

ಶ್ರೀರಂಗಪಟ್ಟಣ: ರಾಜ್ಯ ಸರ್ಕಾರ ಕನ್ನಂಬಾಡಿ ಅಣೆಕಟ್ಟೆಯಿಂದ ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರನ್ನು ನಿಲ್ಲಿಸಿ ನಾಡಿನ ರೈತರ ಹಿತಕಾಯಬೇಕು ಎಂದು ಆಗ್ರಹಿಸಿ ತಾಲೂಕು ವಕೀಲರ ಸಂಘದ ಸದಸ್ಯರು ನ್ಯಾಯಾಲಯ ಕಲಾಪ ಬಹಿಷ್ಕರಿಸಿ ಪ್ರತಿಭಟಿಸಿದರು.
ಪಟ್ಟಣದ ನ್ಯಾಯಾಲಯ ಸಂಕೀರ್ಣದಿಂದ ಮೆರವಣಿಗೆ ಮೂಲಕ ಆಗಮಿಸಿದ ವಕೀಲರು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಹಿರಿಯ ವಕೀಲ ಜಯಸ್ವಾಮಿ ಮಾತನಾಡಿ, ಚುನಾವಣೆಗೂ ಮುನ್ನ ಕಾವೇರಿ ಹಾಗೂ ಮೇಕೆದಾಟು ವಿಚಾರದಲ್ಲಿ ಪಾದಯಾತ್ರೆ ನಡೆಸಿ ಹೋರಾಟ ಮಾಡಿದ್ದ ಸಚಿವ ಡಿ.ಕೆ.ಶಿವಕುಮಾರ್ ಅವರು ನೀರಾವರಿ ಮಂತ್ರಿಯಾಗಿ ತಮಿಳುನಾಡಿಗೆ ನೀರು ಹರಿಸಿ ರಾಜ್ಯದ ರೈತರಿಗೆ ಅನ್ಯಾಯ ಎಸಗುತ್ತಿರುವುದು ಸರಿಯಲ್ಲ. ಕನ್ನಡದ ಚಿತ್ರರಂಗದ ನಟರು ರೈತರ ಪರ ಹೋರಾಟಕ್ಕೆ ಆಗಮಿಸಬೇಕು. ನೀರು ನಿಲ್ಲಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದರು.
ಬಳಿಕ ಚುನಾವಣಾ ವಿಭಾಗದ ಶಿರಸ್ತೇದಾರ್ ನೇತ್ರಾವತಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ತಾಲೂಕು ವಕೀಲರ ಸಂಘದ ಅಧ್ಯಕ್ಷ ಸತ್ಯನಾರಾಯಣ, ಕಾರ್ಯದರ್ಶಿ ಚಂದ್ರೇಗೌಡ, ಖಜಾಂಜಿ ವಿನಯ್, ಹಿರಿಯ ವಕೀಲರಾದ ರಾಜಶೇಖರ್, ಶಿವರಾಜು, ಗಂಗರಾಜು, ವಕೀಲರಾದ ರವೀಶ್, ಶಿವರಾಮು, ಬಾಲರಾಜು, ಮರೀಗೌಡ ಇದ್ದರು.