ಪರಿಸ್ಥಿತಿ ನೋಡಿಕೊಂಡು ಆಗಸ್ಟ್, ಸೆಪ್ಟೆಂಬರ್‌ನಲ್ಲಿ ಶಾಲೆ ಆರಂಭ?

29CBP3EducationMini
Published on

ಚಿಕ್ಕಬಳ್ಳಾಪುರ: ಕರೊನಾ ಹಿನ್ನೆಲೆಯಲ್ಲಿ ಬಹುತೇಕ ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂಜರಿಯುತ್ತಿದ್ದಾರೆ. ಇದರಿಂದ ಶಿಕ್ಷಣ ಸಂಸ್ಥೆಗಳನ್ನು ಯಾವಾಗ ಪ್ರಾರಂಭ ಮಾಡಬೇಕೆಂಬುದೇ ದೊಡ್ಡ ಪ್ರಶ್ನೆಯಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಸೋಮವಾರ ಭೇಟಿ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್, ಸೆಪ್ಟೆಂಬರ್‌ನಲ್ಲಿ ಮುಂಜಾಗ್ರತಾ ಕ್ರಮಗಳೊಂದಿಗೆ ಶಾಲೆಗಳನ್ನು ಪ್ರಾರಂಭಿಸಲು ಚಿಂತಿಸಲಾಗಿದೆ. ಆದರೆ, ಪರಿಸ್ಥಿತಿ ನೋಡಿಕೊಂಡು ಸೂಕ್ತ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದರು.

ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳು ಸುರಕ್ಷಿತ ಸ್ಥಳಗಳು ಎಂಬುದನ್ನು ತಿಳಿಸುವ ಉದ್ದೇಶದಿಂದ ಹಲವೆಡೆ ಖುದ್ದು ಭೇಟಿ ನೀಡುತ್ತಿದ್ದೇನೆ. ಈಗಾಗಲೇ ಪಾಲಕರು, ಶಿಕ್ಷಕರು ಮತ್ತು ಮಕ್ಕಳು ಸಕಾರಾತ್ಮಕವಾಗಿ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಕಳೆದ ಸಾಲಿನಲ್ಲಿ ಆಂಗ್ಲ ಮತ್ತು ಗಣಿತ ಪರೀಕ್ಷೆಗೆ ಶೇ.98.68 ರಷ್ಟು ಹಾಜರಾತಿಯಿತ್ತು, ಕರೊನ ಆತಂಕದ ನಡುವೆಯೂ ಈ ಬಾರಿ 98 ಹಾಜರಾತಿ ಕಂಡು ಬಂದಿರುವುದು ವಿಶ್ವಾಸ ಮೂಡಿಸಿದೆ ಎಂದರು.

ಪರೀಕ್ಷೆಗೆ ಗೈರಾಗಿರುವುದಕ್ಕೆ ಸಂಬಂಧಿಸಿದಂತೆ ಮಕ್ಕಳು ಮತ್ತು ಪಾಲಕರೊಂದಿಗೆ ಚರ್ಚಿಸಲಾಗುವುದು. ಈಗಾಗಲೇ ಆತಂಕದಲ್ಲಿದ್ದ ಹಲವರಿಗೆ ಅಧಿಕಾರಿಗಳು ಧೈರ್ಯ ತುಂಬಿ ಪರೀಕ್ಷೆಗೆ ಕರೆದುಕೊಂಡು ಬಂದಿದ್ದಾರೆ ಎಂದರು.

ಜಿಲ್ಲಾಧಿಕಾರಿ ಆರ್.ಲತಾ, ಜಿಪಂ ಸಿಇಒ ಬಿ.ಫೌಜೀಯಾ ತರನ್ನುಮ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಜಿ.ನಾಗೇಶ್ ಇತರರಿದ್ದರು.

