ಪಾಠ ಪ್ರವಚನದೊಂದಿಗೆ ಕ್ರೀಡೆಯಲ್ಲೂ ಪಾಲ್ಗೊಳ್ಳಿ

27-HANUR-3
ಮಲೆಮಹದೇಶ್ವರ ಬೆಟ್ಟದಲ್ಲಿ ಆಯೋಜಿಸಿದ್ದ ಕ್ರೀಡಾಕೂಡಕ್ಕೆ ಬ್ಯಾಡ್ಮಿಂಟನ್ ಆಡುವ ಮೂಲಕ ಚಾಲನೆ ನೀಡಲಾಯಿತು. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಶಿವಕುಮಾರ್, ನಾಗರಾಜು, ಬಸವರಾಜು, ಸಂತೋಷ್ ಕಶ್ಯಪ್, ಸ್ವಾಮಿ ಇದ್ದರು.
Published on

ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಲಹೆ

ಹನೂರು: ಪಾಠ ಪ್ರವಚನದೊಂದಿಗೆ ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಸಾಧನೆ ಮಾಡಬೇಕು ಎಂದು ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಲಹೆ ನೀಡಿದರು.

ಲಿಂಗೈಕ್ಯ ಶ್ರೀ ಪಟ್ಟದ ಮಹಾದೇವಸ್ವಾಮೀಜಿ ಅವರ ಸ್ಮರಣಾರ್ಥ ಶನಿವಾರ ಮಲೆಮಹದೇಶ್ವರ ಸ್ವಾಮಿ ಕೃಪಾ ಎಜುಕೇಷನಲ್ ಸೊಸೈಟಿ ಹಾಗೂ ಸಾಲೂರು ಬೃಹನ್ಮಠದ ವತಿಯಿಂದ ಮ.ಬೆಟ್ಟದ ಮಹದೇಶ್ವರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಸಂಸ್ಥೆಯ ಅಂತರ ಶಾಲಾ ಕಾಲೇಜು ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಕ್ರೀಡೆ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದ್ದು, ಉತ್ತಮ ಆರೋಗ್ಯ ಹೊಂದಬಹುದಾಗಿದೆ. ಪ್ರತಿಯೊಬ್ಬರಲ್ಲೂ ಪ್ರತಿಭೆ ಇದ್ದು, ಅದರ ಅನಾವರಣಕ್ಕೆ ಕ್ರೀಡಾಕೂಟ ಸಹಕಾರಿ. ಆದರೆ, ಕೆಲವರು ಸೋಲುತ್ತೇನೋ ಎಂಬ ಭಯದಿಂದ ಕ್ರೀಡೆಗಳಲ್ಲಿ ಭಾಗವಹಿಸುತ್ತಿಲ್ಲ. ಕ್ರೀಡೆಯಲ್ಲಿ ಸೋಲು ಗೆಲವು ಸಾಮಾನ್ಯ. ಆದ್ದರಿಂದ ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಮಾತನಾಡಿ, ಗ್ರಾಮೀಣ ಮಕ್ಕಳಲ್ಲಿ ಅಗಾಧವಾದ ಪ್ರತಿಭೆ ಇರುತ್ತದೆ. ಅದರ ಅನಾವರಣಕ್ಕೆ ಕ್ರೀಡಾಕೂಟಗಳು ಸಹಕಾರಿಯಾಗಿದ್ದು, ಪ್ರತಿಯೊಬ್ಬರೂ ಕ್ರೀಡೆಲ್ಲಿ ಭಾಗವಹಿಸುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದ ಅವರು, ಸಂಸ್ಥೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣು ಮಕ್ಕಳು ಶಿಕ್ಷಣ ಪಡೆಯುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಡಿವೈಎಸ್ಪಿ ನಾಗರಾಜು ಮಾತನಾಡಿ, ಗುರುವಿನ ಗುರಿಯನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡಾಗ ಯಶಸ್ಸಿನ ಶಿಖರವನ್ನೇರಲು ಸಾಧ್ಯ. ಇದನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ಹೊಂಡರಬಾಳು ಮಠದ ಶ್ರೀಗಳು, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಸ್ವಾಮಿ, ಇನ್ಸ್‌ಪೆಕ್ಟರ್‌ಗಳಾದ ಬಸವರಾಜು, ಸಂತೋಷ್ ಕಶ್ಯಪ್, ಉದ್ಯಮಿ ಬಿಲ್ವ ಮಹೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net