

ಬೆಂಗಳೂರು ಗ್ರಾಮಾಂತರ : ಸಾರ್ವಜನಿಕ ಸ್ಥಳಗಳಲ್ಲಿ ಪರಿಸರ ಮಾಲಿನ್ಯ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಂಡು, ದಂಡ ವಿಧಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಅಧಕ್ಷ ಸುಭಾಷ್ ಬಿ.ಅಡಿ ಸೂಚಿಸಿದರು.
ದೇವನಹಳ್ಳಿ ತಾಲೂಕು ಬೀರಸಂದ್ರದ ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಗುರುವಾರ ತ್ಯಾಜ್ಯ ವಿಲೇವಾರಿ ವಿಷಯಕ್ಕೆ ಸಂಬಂಧಿಸಿದಂತೆ ಕರೆದಿದ್ದ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಜನಸಂಖ್ಯೆ ಹೆಚ್ಚಾದಂತೆ ಪರಿಸರದ ಮಾಲಿನ್ಯ ಹೆಚ್ಚಾಗಿದ್ದು, ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸ್ಥಳೀಯ ಸಂಸ್ಥೆಗಳು ಸೇರಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು ಎಂದರು.
ಅರಿವು ಮೂಡಿಸಿ: ನಗರಸಭೆ, ಪುರಸಭೆ ಹಾಗೂ ಗ್ರಾಪಂ ವ್ಯಾಪ್ತಿಯಲ್ಲಿ ಪರಿಸರ ಮಾಲಿನ್ಯ ತಡೆಗಟ್ಟಲು ಅನುಸರಿಸಬೇಕಾದ ವಿಧಾನಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸುಭಾಷ್ ಬಿ.ಅಡಿ ಹೇಳಿದರು. ತ್ಯಾಜ್ಯಗಳಲ್ಲಿ ಹಸಿ, ಒಣ ಹಾಗೂ ವೈದ್ಯಕೀಯ ತ್ಯಾಜ್ಯವೆಂದು ವಿಂಗಡಿಸಲಾಗಿದ್ದು, ಪ್ಲಾಸ್ಟಿಕ್ ಹಾಗೂ ವೈದ್ಯಕೀಯ ತ್ಯಾಜ್ಯ ಪರಿಸರಕ್ಕೆ ಹಾನಿಕಾರಕವಾಗಿದೆ. ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆರೋಗ್ಯ ಕೇಂದ್ರಗಳು ವೈದ್ಯಕೀಯ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ, ಮಾಲಿನ್ಯ ನಿಯಂತ್ರಣ ಮಂಡಳಿ ಆಸ್ಪತ್ರೆ ಮಾಲೀಕರಿಗೆ ನೋಟಿಸ್ ನೀಡಬೇಕು ಎಂದು ಹೇಳಿದರು.
ಕೈಗಾರಿಕೆಗಳು, ಕಂಪನಿಗಳು, ಕಾರ್ಖಾನೆಗಳು, ಸಿನಿಮಾ ಥಿಯೇಟರ್‌ಗಳು, ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಕಡ್ಡಾಯವಾಗಿ ಹಸಿ ಹಾಗೂ ಒಣ ಕಸ ವಿಂಗಡಿಸಿ, ಘನ ತ್ಯಾಜ್ಯ ವಿಲೇವಾರಿ ಘಟಕ ತೆರೆದು, ತ್ಯಾಜ್ಯ ವಿಲೇವಾರಿ ಪ್ರಕ್ರಿಯೆಯಲ್ಲಿರಬೇಕು ಎಂದು ಹೇಳಿದರು.
ಮರುಬಳಕೆ ಪ್ಲಾಸ್ಟಿಕ್ ಬಳಸಬಹುದು: ಪ್ರತಿ ನಾಗರಿಕರು ಪರಿಸರವನ್ನು ಶುಚಿತ್ವದಿಂದ ಕಾಪಾಡಿಕೊಳ್ಳಬೇಕು. ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್‌ಅನ್ನು ಮಾತ್ರ ಬಳಸಬಹುದು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ಶಾಲಾ ಕಾಲೇಜುಗಳಲ್ಲೂ ಪರಿಸರ ರಕ್ಷಣೆ ಕುರಿತ ಚಟುವಟಿಕೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಬಾಲಕಿಯರ ವಸತಿ ನಿಲಯಗಳಲ್ಲಿ ನ್ಯಾಪ್ಕಿನ್ ಬನಿರ್ಂಗ್ ಮಿಷನ್ ಅಳವಡಿಸುವ ಮೂಲಕ ಸ್ವಚ್ಛತಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
31 ಕಾಮಗಾರಿ ಪ್ರಗತಿ: ಜಿಲ್ಲೆಯ ನಾಲ್ಕು ತಾಲೂಕುಗಳ 101 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ನಿರ್ವಹಣೆ ಘಟಕ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಜಾಗ ಮಂಜೂರಾಗಿದ್ದು, 31 ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣಪ್ಪ ತಿಳಿಸಿದರು. ಒಣ ಮತ್ತು ಹಸಿ ಕಸದ ವಿಂಗಡಣೆ ಉತ್ತೇಜಿಸಲು ಪ್ರತಿ ಮನೆಗಳಿಗೆ ಎರಡು ವಿಧದ ಕಸದ ಬುಟ್ಟಿಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.