ಶುಲ್ಕ ಹೆಚ್ಚಳಕ್ಕೆ ವಾರ್ನಿಂಗ್ : ಕರೊನಾ ಸಂಕಷ್ಟದಲ್ಲಿ ಎಲ್ಲರೂ ಸಮಸ್ಯೆಗಳಿಗೆ ಸಿಲುಕಿದ್ದು, ಮಾನವೀಯತೆ ದೃಷ್ಟಿಯಿಂದ ಯೋಚಿಸಬೇಕಾಗಿದೆ. ಯಾವುದೇ ಕಾರಣಕ್ಕೂ ಬೋಧನಾ ಶುಲ್ಕ ಹೆಚ್ಚಿಸಬಾರದೆಂದು ಶಿಕ್ಷಣ ಸಂಸ್ಥೆಗಳಿಗೆ ಹಲವು ಬಾರಿ ಎಚ್ಚರಿಕೆ ನೀಡಲಾಗಿದೆ. ಒಂದು ವೇಳೆ ನಿಗದಿಪಡಿಸಿದಕ್ಕಿಂತಲೂ ಹೆಚ್ಚು ಶುಲ್ಕ ವಸೂಲಿ ಮಾಡಿದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ 1150 ಶಾಲೆಗಳ ವಿರುದ್ಧ ದೂರು ಕೇಳಿ ಬಂದಿದ್ದು 450 ಶಾಲೆಗಳಿಗೆ ನೋಟಿಸ್ ನೀಡಿ, ಕಾನೂನು ಪ್ರಕಾರ ಕ್ರಮ ಜರುಗಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಎಸ್ಸೆಸ್ಸೆಲ್ಸಿ, ಪಿಯು ಫಲಿತಾಂಶ : ಜುಲೈನಲ್ಲಿ ಪಿಯು, ಆಗಸ್ಟ್‌ನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂದರ್ಭದಲ್ಲಿನ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆಯಾಗಿದೆ, ಇದು ಸುಗಮವಾಗಿ ಮುಗಿಯಬೇಕು. ಬಳಿಕ ಫಲಿತಾಂಶ ಪ್ರಕಟ, ಶಾಲೆಗಳ ಪ್ರಾರಂಭದ ಬಗ್ಗೆ ಯೋಚಿಸಲಾಗುವುದು ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬರ್ಫಿ ಪಡೆದು ಶುಭಾಶಯ ಹೇಳಿದ ಸಚಿವ: ಸಚಿವ ಎಸ್.ಸುರೇಶ್ ಕುಮಾರ್ ಜಿಲ್ಲೆಯ ವಿವಿಧ ಶಾಲೆಗಳಿಗೆ ಭೇಟಿ ನೀಡಿದರು. ಇಲ್ಲಿನ ಅಗಲಗುರ್ಕಿ ಬಿಜಿಎಸ್ ಪ್ರೌಢಶಾಲೆ, ಸರ್ಕಾರಿ ಪ್ರೌಢಶಾಲೆ, ನ್ಯೂ ಹೊರೈಜಾನ್ ಶಾಲೆಯ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಂದ ಮಾಹಿತಿ ಪಡೆದುಕೊಂಡರು. ನ್ಯೂ ಹೊರೈಜಾನ್ ಶಾಲೆಯಲ್ಲಿ ವಿದ್ಯಾರ್ಥಿ ರಾಜೇಶ್ ತನ್ನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬರ್ಫಿ ನೀಡಿದಾಗ ಶುಭಾಶಯ ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿ, ತಜ್ಞರ ವರದಿಯ ಆಧಾರದ ಮೇಲೆ ಖಾಸಗಿ ಶಾಲೆಗಳಿಗೆ ಆನ್‌ಲೈನ್ ಶಿಕ್ಷಣ ನೀಡಲು ಅನುಮತಿ ನೀಡಲಾಗಿದೆ. ಹಾಗೆಯೇ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲು ಸೂಚಿಸಲಾಗಿದೆ. ಎಸ್.ಸುರೇಶ್ ಕುಮಾರ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net