

ಶ್ರೀರಂಗಪಟ್ಟಣ: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಬುಧವಾರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು.
ತಾಲೂಕಿನ 13 ಸರ್ಕಾರಿ ಹಾಗೂ ಖಾಸಗಿ ಪದವಿ ಪೂರ್ವ ಕಾಲೇಜುಗಳ ಕ್ರೀಡಾಪಟುಗಳು ಪಾಲ್ಗೊಂಡಿದ್ದರು. ಜಾವಲಿನ್, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಡಿಸ್ಕ್, 100 ಮೀ, 200, 400, 600, 3 ಸಾವಿರ ಮೀಟರ್ ಓಟದ ಸ್ಪರ್ಧೆ, ರಿಲ್ಲೆ, ಥ್ರೋಬಾಲ್, ವಾಲಿಬಾಲ್, ಖೋಖೋ ಸೇರಿದಂತೆ ವಿವಿಧ ಸ್ಪರ್ಧೆಗಳು ಜರುಗಿದವು.
ತಾಲೂಕಿನ ಕೊಡಿಯಾಲ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಹದೇವಪುರ, ನಗುವನಹಳ್ಳಿ, ಬೆಳಗೊಳ, ಕೆ.ಆರ್.ಸಾಗರ ಸರ್ಕಾರಿ ಪದವಿ ಪೂರ್ವ ಕಾಲೇಜುಗಳೊಂದಿಗೆ ಆರಾಧನಾ, ಪರಿವರ್ತನ, ಓಂ ಶ್ರೀಕೇತನ, ಬಿಜಿಎಸ್ ಕಾಲೇಜುಗಳ ತಂಡಗಳು ಪಾಲ್ಗೊಂಡಿದ್ದವು.
ಕ್ರೀಡಾಕೂಟಕ್ಕೆ ಮಾಜಿ ಶಾಸಕಿ ವಿಜಯಲಕ್ಷ್ಮೀ ಬಂಡಿಸಿದ್ದೇಗೌಡ ಚಾಲನೆ ನೀಡಿದರು. ಕೊಡಿಯಾಲ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಟಿ.ಬಿ.ಶಿವಣ್ಣ ಅಧ್ಯಕ್ಷತೆ ವಹಿಸಿದ್ದರು. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷ ಭೈರೇಶ್, ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಚನ್ನಕೃಷ್ಣಯ್ಯ, ಪ್ರಾಂಶುಪಾಲ ಜಯಶಂಕರಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿ.ಜೆ.ಶ್ರೀನಿವಾಸ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸೋಮಶೇಖರ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರವಿಕುಮಾರಸ್ವಾಮಿ, ದೈಹಿಕ ಶಿಕ್ಷಣ ಶಿಕ್ಷಕರಾದ ಸೀತಾರಾಮು, ರಂಗನಾಥ್, ಚಂದ್ರಮೌಳಿ, ಕೇಶವಮೂರ್ತಿ, ಭವ್ಯಾ ಇದ್ದರು.