ಪತ್ನಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ

3 smg maheshkumar
Published on

ಶಿವಮೊಗ್ಗ: ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದ ಪತಿಗೆ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶನಿವಾರ ಜೀವಾವಧಿ ಶಿಕ್ಷೆ ಮತ್ತು 40 ಸಾವಿರ ರೂ. ದಂಡ ವಿಧಿಸಿದೆ.

ಶಿರಾಳಕೊಪ್ಪ ಸಮೀಪದ ಬಿಳಕಿ ಗ್ರಾಮದ ಮಹೇಶಕುಮಾರ್ (31) ಜೀವಾವಧಿ ಶಿಕ್ಷೆಗೆ ಒಳಗಾದ ವ್ಯಕ್ತಿ. ಈತ 2020ರ ಏ.13ರಂದು ರಾತ್ರಿ ಪತ್ನಿ ಮಂಗಳಾ ಅಲಿಯಾಸ್ ಚೈತ್ರಾ (28)ಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದ.

ದಂಪತಿಗೆ ಮದುವೆಯಾಗಿ ಆರು ವರ್ಷವಾಗಿತ್ತು. ಆದರೂ ಮಕ್ಕಳಾಗಿರಲಿಲ್ಲ. ಇದರಿಂದ ಸಿಟ್ಟಿಗೆದ್ದ ಮಹೇಶಕುಮಾರ್, ಪತ್ನಿ ಮಂಗಳಾ ಅವರನ್ನು ಮಲಗಿದ್ದ ವೇಳೆ ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಈ ಬಗ್ಗೆ ಶಿರಾಳಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿಯಾಗಿದ್ದ ಶಿಕಾರಿಪುರ ವೃತ್ತದ ಸಿಪಿಐ ಬಸವರಾಜ್ ಅವರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಷಣ ಪಟ್ಟಿ ಸಲ್ಲಿಸಿದ್ದರು.

ಶನಿವಾರ ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಎಸ್.ಮಾನು ಅವರು ಆರೋಪ ಸಾಬೀತಾದ ಹಿನ್ನಲೆಯಲ್ಲಿ ಮಹೇಶಕುಮಾರ್‌ಗೆ ಜೀವಾವಧಿ ಶಿಕ್ಷೆ ಮತ್ತು 40 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿಯಾಗಿ ನಾಲ್ಕು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ನೀಡಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶಾಂತರಾಜ್ ಅವರು ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net