

ಚಿತ್ರದುರ್ಗ: ರಾಜ್ಯಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ಹಾಗೂ ಸರ್ಕಾರದ ಆದೇಶದಂತೆ ಪಿಒಪಿ, ಭಾರಲೋಹ ಮಿಶ್ರಿತ ರಾಸಾಯನಿಕ ಬಣ್ಣದಿಂದ ತಯಾರಿಸಿದ ಗಣೇಶ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ.
ಪಿಒಪಿ, ಬಣ್ಣದ ವಿಗ್ರಹಗಳನ್ನು ಪೂಜೆ ಬಳಿಕ ವಿಸರ್ಜಿಸುವುದರಿಂದ ನೈಸರ್ಗಿಕ ಜಲಮೂಲಗಳು ಕಲುಷಿತಗೊಳ್ಳುತ್ತವೆ. ಇದರಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಸಾರ್ವಜನಿಕ ಆರೋಗ್ಯಕ್ಕೂ ಧಕ್ಕೆ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶ ಉತ್ಸವ ಆಚರಿಸುವಂತೆ ಮನವಿ ಮಾಡಿದ್ದಾರೆ.
ನಿಯಮಗಳನ್ನು ಉಲ್ಲಂಘಿಸಿ ಪಿಒಪಿ ಮತ್ತು ರಾಸಾಯನಿಕ ಬಣ್ಣ ಲೇಪಿತ ವಿಗ್ರಹಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸುವುದು, ಶಬ್ಧ ಮಾಲಿನ್ಯ ಉಂಟುಮಾಡಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಸಿ ಎಚ್ಚರಿಸಿದ್ದಾರೆ.
ಸಭೆ ಮುಂದೂಡಿಕೆ
ಚಿತ್ರದುರ್ಗ: ಚಿತ್ರದುರ್ಗ ತಾಲೂಕು ದಿಂಡದಹಳ್ಳಿ ಸರ್ವೆ ನಂ. 21/1 ರ 3.24 ಎಕರೆ ಪ್ರದೇಶದಲ್ಲಿ ಉದ್ದೇಶಿತ ವಾರ್ಷಿಕ 4,95,000 ಟನ್ ಉತ್ಪಾದನಾ ಸಾಮರ್ಥ್ಯದ ಮಿನರಲ್ ಬೆನಿಫಿಸಿಯೇಷನ್ ಪ್ಲಾಂಟ್ ಸ್ಥಾಪನೆ ಹಿನ್ನೆಲೆಯಲ್ಲಿ ಆ.22 ರಂದು ನಿಗದಿಪಡಿಸಿದ್ದ ಪರಿಸರ ಸಾರ್ವಜನಿಕ ಅಹವಾಲು ಆಲಿಕೆ ಸಭೆಯನ್ನು ಮಳೆ ಕಾರಣಕ್ಕೆ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಪ್ರಕಟಣೆ ತಿಳಿಸಿದೆ.
----------