

ಹೂವಿನಹಡಗಲಿ: ಸಾಮಾಜಿಕ ಜಾಲತಾಣಗಳಿಂದ ಸಮಾಜದಲ್ಲಿ ಸಾಕಷ್ಟು ಗೊಂದಲಗಳು ಸೃಷ್ಟಿಯಾಗುತ್ತಿವೆ ಎಂದು ಗವಿಮಠದ ಡಾ.ಹಿರಿಶಾಂತವೀರ ಸ್ವಾಮೀಜಿ ಹೇಳಿದರು.
ಪಟ್ಟಣದ ಜಿಬಿಆರ್ ಕಾಲೇಜಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಬುಧವಾರ ಮಾತನಾಡಿದರು. ಯುವಜನತೆ ಮೊಬೈಲ್ ಗೀಳಿನಿಂದ ಹೊರಬಂದು ಪತ್ರಿಕೆಗಳನ್ನು ಓದುವ ಮೂಲಕ ಜ್ಞಾನ ಬೆಳೆಸಿಕೊಳ್ಳಬೇಕು ಎಂದರು.
ಸಂಘದ ಜಿಲ್ಲಾಧ್ಯಕ್ಷ ಪಿ.ಸತ್ಯನಾರಾಯಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗುವ ಪತ್ರಕರ್ತರ ಧ್ವನಿಯನ್ನು ಅಡಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಮಾತನಾಡಿ, ಪತ್ರಿಕೋದ್ಯಮ ವಿಶಾಲವಾಗಿ ಬೆಳೆದಿದೆ. ಸಾರ್ವಜನಿಕರ ಸಮಸ್ಯೆಗಳ ಕುರಿತು ಎಷ್ಟೇ ವರದಿ ಮಾಡಿದರೂ ಪ್ರಯೋಜನವಾಗುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಡಾ.ಧರ್ಮಣ್ಣ, ಕೆಕೆಆರ್‌ಟಿಸಿ ಚಾಲಕ ಕೆ.ಪ್ರಭಾಕರ, ಯುವ ನಟ ಕ್ರಾಂತಿ, ಸಿದ್ದಪ್ಪ, ಪಾರ್ವತಿ ತಳವಾರ ಅವರನ್ನು ಸನ್ಮಾನಿಸಲಾಯಿತು. ಜಿಬಿಆರ್ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಸಿ.ಮೋಹನರೆಡ್ಡಿ, ಸಂಘದ ತಾಲೂಕು ಅಧ್ಯಕ್ಷ ಎಂ.ಪಿ.ಎಂ.ಶಿವಪ್ರಕಾಶ್, ಜಿಲ್ಲಾ ಕಾರ್ಯದರ್ಶಿ ನಾಗೇಶ್, ತಾಲೂಕು ಉಪಾಧ್ಯಕ್ಷ ಎಲ್.ಅಕ್ಬರ್, ಕಾರ್ಯದರ್ಶಿ ಸೋಮಶೇಖರ್, ಸಹಕಾರ್ಯದರ್ಶಿ ಚಂದ್ರಪ್ಪ ಇತರರಿದ್ದರು.