

ಚಿತ್ರದುರ್ಗ: ಪಾಕ್ ಪರ ಘೋಷಣೆ ಕೂಗಿರುವ ಆರೋಪಿಯನ್ನು ಕಾಂಗ್ರೆಸ್ ರಕ್ಷಿಸುತ್ತಿದೆ ಎಂದು ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹೇಳಿದರು. ಜಿಲ್ಲಾಸ್ಪತ್ರೆಗೆ ಗುರುವಾರ ಭೇಟಿ ನೀಡಿ, ನಗರದ ಕಾಂಗ್ರೆಸ್ ಕಚೇರಿಗೆ ಬುಧವಾರ ಮುತ್ತಿಗೆ ಹಾಕುವ ವೇಳೆ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಯುವಮೋರ್ಚಾ ರಾಜ್ಯ ಕಾರ‌್ಯದರ್ಶಿ ಭಾರ್ಗವಿ ದ್ರಾವಿಡ ಅವರ ಯೋಗಕ್ಷೇಮ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಆರೋಪಿಯ ರಕ್ಷಣೆಗೆ ಮುಂದಾಗಿರುವ ಕಾಂಗ್ರೆಸ್ ನಿಲುವು ಖಂಡನೀಯ. ಆರೋಪಿ ಬಂಧನಕ್ಕೆ ಒತ್ತಾಯಿಸಿ ನಗರದಲ್ಲಿ ಸದ್ಯದಲ್ಲೇ ಬೃಹತ್ ಪ್ರತಿಭಟನೆ ನಡೆಸಲಾಗುವುದು. ವಿಧಾನಸೌಧದಲ್ಲಿ ನಡೆದ ಘಟನೆ ಕುರಿತಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹಾರಿಕೆ ಹೇಳಿಕೆ ನೀಡುತ್ತಿದ್ದಾರೆ. ಎಐಸಿಸಿ ಪ್ರಧಾನ ಕಾರ‌್ಯದರ್ಶಿ ರಣದೀಪ್ ಸುರ್ಜೇವಾಲ ಅವರು ಇದೊಂದು ರಾಜಕೀಯ ಪ್ರೇರಿತ ಆರೋಪವೆಂದು ತೀರ್ಪು ನೀಡಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸರ್ಕಾರ ಪ್ರತಿಭಟನೆ ಹತ್ತಿಕ್ಕುತ್ತಿದ್ದು, ಬಿಜೆಪಿ ಪ್ರತಿಭಟನೆ ವೇಳೆ ಆದ ಈ ಘಟನೆಯನ್ನು ಪಕ್ಷದ ವರಿಷ್ಠರ ಗಮನಕ್ಕೆ ತರುತ್ತೇನೆ. ಜಿಲ್ಲಾ ರಕ್ಷಣಾಧಿಕಾರಿ ಜತೆ ಮಾತನಾಡಿ ಕಾನೂನು ಕ್ರಮಕ್ಕೆ ಕೋರಿದ್ದೇನೆ. ಸಂತ್ರಸ್ತೆಯ ಹೇಳಿಕೆ ಪಡೆಯುವಂತೆ ಒತ್ತಾಯಿಸಿದ್ದೇನೆ ಎಂದರು.
ಪಕ್ಷದ ಜಿಲ್ಲಾಧ್ಯಕ್ಷ ಎ.ಮುರಳಿ, ರಾಜ್ಯರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ನವೀನ್, ಕಾರ‌್ಯದರ್ಶಿ ಶಶಿ, ರಾಜೇಶ ಬುರುಡೆಕಟ್ಟೆ, ಸುರೇಶ್ ಸಿದ್ದಾಪುರ, ಸಂಪತ್‌ಕುಮಾರ್, ದಗ್ಗೆ ಶಿವಪ್ರಕಾಶ್, ತಿಪ್ಪೇಸ್ವಾಮಿ, ಡಿ.ಕೆ.ಜಯಣ್ಣ, ರಾಮು, ಕಿರಣ್, ಗಿರೀಶ್, ತಿಮ್ಮಣ್ಣ ನವೀನ, ಅರುಣ್, ಪರಶುರಾಂ, ಸೂರಮ್ಮನಹಳ್ಳಿ ನಾಗರಾಜ್, ಬೋಸಯ್ಯ ಮತ್ತಿತರರು ಇದ್ದರು.