ಪೊಲೀಸರ ಅಮಾನತು ಖಂಡಿಸಿ ಪ್ರತಿಭಟನೆ

10rajesh2
Published on

ಚಾಮರಾಜನಗರ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವುದನ್ನು ಖಂಡಿಸಿ ಜಿಲ್ಲಾ ನಾಯಕ ಸಮುದಾಯದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಸಂತೇಮರಹಳ್ಳಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ನಾಯಕ ಸಮುದಾಯದ ಮುಖಂಡ ಕೆಲ್ಲಂಬಳ್ಳಿ ಸೋಮ ನಾಯಕ ಮಾತನಾಡಿ, ರಾಜ್ಯ ಸರ್ಕಾರ ತರಾತುರಿಯಲ್ಲಿ ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡುವ ಮೂಲಕ 11 ಜನ ಅಮಾಯಕರ ಸಾವಿಗೆ ಕಾರಣವಾಗಿದೆ. ರಾಜ್ಯದಲ್ಲಿ ಸೂಕ್ತ ರೀತಿಯಲ್ಲಿ ಆಡಳಿತ ನಡೆಸಲು ಪೊಲೀಸರಿಗೆ ಅವಕಾಶ ಮಾಡಿಕೊಡದ ಕಾರಣದಿಂದ ಇಂತಹ ಅವಘಡ ಸಂಭವಿಸಿದೆ. ಆದರೇ ಸರ್ಕಾರ ತಮ್ಮ ತಪ್ಪನ್ನು ಮುಚ್ಚಿಕೊಳ್ಳುವ ಉದ್ದೇಶದಿಂದ ಅಮಾಯಕ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಿರುವುದು ಅತ್ಯಂತ ಖಂಡನೀಯ ಎಂದರು.

ಈ ಪ್ರಕರಣದ ಸಂಪೂರ್ಣ ಹೊಣೆಯನ್ನು ಹೊತ್ತುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಗೃಹಸಚಿವ ಜಿ.ಪರಮೇಶ್ವರ್ ರಾಜೀನಾಮೆಯನ್ನು ನೀಡಬೇಕು. ಪೊಲೀಸ್ ಅಧಿಕಾರಿಗಳ ಅಮಾನತ್ತು ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ನಗರಸಭಾ ಸದಸ್ಯ ಶಿವರಾಜ್, ಯ.ರಾಜುನಾಯಕ, ಸಂತೋಷ್, ಬುಲೆಟ್ ಚಂದ್ರು, ಚೇತು, ರಂಗಸ್ವಾಮಿ, ಚಂದು, ಬಸವರಾಜು, ಸತೀಶ್, ರಾಜು, ಶಂಕರ್, ಸೋಮು, ಶಿವಮೂರ್ತಿ ಹಾಗೂ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net