ಪರಿಸರಕ್ಕೆ ಪೂರಕವಾದ ವಸ್ತು ಬಳಸಿ

ಮದ್ದೂರು ಪಟ್ಟಣದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಪ್ಲಾಸ್ಟಿಕ್ ಮುಕ್ತ ಅಭಿಯಾನ ಜಾಗೃತಿ ಜಾಥಾಕ್ಕೆ ಶಾಸಕ ಕೆ.ಎಂ. ಉದಯ ಅವರು ಚಾಲನೆ ನೀಡಿದರು. ಶಿವಕುಮಾರ್, ಮಧುಕುಮಾರ್, ಉಮಾ, ಸಮ್ರತಾ, ಸುರೇಶ್ ಇದ್ದರು.
02M.D.R.3
Published on

ಮದ್ದೂರು: ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ವ್ಯತಿರಿಕ್ತ ಹಾನಿಯಾಗುತ್ತದೆ. ಪ್ರತಿಯೊಬ್ಬರು ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸಿ ಪರಿಸರಕ್ಕೆ ಪೂರಕವಾದ ವಸ್ತುಗಳನ್ನು ಬಳಕೆ ಮಾಡಬೇಕೆಂದು ಶಾಸಕ ಕೆ.ಎಂ. ಉದಯ್ ಹೇಳಿದರು.


ಪಟ್ಟಣದಲ್ಲಿ ಕೌಶಲಾಭಿವೃದ್ಧಿ ಸಂಸ್ಥೆ ಹಾಗೂ ಶ್ರೀ ಸಾಯಿ ಎಜುಕೇಷನ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಹಾಗೂ ಪ್ಲಾಸ್ಟಿಕ್ ಮುಕ್ತ ಜಾಗೃತಿ ಅಭಿಯಾನ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.


ಪಟ್ಟಣ ಹಾಗೂ ಗ್ರಾಮೀಣ ಭಾಗವನ್ನು ಪ್ಲಾಸ್ಟಿಕ್ ಮುಕ್ತವಾಗಿ ಮಾಡುವ ಮೂಲಕ ಉತ್ತಮ ಪರಿಸರ ನಿರ್ಮಾಣ ಮಾಡುವುದರ ಜತೆಗೆ ಮಾದರಿ ತಾಲೂಕನ್ನಾಗಿಸಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಕರೆ ನೀಡಿದರು.


ಇತ್ತೀಚಿನ ದಿನಗಳಲ್ಲಿ ಹೆಚ್ಚು ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವುದರಿಂದ ನಾಗರಿಕರು ಹಲವು ಮಾರಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಇದನ್ನು ಪ್ರತಿಯೊಬ್ಬರು ಮನವರಿಕೆ ಮಾಡಿಕೊಂಡು ಪ್ಲಾಸ್ಟಿಕ್ ಬಳಕೆಯಿಂದ ದೂರವಿರಬೇಕು, ಬಟ್ಟೆ ಬ್ಯಾಗ್ ಮತ್ತು ಉಪಯುಕ್ತ ವಸ್ತುಗಳನ್ನು ಬಳಕೆ ಮಾಡಬೇಕು ಎಂದು ಮನವಿ ಮಾಡಿದರು.


ಅರಣ್ಯ ಪ್ರದೇಶ ಕಣ್ಮರೆಯಾದಂತೆ ಪ್ರಕೃತಿ ವಿಕೋಪದಂತಹ ಘಟನೆಗಳು ಮರುಕಳಿಸಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸುತ್ತಿರುವ ಉದಾಹರಣೆಗಳಿವೆ. ಆದ್ದರಿಂದ ಪ್ರತಿಯೊಬ್ಬರೂ ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಕೌಶಲಾಭಿವೃದ್ಧಿ ಸಂಸ್ಥೆಯ ಸಹಾಯಕ ನಿರ್ದೇಶಕ ಶಿವಕುಮಾರ್, ಸಾಯಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಧುಕುಮಾರ್, ಪುರಸಭೆ ಅಧಿಕಾರಿ ಉಮಾ, ಎನ್‌ಎಸ್‌ಎಸ್ ಯೋಜನಾಧಿಕಾರಿಗಳಾದ ನಮ್ರತಾ, ಸುರೇಶ್ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net