ಪತ್ರಕರ್ತರಿಗೆ ಗುರುತಿನಚೀಟಿ ವಿತರಣೆ- ಮೂಲಸೌಕರ್ಯ ಒದಗಿಸಲು ಯತ್ನ

card.jpg
Published on

ದಾವಣಗೆರೆ: ಸರ್ಕಾರದಿಂದ ಪತ್ರಕರ್ತರಿಗೆ ನಿವೇಶನ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ದೊರಕಿಸಲು ಸೌಲಭ್ಯ ದೊರಕಿಸಲು ಪ್ರಯತ್ನಿಸುವುದಾಗಿ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಭರವಸೆ ನೀಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ನಗರದ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ಶನಿವಾರ ಸಂಘದ ಸದಸ್ಯರಿಗೆ ಗುರುತಿನ ಚೀಟಿ ವಿತರಣಾ ಕಾರ‌್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಬಹಳಷ್ಟು ಜನ ಪತ್ರಕರ್ತರು ಸ್ವಂತ ನಿವೇಶನ ಹಾಗೂ ಸೂರಿಲ್ಲದೆ ಬಾಡಿಗೆ ಮನೆಯಲ್ಲಿ ಕಷ್ಟದ ಜೀವನ ನಡೆಸುತ್ತಿದ್ದಾರೆ. ಅರ್ಹ ಪತ್ರಕರ್ತರನ್ನು ಗುರುತಿಸಿ ಸಂಘದಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದರೆ ಅಗತ್ಯ ಜಮೀನು ಖರೀದಿಸಲು ಚರ್ಚೆ ನಡೆಸುವುದಾಗಿ ತಿಳಿಸಿದರು.

ಪತ್ರಕರ್ತರು ಆರ್ಥಿಕ ಪ್ರಗತಿ ಹೊಂದಲು ಪತ್ರಿಕಾ ವೃತ್ತಿ ನಡೆಸುವ ಜತೆಗೆ ಪ. ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ನಿಗಮಗಳಲ್ಲಿ ಸಾಲ ಸೌಲಭ್ಯ ಪಡೆದು ಸಣ್ಣ ಉದ್ಯಮ ನಡೆಸಲು ಮುಂದಾಗಬೇಕು ಎಂದು ಹೇಳಿದರು.

ದಾವಣಗೆರೆ ಪಾಲಿಕೆ ಆಯುಕ್ತೆ ರೇಣುಕಾ ಪತ್ರಕರ್ತರಿಗೆ ಗುರುತಿನ ಚೀಟಿ ವಿತರಿಸಿ ಮಾತನಾಡಿ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪತ್ರಿಕಾ ಭವನಗಳಿವೆ. ದಾವಣಗೆರೆ ಜಿಲ್ಲೆಯಲ್ಲಿ ಭವನ ನಿರ್ಮಾಣಕ್ಕೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಬೇಕು. ಸಂಘದ ಚಟುವಟಿಕೆಗಳಿಗೆ ಮಹಾನಗರ ಪಾಲಿಕೆಯಿಂದ ತಾತ್ಕಾಲಿಕ ಕೊಠಡಿ ನೀಡುವುದಾಗಿ ತಿಳಿಸಿದರು.

ಮಹಾನಗರ ಪಾಲಿಕೆ ಬಜೆಟ್‌ನಲ್ಲಿ ಪತ್ರಕರ್ತರಿಗಾಗಿ 10 ಲಕ್ಷ ರೂ. ಆರೋಗ್ಯನಿಧಿ ಮೀಸಲಿರಿಸಲಾಗಿದೆ. ಪ. ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗದವರು ನಿವೇಶನ ಹೊಂದಿದ್ದರೆ ಮನೆ ಕಟ್ಟಿಕೊಳ್ಳಲು 3 ಲಕ್ಷ ರೂ. ನೀಡಲಾಗುತ್ತದೆ. ನಿವೇಶನ ಇಲ್ಲದ ಅರ್ಹರ ಪಟ್ಟಿ ನೀಡಿದರೆ ನಿವೇಶನ ಒದಗಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್ ಮಾತನಾಡಿ, ಜಿಲ್ಲೆಯಲ್ಲಿ ಬರುವ ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ 38ನೇ ರಾಜ್ಯ ಸಮ್ಮೇಳನ ಆಯೋಜಿಸಲಾಗಿದ್ದು, ಸುಮಾರು 5 ಸಾವಿರ ಸದಸ್ಯರು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಉದ್ಯಮಿ ಅಣಬೇರು ರಾಜಣ್ಣ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 20 ಸಾವಿರ ರೂ. ನೀಡಿದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಇ.ಎಂ. ಮಂಜುನಾಥ್ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತನಾಡಿದರು. ಸಂಘದ ರಾಜ್ಯ ಸಮಿತಿ ಸದಸ್ಯ ಕೆ. ಚಂದ್ರಪ್ಪ, ರಾಷ್ಟ್ರೀಯ ಮಂಡಳಿ ಸದಸ್ಯ ಎಸ್.ಕೆ. ಒಡೆಯರ್, ಚಿತ್ರದುರ್ಗ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಇತರರು ಇದ್ದರು.

ಸಂಘದ ನಿರ್ದೇಶಕ ವೇದಮೂರ್ತಿ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ‌್ಯದರ್ಶಿ ಪಕೃದ್ದೀನ್ ನಿರೂಪಿಸಿದರು, ಖಜಾಂಚಿ ಎನ್.ವಿ. ಬದರೀನಾಥ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net