

ಮೈಸೂರು: ಪೊಲೀಸ್ ಇಲಾಖೆಗೆ ಹೊಸ ಶಕ್ತಿ ತುಂಬುವ ಕಾರ್ಯವನ್ನು ಸರ್ಕಾರ ಮಾಡುತ್ತಿದ್ದು, ಇಲಾಖೆಯಲ್ಲಿ ಖಾಲಿ ಇರುವ ಎಲ್ಲ ಹುದ್ದೆಗ ಳನ್ನು ಶೀಘ್ರದಲ್ಲಿಯೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಮೈಸೂರು ನಗರ ಪೊಲೀಸ್ ಘಟಕದಿಂದ ನೂತನವಾಗಿ ನಿರ್ಮಿಸಲಾಗಿರುವ ಹೆಬ್ಬಾಳು ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಮಾತನಾಡಿ, ನಮ್ಮ ಸರ್ಕಾರ ಅಧಿಕಾರಕ್ಕೆ ಬರುವುದಕ್ಕಿಂತ ಮುಂಚೆ ಇಲಾಖೆಯಲ್ಲಿ 35 ಸಾವಿರ ಹುದ್ದೆಗಳು ಖಾಲಿ ಇತ್ತು. ಹೀಗಾಗಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಪ್ರತಿ ವರ್ಷ ಸಾವಿರಾರು ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಸಲಾಯಿತು. ಇದರ ಪರಿಣಾಮ ರಾಜ್ಯದಲ್ಲಿ ಪ್ರಸ್ತುತ ಖಾಲಿ ಹುದ್ದೆಗಳ ಸಂಖ್ಯೆ 12 ಸಾವಿರಕ್ಕೆ ಇಳಿಕೆಯಾಗಿದ್ದು, ಇದೀಗ ಐದು ಸಾವಿರ ಹುದ್ದೆಗಳ ಭರ್ತಿಗೆ ಕ್ರಮವಹಿಸಲಾಗಿದೆ. ಉಳಿದ ಏಳು ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದರು.
ಪಿಎಫ್‌ಐ ಸೇರಿದಂತೆ ಕೆಲವು ಮತೀಯ ಸಂಘಟನೆಗಳು ರಾಜ್ಯದಲ್ಲಿ ಶಾಂತಿ ಕೆಡಿಸುವ ಪ್ರಯತ್ನ ನಡೆಸುತ್ತಿದ್ದವು. ಪೊಲೀಸರು ಅವರನ್ನು ಸಮರ್ಥವಾಗಿ ಎದುರಿಸುವ ಮೂಲಕ ಯಾವುದೇ ಅಹಿತಕರ ಘಟನೆ ನಡೆಯಂತೆ ಎಚ್ಚರಿಕೆ ವಹಿಸಿದ್ದಾರೆ. ಮಾದಕ ವಸ್ತು ಚಟಕ್ಕೆ ಯುವ ಸಮುದಾಯ ಬಲಿಯಾಗುತ್ತಿದ್ದು, ಮಾದಕ ವಸ್ತು ಜಾಲಕ್ಕೆ ಕಡಿವಾಣ ಹಾಕಲು ಪೊಲೀಸರು ಶ್ರಮಿಸುತ್ತಿದ್ದು, ಪೊಲೀಸರಿಗೆ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಹೇಳಿದರು.
ಪೊಲೀಸ್ ಇಲಾಖೆಗೆ ಎಲ್ಲ ರೀತಿಯ ತರಬೇತಿ ನೀಡಲಾಗುತ್ತಿದೆ. ನಮಗೆ ಸವಾಲಿನ ಕೆಲಸ ಅಂದರೆ ಸೈಬರ್ ಕ್ರೈಂ. ಇತ್ತೀಚೆಗೆ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೈಬರ್ ಕ್ರೈಂ ಕುರಿತು ಪೊಲೀಸರು ವಿಶೇಷ ತರಬೇತಿ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.