ಪುರುಷರಿಗೆ ಸರಿಸಮನಾಗಿ ಎಲ್ಲ ಕ್ಷೇತ್ರದಲ್ಲೂ ಮಹಿಳೆಯರ ಛಾಪು: ಶಾಸಕ ಪ್ರೀತಂ ಗೌಡ

ಪುರುಷರಿಗೆ ಸರಿಸಮನಾಗಿ ಎಲ್ಲ ಕ್ಷೇತ್ರದಲ್ಲೂ ಮಹಿಳೆಯರ ಛಾಪು: ಶಾಸಕ ಪ್ರೀತಂ ಗೌಡ
Published on

ಹಾಸನ : ಮಹಿಳೆಯರು ಕುಟುಂಬ ನಿರ್ವಹಣೆಯ ಜೊತೆಗೆ ಇತ್ತೀಚಿನ ದಿನಗಳಲ್ಲಿ ಸ್ವ ಸಹಾಯ ಸಂಘದ ಮೂಲಕ ಆರ್ಥಿಕವಾಗಿ ಸಬಲರಾಗುತ್ತಿದ್ದು, ಪುರುಷರಿಗೆ ಸರಿಸಮನಾಗಿ ಎಲ್ಲಾ ಕ್ಷೇತ್ರದಲ್ಲಿಯೂ ಕೂಡ ತಮ್ಮ ಛಾಪು ಮೂಡಿಸುತ್ತಿದ್ದಾರೆ ಎಂದು ಹಾಸನ ಕ್ಷೇತ್ರದ ಶಾಸಕ ಪ್ರೀತಂ ಜೆ ಗೌಡ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ಶುಕ್ರವಾರ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಸ್ವಸಹಾಯ ಸಂಘಗಳು ಉತ್ಪಾದಿಸಿದ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ಕುಟುಂಬ ನಿರ್ವಹಣೆ ಜೊತೆಗೆ ದೇಶದ ಅಭಿವೃದ್ಧಿಯಲ್ಲಿ ಕೂಡ ಮಹಿಳೆಯರ ಪಾತ್ರ ಅಪಾರವಾಗಿದೆ ಎಂದು ಹೇಳಿದರು.

ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಸಾವಿರಾರು ಕೋಟಿ ವೆಚ್ಚದಲ್ಲಿ ಸ್ವಸಹಾಯ ಸಂಘಗಳು ಮತ್ತು ಸಣ್ಣ ಕೈಗಾರಿಕೆ ಹಾಗೂ ಗುಡಿ ಕೈಗಾರಿಕೆಗೆ ಪ್ರೋತ್ಸಾಹಕಕ್ಕೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರು ಕೂಡ ಕೈಗಾರಿಕೆಗಳಲ್ಲಿ ಸಾಕಷ್ಟು ಅಭಿವೃದ್ಧಿ ಸಾಧಿಸಿದ್ದಾರೆ. ಕುಟುಂಬ ನಿರ್ವಹಣೆಯ ಜೊತೆಗೆ ಹಲವು ಮಂದಿಗೆ ಉದ್ಯೋಗವನ್ನು ಕಲ್ಪಿಸುವ ಅವಕಾಶವನ್ನು ಕೂಡ ಅವರೇ ಸೃಷ್ಟಿ ಮಾಡುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಕೆ. ರವಿಕಾಂತ್ ಅವರು ಮಾತನಾಡಿ, ಮಹಿಳೆಯರು ಇತ್ತೀಚಿನ ದಿನಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಕೂಡ ಪುರುಷರಿಗೆ ಸರಿಸಮನಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿರುವುದು ನಿಜಕ್ಕೂ ಸಂತೋಷದ ವಿಚಾರ ಎಂದು ಹೇಳಿದರು.

1975ರಲ್ಲಿ ವಿಶ್ವಸಂಸ್ಥೆಯು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನಾಗಿ ಘೋಷಣೆ ಮಾಡಿತು. ಭಾರತ 2001ರಲ್ಲಿ ಮಹಿಳಾ ಸಬಲೀಕರಣ ಎಂದು ಘೋಷಣೆ ಮಾಡಿತು. ಅಂದಿನಿಂದ ನಮ್ಮ ದೇಶದಲ್ಲಿ ಮಹಿಳೆಯರಿಗಾಗಿ ಸಾಕಷ್ಟು ಹಲವು ವಿನೂತನ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಲಾಗಿದೆ ಎಂದರು.

ಮಹಿಳೆಯರಿಗೆ ತನ್ನದೇ ಆದ ಹಕ್ಕು ಮತ್ತು ಗೌರವಗಳಿವೆ. ಅವುಗಳಿಗೆ ಧಕ್ಕೆಯಾದರೆ ಕಾನೂನಿನ ಮೂಲಕ ಅವರು ನ್ಯಾಯ ಪಡೆದುಕೊಳ್ಳಬಹುದಾಗಿದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ಶೋಷಣೆ ಹೆಚ್ಚಾಗುತ್ತಿದ್ದು, ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ನಾವೆಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬರೂ ತಪ್ಪದೆ ಮತ ಚಲಾಯಿಸಬೇಕು. ಉತ್ತಮ ನಾಯಕರನ್ನು ಆಯ್ಕೆ ಮಾಡುವ ಮೂಲಕ ಸಂವಿಧಾನಬದ್ದ ಹಕ್ಕನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೃಷ್ಣೇಗೌಡ ಮಾತನಾಡಿ, ಮಹಿಳೆ ದೈವ ಸ್ವರೂಪ. ತಾಯಿ, ಸಣ್ಣ-ಪುಟ್ಟ ಆದಾಯದ ಮೂಲ ಹುಡುಕಿ ಹಣ ಕೂಡಿಟ್ಟು ಮಕ್ಕಳ ಓದು, ಭವಿಷ್ಯ ರೂಪಿಸುತ್ತಾಳೆ. ಆಕೆಯ ಬದುಕಿನ ಸಂಸ್ಕೃತಿ, ಜೀವನ ಮೌಲ್ಯಗಳನ್ನು ಯುವ ಸಮುದಾಯ ಅರಿಯಬೇಕು ಎಂದರು.

ಕಾರ್ಯಕ್ರಮದಲ್ಲಿ ಮಹಿಳಾ ತಂಡಗಳ ಕೋಲಾಟ, ಡೊಳ್ಳು ಕುಣಿತ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾ ಯೋಜನಾ ನಿರ್ದೇಶಕ ಬಿ.ಎ. ಜಗದೀಶ್, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ವಿನೋದ್ ಚಂದ್ರ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಎ.ಎಸ್.ಕೋಕಿಲಾ, ಬಿಎ ಕೃಷ್ಣೇಗೌಡ, ಕೋಮಲಾ ರಾಜಶೇಖರ್, ಪೂರ್ಣೇಶ್, ಹಿರಿಯ ಸ್ವಾತಂತ್ರೃ ಹೋರಾಟಗಾರ ಎಚ್.ಎಂ. ಶಿವಣ್ಣ, ಮಹಾಂತಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net