

ಚನ್ನರಾಯಪಟ್ಟಣ: ಪಿತ್ರಾರ್ಜಿತ ಆಸ್ತಿಯ ಹಕ್ಕನ್ನು ರೈತರ ಹೆಸರಿಗೆ ವರ್ಗಾವಣೆ ಮಾಡಿಸಿಕೊಡಲು ಇ-ಪೌತಿ ಖಾತೆ ಆಂದೋಲನ ಸಹಕಾರಿಯಾಗಲಿದೆ ಎಂದು ಸಹಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಇ-ಪೌತಿ ಖಾತೆ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಎರಡು ಮೂರು ತಲೆಮಾರುಗಳಿಂದ ಮುತ್ತಾತ, ತಾತ, ತಂದೆಯ ಹೆಸರಿನಲ್ಲಿರುವ ಭೂಮಿಯ ಹಕ್ಕು ಮಕ್ಕಳಿಗೆ ಕಾನೂನಾತ್ಮಕವಾಗಿ ವರ್ಗಾವಣೆಯಾಗಿಲ್ಲ. ಇದರಿಂದಾಗಿ ಸರ್ಕಾರದ ಯಾವುದೇ ಸವಲತ್ತು ಪಡೆಯಲು ಸಾಧ್ಯವಾಗುತ್ತಿಲ್ಲ. ಕನಿಷ್ಠ ಜಮೀನಿನ ಅಭಿವೃದ್ಧಿಗೆ ಬ್ಯಾಂಕ್‌ಗಳಿಂದಲೂ ಸಾಲ ಸಿಗುತ್ತಿಲ್ಲ. ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಆಂದೋಲನ ಹಮ್ಮಿಕೊಳ್ಳಲಾಗಿದೆ. ಜಮೀನಿನ ಅನುಭವದಲ್ಲಿ ಇದ್ದರೂ ಪಿತ್ರಾರ್ಜಿತ ಆಸ್ತಿಯ ಹಕ್ಕು ಪಡೆಯಲು ಸಾಕಷ್ಟು ಜನರಿಗೆ ಸಾಧ್ಯವಾಗಿಲ್ಲ. ಹಿರಿಯರ ಮರಣ ಪ್ರಮಾಣ ಪತ್ರ ಇಲ್ಲದೆ ಸರ್ಕಾರದ ಸವಲತ್ತುಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಪೂರ್ವಿಕರ ಮರಣ ಪ್ರಮಾಣ ಪತ್ರ ಪಡೆಯಲು ಅನುಕೂಲವಾಗುವಂತೆ ಕಾನೂನಾತ್ಮಕ ನೆರವನ್ನು ಉಚಿತವಾಗಿ ನೀಡಲಾಗುವುದು ಎಂದರು.
ಹಾಸನ ಜಿಲ್ಲೆ ದರಖಾಸ್ತು ಪೋಡಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದ್ದು, ಜಿಲ್ಲಾಧಿಕಾರಿ ಅವರಿಂದ ಹಿಡಿದು ಕಂದಾಯ ಇಲಾಖೆಯ ಹಿರಿಯ ನೌಕರರವರೆಗೂ ಎಲ್ಲರೂ ಶ್ರಮವಹಿಸಿ ಕಾರ್ಯನಿರ್ವಹಿಸಿದ್ದಾರೆ ಎಂದು ಶ್ಲಾಘಿಸಿದರು.
ಜಿಲ್ಲೆಯಲ್ಲಿ 20 ಲಕ್ಷ ಸರ್ವೇ ನಂಬರ್‌ಗಳು ಪೌತಿ ಖಾತೆಗೆ ಅರ್ಜಿ ಸಲ್ಲಿಸಿದ್ದು 2,78,000 ಇ-ಪೌತಿ ಖಾತೆಗಳು ಬಾಕಿ ಉಳಿದಿದ್ದು, ಕಂದಾಯ ಇಲಾಖೆಯ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಪೂರ್ಣಗೊಳಿಸಲಾಗುವುದೆಂದು ತಿಳಿಸಿದರು.
ಸರ್ಕಾರವು ಆಡಳಿತವನ್ನು ಸಾಮಾನ್ಯ ಜನರ ಮನೆ ಬಾಗಿಲಿಗೆ ಕೊಂಡೊಯ್ಯಲು ಬಯಸುತ್ತದೆ. ಆದ್ದರಿಂದ ಮೊದಲನೇ ಶನಿವಾರ ತಾಲೂಕು ಮಟ್ಟದಲ್ಲಿ ತಹಸೀಲ್ದಾರರ ಅಧ್ಯಕ್ಷತೆಯಲ್ಲಿ ತಾಲೂಕು ಅಧಿಕಾರಿಗಳನ್ನು ಒಳಗೊಂಡಂತೆ ಜನಸ್ಪಂದನವನ್ನು ಮತ್ತು ಮೂರನೇ ಶನಿವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳನೊಳಗೊಂಡಂತೆ ಜಿಲ್ಲಾಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲು ಸರ್ಕಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಇದರಿಂದ ಸಾರ್ವಜನಿಕರು ಕಚೇರಿಗೆ ಅಲೆದಾಡುವುದು ತಪ್ಪಿದಂತಾಗುತ್ತದೆ ಹಾಗೂ ಎಲ್ಲ ಇಲಾಖೆಗಳ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಸಂಸದ ಶ್ರೇಯಸ್ ಎಂ.ಪಟೇಲ್, ಶಾಸಕರಾದ ಸಿ.ಎನ್.ಬಾಲಕೃಷ್ಣ, ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್.ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ, ಅಪಾರ ಜಿಲ್ಲಾಧಿಕಾರಿ ಶಾಂತಲಾ, ಪುರಸಭಾ ಅಧ್ಯಕ್ಷ ಸಿ.ಎನ್.ಮೋಹನ್ ಉಪ ವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರರು, ಕಂದಾಯ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.