ಪಠ್ಯೇತರ ಚಟುವಟಿಕೆಯಲ್ಲೂ ಕ್ರಿಯಾಶೀಲರಾಗಿ

21-kgl photo2
Published on

ಕೊಳ್ಳೇಗಾಲ: ಚಾಮರಾಜನಗರ ಜಿಲ್ಲೆ ಸಾಂಸ್ಕೃತಿಕವಾಗಿ ಶ್ರೀಮಂತವಾಗಿದ್ದು, ಇಲ್ಲಿನ ವಿದ್ಯಾರ್ಥಿಗಳು ಪಠ್ಯದಲ್ಲಿ ಮಾತ್ರವಲ್ಲದೆ, ಪಠ್ಯೇತರ ಚಟುವಟಿಕೆಗಳಲ್ಲೂ ಕ್ರಿಯಾಶೀಲರಾಗಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಪ್ರಸನ್ನ ಕಿವಿಮಾತು ಹೇಳಿದರು.


ಪಟ್ಟಣದ ನಿಸರ್ಗ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಪದವಿ ಪೂರ್ವ ಶಿಕ್ಷಣ ಇಲಾಖೆ, ನಿಸರ್ಗ ಸ್ವತಂತ್ರ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಆಯೋಜಿಸಲಾಗಿದ್ದ 2022-23ನೇ ಸಾಲಿನ ಜಿಲ್ಲಾ ಮಟ್ಟದ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.


22 ವರ್ಷಗಳ ಕಾಲ ಜಿಲ್ಲೆಯಲ್ಲಿ ಉಪನ್ಯಾಸಕ, ಪ್ರಾಂಶುಪಾಲನಾಗಿ ಸೇವೆ ಸಲ್ಲಿಸಿರುವ ನಾನು ಈ ಭಾಗದ ವಿದ್ಯಾರ್ಥಿಗಳ ಪ್ರತಿಭೆಯನ್ನು ಗಮನಿಸಿದ್ದೇನೆ. ಜಿಲ್ಲಾ ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳು ವಿಭಾಗೀಯ, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಲಿದ್ದಾರೆ ಎಂದರು.


ಪ್ರತಿ ವರ್ಷವೂ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ ಜವಾಬ್ದಾರಿಯನ್ನು ನಿಸರ್ಗ ಸ್ವತಂತ್ರ ಪದವಿ ಪೂರ್ವ ಕಾಲೇಜು ಹೊರುವುದು ಶ್ಲಾಘಿಸುವ ವಿಚಾರ. ಅದಕ್ಕಾಗಿ ಆಡಳಿತ ಮಂಡಳಿಗೆ ಧನ್ಯವಾದ ಅರ್ಪಿಸುದಾಗಿ ತಿಳಿಸಿದರು.


ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಎಸ್.ಪ್ರಮೋದ್, ಕಾರ್ಯದರ್ಶಿ ಬಸವರಾಜಪ್ಪ, ಖಜಾಂಚಿ ಮರಿಸ್ವಾಮಿ, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಆರ್.ಪಿ.ನರೇಂದ್ರನಾಥ್, ನಿವೃತ್ತ ಪ್ರಾಂಶುಪಾಲ ನಾಗಮಲ್ಲಪ್ಪ, ಮಾನಸ ಶಿಕ್ಷಣ ಸಂಸ್ಥೆಯ ಸಂಯೋಜನಾಧಿಕಾರಿ ಟಿ.ಎಸ್.ರಾಮಕೃಷ್ಣ, ನಿಸರ್ಗ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ.ಕೃಷ್ಣೇಗೌಡ ಹಾಗೂ ಜಿಲ್ಲೆ ವಿವಿಧ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net