

ಮಡಿಕೇರಿ: ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಾಧನೆ ಬಿಂಬಿಸುವ ಪ್ರಗತಿ ರಥಯಾತ್ರೆ ವಾಹನಕ್ಕೆ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು.
ಮಡಿಕೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಾಲನೆ ನೀಡಿ ಬಳಿಕ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರಕಾರ ಜನಪರವಾಗಿ ಕೆಲಸ ಮಾಡಿದೆ. ಎಲ್ಲಾ ವರ್ಗಗಳಿಗೂ ಯೋಜನೆಗಳನ್ನು ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದೆ. ಇದುವೆ ನಮಗೆ ಶ್ರೀರಕ್ಷೆಯಾಗಿದ್ದು, ಮುಂದಿನ ಚುನಾವಣೆಯಲ್ಲಿ ೧೫೦ ಕ್ಷೇತ್ರಗಳಲ್ಲಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಚುನಾವಣೆಯನ್ನು ಎದುರಿಸುವ ನಿಟ್ಟಿನಲ್ಲಿ ಎಲ್ಲಾ ತಯಾರಿಯನ್ನು ಮಾಡಿಕೊಳ್ಳಲಾಗುತ್ತದೆ. ಸರಕಾರದ ಸಾಧನೆ ಹಾಗೂ ವಿಪಕ್ಷಗಳ ವೈಫಲ್ಯಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಲಾಗುತ್ತಿದೆ. ಇದರ ಮೊದಲ ಭಾಗವಾಗಿ ಪ್ರಗತಿ ರಥಯಾತ್ರೆ ಹಮ್ಮಿಕೊಂಡಿದ್ದು, ಚುನಾವಣೆ ಮುಗಿಯುವ ತನಕ ಇದು ಕಾರ್ಯಾಚರಿಸಲಿದೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಹಲವು ವರ್ಷ ಅಧಿಕಾರದಲ್ಲಿದ್ದ ಕಾಂಗ್ರೆಸ್ ಮಾಡದ ಅನೇಕ ಯೋಜನೆಗಳನ್ನು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಾಡಿದೆ. ರಾಜ್ಯದಲ್ಲಿಯೂ ಜನಪರ ಕೆಲಸ ಮಾಡಿರುವುದು ಜನರಿಗೆ ತಿಳಿಸುವ ಕೆಲಸ ಈ ಹಿನ್ನೆಲೆ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಂದರ್ಭ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾದಪ್ಪ, ಕಾರ್ಯದರ್ಶಿ ಎಸ್.ಸಿ.ಸತೀಶ್, ಉಪಾಧ್ಯಕ್ಷ ಬಿ.ಕೆ.ಅರುಣ್ ಕುಮಾರ್, ಯುವ ಘಟಕದ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ, ಮಡಿಕೇರಿ ನಗರಾಧ್ಯಕ್ಷ ಮನು ಮಂಜುನಾಥ್, ಉಪಾಧ್ಯಕ್ಷ ಬಿ.ಕೆ.ಜಗದೀಶ್, ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ್ ಸುಬ್ರಮಣಿ ಸೇರಿದಂತೆ ಇನ್ನಿತರರು ಹಾಜರಿದ್ದರು.