

ಕಲಬುರಗಿ: ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮುಗಿಸಿದ ಹಳೆಯ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಈಶಾನ್ಯ ಪದವೀಧರ ಕ್ಷೇತ್ರ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಕರೆ ನೀಡಿದರು.
ಸರ್ಕಾರಿ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಕಾಲೇಜು ಶಿಕ್ಷಣ ಇಲಾಖೆಯಿಂದ ಗುರುವಾರ ಆಯೋಜಿಸಿದ್ದ ಚುನಾವಣಾ ಜಾಗೃತಿ ಮತ್ತು ಮತದಾರರ ವಿಶೇಷ ನೋಂದಣಿ ಅಭಿಯಾನ ಉದ್ಘಾಟಿಸಿ ಮಾತನಾಡಿ, ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಮತದಾರರ ನೋಂದಣಿ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ. ಹೀಗಾಗಿ ಪಟ್ಟಿಗೆ ಅರ್ಹರ ಹೆಸರು ಸೇರಿಸಲು ಜನಜಾಗೃತಿ ಮೂಡಿಸಬೇಕು ಎಂದರು.
ಹಳೆಯ ವಿದ್ಯಾರ್ಥಿಗಳು ವ್ಯಾಸಂಗ ಮುಗಿಸಿ ಕೆಲಸ ಅರಸಿ ದೂರದ ನಗರಕ್ಕೆ ಹೋಗಿರುತ್ತಾರೆ. ಮತದಾರರ ಪರಿಷ್ಕರಣೆ ಬಗ್ಗೆ ಅವರಿಗೆ ಮಾಹಿತಿ ಇರುವುದಿಲ್ಲ. ಇವರನ್ನು ಹಳೆಯ ವಿದ್ಯಾರ್ಥಿಗಳ ಸಂಘದ ಮೂಲಕ ಸಂಪರ್ಕಿಸಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಿಇಒ, ಸ್ವೀಪ್ ಸಮಿತಿ ಅಧ್ಯಕ್ಷ ಭನ್ವರ್‌ಸಿಂಗ್ ಮೀನಾ ಮಾತನಾಡಿ, ಈಶಾನ್ಯ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನ.೬ ಕೊನೆಯ ದಿನವಾಗಿದೆ. ಅಷ್ಟರೊಳಗೆ ಪ್ರತಿಯೊಬ್ಬರೂ ಹೆಸರು ಸೇರ್ಪಡೆ ಮಾಡಿಕೊಳ್ಳಬೇಕು. ಈ ಮೂಲಕ ತಮ್ಮ ಹಕ್ಕು ಚಲಾಯಿಸಲು ಮುಂದಾಗಬೇಕು ಎಂದರು.
ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ್ ಮಾತನಾಡಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಶಿವಶರಣಪ್ಪ ಮುಳೆಗಾಂವ್, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ವಿಶೇಷ ಅಧಿಕಾರಿ ಡಾ.ಸೂರ್ಯಕಾಂತ, ಸರ್ಕಾರಿ ಮಹಾವಿದ್ಯಾಲಯದ ಪ್ರಾಂಶುಪಾಲ ಸವಿತಾ ತಿವಾರಿ, ಡೀನ್ ಡಾ.ಸಾಲಿಮನಿ, ಡಾ.ವಿಜಯಾನಂದ ವಿಠ್ಠಲರಾವ್ ಇತರರಿದ್ದರು.