

ಬೀದರ್: ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಿಗರ ಸಾರಥ್ಯ) ಜಿಲ್ಲಾ ಘಟಕದಿಂದ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ರ್ಯಾಲಿ ನಡೆಸಿ, ದಿನ ನಿತ್ಯ ಪೆಟ್ರೋಲ್, ಡೀಸೆಲ್ ಬೆಲೆ ಗಣನೀಯ ಹೆಚ್ಚಳವಾಗುತ್ತಿದ್ದು ಜನಸಾಮಾನ್ಯರಿಗೆ ಇನ್ನಿಲ್ಲದ ಹೊರೆಯಾಗುತ್ತಿದೆ. ಆದರೂ ಸರ್ಕಾರ ಬೆಲೆ ನಿಯಂತ್ರಣಕ್ಕಾಗಿ ಕ್ರಮ ಕೈಗೊಳ್ಳದೆ ಕಣ್ಮುಚ್ಚಿ ಕುಳಿತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತೈಲ ಬೆಲೆ ಏರಿಕೆಯಿಂದಾಗಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿ, ಬಡ ಮತ್ತು ಮಧ್ಯಮ ವರ್ಗದ ಜನರ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಕರೊನಾ ಸಂಕಷ್ಟಕ್ಕೆ ಸಿಲುಕಿರುವ ಜನ ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಜನಹಿತದಿಂದ ಕೂಡಲೇ ಬೆಲೆ ಕಡಿಮೆಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಬೇಡಿಕೆ ಕುರಿತು ಮುಖ್ಯಮಂತ್ರಿಗೆ ಬರೆದ ಮನವಿಪತ್ರ ಜಿಲ್ಲಾಡಳಿತಕ್ಕೆ ಸಲ್ಲಿಸಲಾಯಿತು. ವೇದಿಕೆ ಜಿಲ್ಲಾ ಅಧ್ಯಕ್ಷ ಪೀಟರ್ ಚಿಟಗುಪ್ಪ, ಪ್ರಮುಖರಾದ ಸೈಮನ್ ಚಿಲ್ಲರ್ಗಿ, ಜಗನ್ನಾಥ ಕೌಠಾ, ರಾಜಶೇಖರ ಹಲ್ಮಡಗೆ, ಗುರುರಾಜ ಮೇತ್ರೆ, ಸ್ವಾಮಿದಾಸ ಸೋರಳ್ಳಿಕರ್, ಮಹೇಂದ್ರಕುಮಾರ ಮೇತ್ರೆ ಇತರರಿದ್ದರು.