ಚಾಮರಾಜನಗರ : ವಿದ್ಯಾರ್ಥಿನಿಯರು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಒತ್ತು ನೀಡಿ ಎಂದು ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಸಲಹೆ ನೀಡಿದರು.
ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಆಯೋಜಿಸಿದ್ದ 2025-26 ನೇ ಸಾಲಿನ ಸಾಂಸ್ಕೃತಿಕ, ರಾಷ್ಟ್ರೀಯ ಸೇವಾ ಯೋಜನೆ, ರೆಡ್ ಕ್ರಾಸ್, ರೇಂಜರ್ಸ್ ಮತ್ತು ರೋವರ್ಸ್ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣ ಮಾಡಬೇಕು. ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿನಿಯರು ಉತ್ತಮಜೀವನ್ನು ರೂಪಿಸಿಕೊಳ್ಳಬಹುದಾಗಿದೆ. ಇದು ಉತ್ತಮವಾದ ಶಿಕ್ಷಣ ಪಡೆಯಲು ಸಹಕಾರಿಯಾಗಲಿದೆ ಎಂದರು.
ನಮ್ಮ ಜಿಲ್ಲೆಯ ಹೆಣ್ಣುಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾಜಿ ಸಂಸದ ದಿ.ಧ್ರುವನಾರಾಯಣ್ ಹಾಗೂ ನನ್ನಯ ಒತ್ತಡದಿಂದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾರಂಭವಾಯಿತು. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ 10 ಕೋಟಿ ರೂ, ಅನುದಾನ ಬಿಡುಗಡೆಯಾಗಿದ್ದು, ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣ ಕಾರ್ಯವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ಸಾಂಸ್ಕೃತಿಕ ಸಮಿತಿ ಸಂಚಾಲಕ ಸಿ.ಶೈಲೇಶ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪಠ್ಯವನ್ನು ಓದಿಕೊಂಡು ವಿಕಾಸವಾಗದೇ, ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಇಂತಹ ಕಾರ್ಯಕ್ರಮ ಸಹಕಾರಿಯಾಗಿದೆ. ಈ ಮೂಲಕ ಸಮಾಜದ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕಿದೆ. ಕಾಲೇಜಿನಲ್ಲಿ ಮತ್ತೊಂದು ಎನ್‌ಎಸ್‌ಎಸ್ ಘಟಕ ಸ್ಥಾಪನೆ ಮಾಡಲು ಕ್ರಮವಹಿಸಲಾಗಿದೆ. ವಿವಿಧ ಸಮಿತಿಗಳು ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದೆ. ವಿದ್ಯಾರ್ಥಿನಿಯರು ಕೂಡ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ಚೇತವನದ ಮನೋರಖ್ಖಿತ ಭಂತೇಜಿ ಸಾನಿಧ್ಯ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಎಸ್.ಮಹಾದೇವಸ್ವಾಮಿ, ನಿವೃತ್ತ ಪ್ರಾಂಶುಪಾಲ ಪ್ರೊ.ಮಲ್ಲಿಕಾರ್ಜುನಸ್ವಾಮಿ, ನೃತ್ಯ ಕಲಾವಿದೆ ಹರಿಣಾಕ್ಷಿ, ಎನ್‌ಎಸ್‌ಎಸ್ ಸಂಚಾಲಕಿ ಎಸ್.ಆರ್.ದೀಪಾ, ಕ್ರೀಡಾ ಸಮಿತಿ ಸಂಚಾಲಕ ಡಾ.ಶಾಂತರಾಜು, ರೆಡ್‌ಕ್ರಾಸ್ ಸಮಿತಿ ಸಂಚಾಲಕ ಡಾ.ಆರ್.ಪ್ರಸಾದ್, ರೇಂಜರ್ಸ್ ಮತ್ತು ರೋವರ್ಸ್ ಸಂಚಾಲಕಿ ಎಸ್.ಕೃಪಾ, ಪತ್ರಾಂಕಿತ ವ್ಯವಸ್ಥಾಪಕಿ ಜಿ.ಎನ್.ಸಾಕಮ್ಮ, ವಿದ್ಯಾರ್ಥಿ ಸಂಘ ಅಧ್ಯಕ್ಷೆ ಎಚ್.ಎಂ.ಅಂಜಲಿ ಹಾಗೂ ಇತರರು ಉಪಸ್ಥಿತರಿದ್ದರು.