

ಪಿರಿಯಾಪಟ್ಟಣ: ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ಜಾರಿಗೆ ತಂದ ಕೃಷಿ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ರೈತ ಸಂಬಂಧಿ ಯೋಜನೆಗಳನ್ನು ಕೈಬಿಟ್ಟಿರುವುದಾಗಿ ಆರೋಪಿಸಿ ತಾಲೂಕು ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಯಿತು.
ಬುಧವಾರ ಪಟ್ಟಣದ ತಾಲೂಕು ಆಡಳಿತ ಭವನದ ಮುಂಭಾಗ ಜಮಾಯಿಸಿದ ಪ್ರತಿಭಾಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ನವಿನ್ ಕುಮಾರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಹಿತ ಕಾಪಾಡುತ್ತಿದೆ. ಆದರೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ನೀರಾವರಿಗೂ ಹಣ ಇಲ್ಲ. ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ, ಭೂಸಿರಿ ಸೇರಿದಂತೆ ಅನೇಕ ಯೋಜನೆಗಳು ರದ್ದಾಗಿವೆ. ಅಲ್ಲದೆ, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಜನವಿರೋಧಿ ನೀತಿ ವಿರುದ್ಧ ಜನತೆ ಬೀದಿಗಿಳಿದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೇವಲ 100 ದಿನಗಳಲ್ಲಿ ರಾಜ್ಯದ 42ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಪೂರಿತ ನೀರು ಸೇವಿಸಿ ಹಲವರು ಮೃತಪಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರೈತರ ಬೆಳೆಗೆ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಯೋಜನೆಯನ್ನು ಜಾರಿಗೊಳಿಸಿದೆ. ರಾಜ್ಯದಲ್ಲಿಯೂ ಕಾಂಗ್ರೆಸ್ ಸರ್ಕಾರ ಬೆಂಬಲ ಬೆಲೆ ಯೋಜನೆ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಎಂ.ಎಂ.ರಾಜೇಗೌಡ ಮಾತನಾಡಿ, ಕಿಸಾನ್ ಸಮ್ಮಾನ್ ಯೋಜನೆಯಡಿ ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಕೊಡುತ್ತಿದ್ದ ವಾರ್ಷಿಕ 4 ಸಾವಿರ ರೂ. ಯೋಜನೆಯನ್ನು ಪ್ರಸ್ತುತ ಕಾಂಗ್ರೆಸ್ ಸರ್ಕಾರ ಮುಂದುವರಿಸಬೇಕು. ನೀರಾವರಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರಲ್ಲದೆ, ನಮ್ಮ ರೈತರಿಗೆ ನೀರು ನೀಡದೆ ಕೆಆರ್‌ಎಸ್ ಡ್ಯಾಂನಿಂದ ನೀರನ್ನು ತಮಿಳುನಾಡಿಗೆ ಹರಿಸಲಾಗುತ್ತಿದೆ ಎಂದು ಕಿಡಿಕಾರಿದರು.
ಪ್ರತಿಭಟನಾಕಾರರು ಶಿರಸ್ತೇದಾರ್ ಶಕೀಲಾ ಬಾನುವರಿಗೆ ಮನವಿ ಸಲ್ಲಿಸಿದರು. ಬಿಜೆಪಿ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಎಚ್.ಸಿ.ವೀರಭಧ್ರ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪಿ.ರಾಜೇಂದ್ರ, ಮುಖಂಡರಾದ ಆರ್.ಟಿ.ಸತೀಶ್, ಲೋಕಪಾಲಯ್ಯ, ವಿಕ್ರಂ ರಾಜ್, ರವಿ, ಪಿ.ಕೆ.ರಾಘವೇಂದ್ರ, ಶುಭಾ ಗೌಡ, ಬಾನು, ರಮೇಶ್, ಚನ್ನಬಸವರಾಜು, ಅನಿಲ್ ಕುಮಾರ್, ಮೋಹನ್, ಶರವಣ, ಹುಣಸವಾಡಿ ನಾಗೇಶ್ ಇತರರು ಇದ್ದರು.