ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿ

29Rajesh8
Published on

ಚಾಮರಾಜನಗರ: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ಚೆಲ್ಲಬೇಕು ಎಂದು ಎಂ.ಎಸ್.ಐ.ಎಲ್ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.

ತಾಲೂಕಿನ ಭೋಗಾಪುರದಲ್ಲಿರುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾವಿತ್ರಿ ಬಾಯಿ ಫುಲೆ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ ವೇದಿಕೆ, ಕ್ರೀಡೆ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಸಮಾರೋಪ ಸಮಾರಂಭ ಸಾಂಸ್ಕೃತಿಕ ಸಂಭ್ರಮ-ಜನಪದೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಓದುವುದರ ಜೊತೆಗೆ ಕಲೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಕ್ರೀಡೆಗಳಲ್ಲಿಯೂ ತೊಡಗಿಸಿಕೊಳ್ಳಬೇಕು. ಪ್ರಾಥಮಿಕ ತರಗತಿಯಿಂದ ಕಾಲೇಜು ವರೆಗಿನ ವ್ಯಾಸಂಗದವರೆಗೂ ಸಂಸ್ಕೃತಿ, ಕಲೆ, ಆಟೋಟ, ಮನರಂಜನೆ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಶಾಲಾ ಹಂತದಲ್ಲಿ ಪ್ರತಿಭಾ ಕಾರಂಜಿಗಳಂತ ಕಾರ್ಯಕ್ರಮಗಳನ್ನು ಶಿಕ್ಷಣ ಇಲಾಖೆ ನಡೆಸುತ್ತದೆ. ಇಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ವಸತಿಯುಕ್ತ ಕಾಲೇಜಿಗೆ ಬಾಕಿ ಇರುವ ಮೂಲ ಸೌಕರ್ಯಗಳನ್ನು ಒದಗಿಸಿಕೊಡಲಾಗುವುದು. ಜಿಲ್ಲೆಯ ಅಭಿವೃಧ್ದಿಗೆ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ. ಕುಡಿಯುವ ನೀರು, ಕ್ರೀಡಾಂಗಣ ಅಭಿವೃದ್ದಿ, ಕೆರೆಗಳಿಗೆ ನೀರು ತುಂಬಿಸುವುದು ಸೇರಿದಂತೆ ಇನ್ನಿತರ ಅಭಿವೃದ್ದಿ ಕಾರ್ಯಗಳಿಗೆ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಎಂ.ಮುನಿರಾಜು ಮಾತನಾಡಿ, ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿಯೂ ಕ್ರಿಯಾಶೀಲರಾಗಿದ್ದಾಗ ಪರಿಪೂರ್ಣ ವಿದ್ಯಾರ್ಥಿಗಳಾಗಲು ಸಾಧ್ಯ ಎಂದರು. ಚಾಮರಾಜನಗರ ಜೆ.ಎಸ್.ಎಸ್. ಮಹಿಳಾ ಕಾಲೇಜಿನ ಪ್ರಾಧ್ಯಾಪಕಿ ಆ. ಎ.ಆರ್. ಸುಷ್ಮಾ ಮುಖ್ಯ ಭಾಷಣ ಮಾಡಿದರು. ಪಿ.ಎ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ನಾಗೇಂದ್ರ ಮೂರ್ತಿ, ಭೋಗಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ, ಉಪಾಧ್ಯಕ್ಷೆ ಮಂಗಳಮ್ಮ, ಸದಸ್ಯರಾದ ರಾಜಮ್ಮ, ನಾಗಮ್ಮ, ಪುಟ್ಟಗೌರಮ್ಮ, ಕರ್ನಾಟಕ ಜಾನಪದ ಅಕಾಡೆಮಿ ಮಾಜಿ ಸದಸ್ಯ ಸಿ.ಎಂ. ನರಸಿಂಹಮೂರ್ತಿ ಮತ್ತು ಇತರರು ಉಪಸ್ಥಿತರಿದ್ದರು.

ಓದಿನಿಂದ ಮಾತ್ರವೇ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗುವುದಿಲ್ಲ. ವಿದ್ಯಾರ್ಥಿಗಳು ಕೌಶಲ, ಪಠ್ಯೇತರ ಚಟುವಟಿಕೆಗಳಲ್ಲಿಯೂ ಆಸಕ್ತಿ ಹೊಂದಿದಾಗ ಬದುಕು ಕಟ್ಟಿಕೊಟ್ಟಿಕೊಳ್ಳಲು ಅನುಕೂಲವಾಗಲಿದೆ. ಆಧುನಿಕ ಬೆಳವಣಿಗೆಯ ಯುಗದಲ್ಲಿ ವಿದ್ಯಾರ್ಥಿಗಳು ಸಿಗುವ ಅವಕಾಶಗಳನ್ನು ಬಳಸಿಕೊಂಡು ಯಶಸ್ವಿಯಾಗಿ ಮುಂದೆ ಬರಬೇಕು. ಡಾ.ಪಿ.ದೇವರಾಜು, ಕಾಲೇಜು ಪ್ರಾಂಶುಪಾಲ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net