರ್ದೇಶಕ ಸುರೇಶ್ ಮೊಯ್ಲಿ ಮಾತನಾಡಿ, ಪ್ರತಿಯೊಂದು ಕುಟುಂಬ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕೆಂಬ ನಿಟ್ಟಿನಲ್ಲಿ ಅತಿ ಕಡಿಮೆ ಬಡ್ಡಿದರದಲ್ಲಿ ಪ್ರಗತಿ ನಿಧಿ ಸಾಲ ಸೌಲಭ್ಯವನ್ನು ನೀಡಿ ಸ್ವಾವಲಂಬಿಯಾಗಿ ಬದುಕಲು ನೆರವು ನೀಡಿದೆ. ಬಡ ವಿದ್ಯಾರ್ಥಿಗಳು ವೃತ್ತಿಪರ ಶಿಕ್ಷಣ, ಉನ್ನತ ಉದ್ಯೋಗ ಪಡೆಯಬೇಕು ಎಂದು ಉದ್ದೇಶದಿಂದ ಸಂಘದ ಸದಸ್ಯರ ಮಕ್ಕಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ನೀಡಲಾಗುತ್ತಿದೆ ಎಂದು ತಿಳಿಸಿದರು.

ಆಲೂರು ತಾಲೂಕು ಯೋಜನಾಧಿಕಾರಿ ರತ್ನಾಕರ ಕೊಠಾರಿ, ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯರಾದ ಮಲ್ಲಿಕಾರ್ಜುನ್, ಮೋಹನ್ ಮಾವನೂರು, ಧರ್ಮರಾಜ್, ರಾಜಶೇಖರ್, ಬಾಲಕೃಷ್ಣ ಶೆಟ್ಟಿ, ಕೃಷಿ ಮೇಲ್ವಿಚಾರಕ ವಿಘ್ನೇಶ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸರಸ್ವತಿ, ಆಂತರಿಕ ಲೆಕ್ಕ ಪರಿಶೋಧಕಿ ಶ್ವೇತಾ, ಕಚೇರಿ ಸಹಾಯ ಪ್ರಬಂಧಕ ಸುಶಾಂತ್, ವಿದ್ಯಾರ್ಥಿಗಳು, ಪಾಲಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net