ಪಿಎಂಎಸ್‌ವೈಎಂ ಯೋಜನೆ ಉಪಯೋಗ ಪಡೆಯಿರಿ : ಜಿಲ್ಲಾಧಿಕಾರಿ ಆರ್.ಲತಾ ಸಲಹೆ

23CBP4
Published on

ಚಿಕ್ಕಬಳ್ಳಾಪುರ : ಕಾರ್ಮಿಕ ಕಲ್ಯಾಣ ಸವಲತ್ತುಗಳ ಬಗ್ಗೆ ವ್ಯಾಪಕ ಜಾಗೃತಿ ಕಾರ್ಯಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಸಲಹೆ ನೀಡಿದರು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆಯು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆ ಹಾಗೂ ರಾಷ್ಟ್ರೀಯ ಪಿಂಚಣಿ ಯೋಜನೆ ಅಭಿಯಾನದ ಅಂಗವಾಗಿ ಸೋಮವಾರ ಆಯೋಜಿಸಿದ್ದ ಜಾಗೃತಿ ವಾಹನಕ್ಕೆ ಚಾಲನೆ ನೀಡಿ ಮಾತನಾಡಿ, ಅಸಂಘಟಿತ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಸರ್ಕಾರವು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌ಧನ್ (ಪಿಎಂಎಸ್‌ವೈಎಂ) ಯೋಜನೆ, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗಾಗಿ ರಾಷ್ಟ್ರೀಯ ಪಿಂಚಣಿ ಯೋಜನೆ ಜಾರಿಗೆ ತಂದಿದೆ. ಇದನ್ನು ಸದ್ವಿನಿಯೋಗಪಡಿಸಿಕೊಳ್ಳಬೇಕು ಎಂದರು.

ಕಾರ್ಮಿಕರ ಹಾಗೂ ವ್ಯಾಪಾರಸ್ಥರ ಪಿಂಚಣಿಯ ಸೌಲಭ್ಯಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಜನಸಂದಣಿ ಇರುವ ಜಾಗದಲ್ಲಿ ಅರಿವು ಮೂಡಿಸಬೇಕು. ಪ್ರತಿಯೊಬ್ಬ ಕಾರ್ಮಿಕರು, ವ್ಯಾಪಾರಿಗಳು, ಸ್ವಯಂ ಉದ್ಯೋಗಿಗಗಳು ಸವಲತ್ತು ಪಡೆದುಕೊಳ್ಳುವಂತಾಗಲು ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.

ಮೊದಲೇ ಅಸಂಘಟಿತ ಕಾರ್ಮಿಕರು ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದು ಸಂಧ್ಯಾ ಕಾಲದಲ್ಲಿ ಅಭದ್ರತೆಗೀಡುವಂತಾಗಿದೆ. ಬೀದಿಬದಿ ವ್ಯಾಪಾರಿಗಳು, ಬಿಸಿಯೂಟ ನೌಕರರು, ಹಮಾಲಿಗಳು, ಇಟ್ಟಿಗೆ ಭಟ್ಟಿ ಕಾರ್ಮಿಕರು, ಚಮ್ಮಾರರು, ಚಿಂದಿ ಆಯುವವರು, ಕೈಮಗ್ಗ ಕಾರ್ಮಿಕರು, ಧ್ವನಿ ಮತ್ತು ದೃಶ್ಯ ಕಾರ್ಮಿಕರು, ಚರ್ಮೋದ್ಯಮದ ಕಾರ್ಮಿಕರು, ದೈನಂದಿನ ಜೀವನದಲ್ಲಿ ಗೃಹ ಆಧಾರಿತ ಕಾರ್ಮಿಕರು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ವರಲಕ್ಷ್ಮೀ ಮಾತನಾಡಿ, ಸರ್ಕಾರಿ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಜಾಗೃತಿ ವಾಹನವು ಜಿಲ್ಲಾದ್ಯಂತ ಡಿ.6 ರವರೆಗೆ ಸಂಚರಿಸಲಿದೆ ಎಂದರು. ಫಲಾನುಭವಿಗಳಿಗೆ ಪ್ರಧಾನಮಂತ್ರಿ ಮಾನ್ ಧನ್ ಯೋಜನೆ, ರಾಷ್ಟ್ರೀಯ ಪಿಂಚಣಿ ಯೋಜನೆಯ ಗುರುತಿನ ಚೀಟಿ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net