ಪೊಲೀಸರ ಮಕ್ಕಳ ಪ್ರತಿಭೆ ಅನಾವರಣಗೊಳ್ಳಲಿ: ಕೇಶವ ಕಾಮತ್

police
Published on

ಮಡಿಕೇರಿ: ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮಕ್ಕಳಲ್ಲಿ ಅಡಗಿರುವ ಕಲಾಪ್ರತಿಭೆಯನ್ನು ಅನಾವರಣಗೊಳಿಸಲು ಪೊಲೀಸ್ ಸಾಂಸ್ಕೃತಿಕ ವೇದಿಕೆ ಸದ್ಬಳಕೆಯಾಗಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಕರೆ ನೀಡಿದರು.

ಕೊಡಗು ಜಿಲ್ಲಾ ಪೊಲೀಸ್‌ನ ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ ವತಿಯಿಂದ ತಿಂಗಳಿಗೊಂದು ಕಾರ್ಯಕ್ರಮದಡಿ ನಗರದ ಗಾಂಧಿ ಭವನದಲ್ಲಿ ಭಾನುವಾರ ನಡೆದ ಜನಪದ ಗೀತೆ ಮತ್ತು ಭಾವಗೀತೆಗಳ ಸಂಗಮದ ಪ್ರತಿಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾನೂನನ್ನು ಕಾಪಾಡುವ ಪೊಲೀಸರಲ್ಲಿ ಕೂಡ ಕಲಾವಿದನಿರುತ್ತಾನೆ. ಈ ಕಲಾವಿದನ ಪ್ರತಿಭೆಯನ್ನು ಪ್ರತಿಬಿಂಬಿಸಲು ಪೊಲೀಸ್ ಸಾಂಸ್ಕೃತಿಕ ವೇದಿಕೆ ಹೆಚ್ಚು ಉಪಯುಕ್ತವಾಗಿದೆ. ಇದೇ ವೇದಿಕೆಯಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮಕ್ಕಳ ಪ್ರತಿಭೆ ಕೂಡ ಅನಾವರಣಗೊಳ್ಳಬೇಕು. ಇದರಿಂದ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ದೊರೆತಂತ್ತಾಗುತ್ತದೆ ಮತ್ತು ಶಾಲಾ, ಕಾಲೇಜುಗಳಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಸ್ಫೂರ್ತಿ ದೊರೆತಂತ್ತಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆಯ ಕಾರ್ಯಕ್ರಮಗಳಿಗೆ ಕನ್ನಡ ಸಾಹಿತ್ಯ ಪರಿಷತ್ ಸಂಪೂರ್ಣ ಸಹಕಾರ ನೀಡಲಿದ್ದು, ಪೊಲೀಸರು ಕಸಾಪದ ಸದಸ್ಯತ್ವ ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಪೊಲೀಸ್ ಸಾಂಸ್ಕೃತಿಕ ವೇದಿಕೆ ನಡೆಸುವ ಯಾವುದೇ ಕಾರ್ಯಕ್ರಮಗಳಿಗೆ ಕನ್ನಡ ಸಾಹಿತ್ಯ ಪರಿಷತ್ ಬೆಂಗಾವಲಾಗಿ ನಿಲ್ಲಲಿದೆ. ನಿತ್ಯ ಖಾಕಿ ಸಮವಸ್ತ್ರ ಧರಿಸಿ ಕರ್ತವ್ಯದಲ್ಲೇ ನಿರತರಾಗಿರುವ ಪೊಲೀಸರಿಗೆ ತಿಂಗಳಿಗೊಮ್ಮೆ ನಡೆಸುವ ಸಾಂಸ್ಕೃತಿಕ ಕಾರ್ಯಕ್ರಮ ಮನಸ್ಸಿಗೆ ಸಂತೋಷವನ್ನು ನೀಡುತ್ತದೆ. ಈ ವೇದಿಕೆಯಡಿ ಕಲಾ ಪ್ರತಿಭೆಯನ್ನು ಪ್ರದರ್ಶಿಸುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ರಾಷ್ಟ್ರಮಟ್ಟದಲ್ಲೂ ಮಿಂಚಬೇಕು ಎಂದರು.

ಜಾನಪದ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ.ಅನಂತಶಯನ ಮಾತನಾಡಿ, ಬದುಕಿನ ಜಂಜಾಟದಿಂದ ಹೊರ ಬಂದು ಕೊಂಚ ಕಾಲ ಸಾಂಸ್ಕೃತಿಕ ಸಂಭ್ರಮದಲ್ಲಿ ಮನಸ್ಸನ್ನು ಹಗುರವಾಗಿಸಿಕೊಳ್ಳಲು ರಚನೆಯಾಗಿರುವ ಪೊಲೀಸ್ ಸಾಂಸ್ಕೃತಿಕ ವೇದಿಕೆ ಒಂದು ವಿಭಿನ್ನ ಪ್ರಯತ್ನವಾಗಿದೆ. ಪ್ರತಿ ತಿಂಗಳು ಕಾರ್ಯಕ್ರಮ ಆಯೋಜಿಸುವ ಚಿಂತನೆ ಮತ್ತು ಯೋಜನೆಯನ್ನು ಮುಂದುವರೆಸಿಕೊಂಡು ಹೋಗುವಂತೆ ಸಲಹೆ ನೀಡಿದರು.

ಕಸಾಪದ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್ ಮಾತನಾಡಿ ನಾಡು, ನುಡಿ, ಸಾಹಿತ್ಯ, ಸಂಸ್ಕೃತಿ, ಸಂಗೀತದ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬಹುದು. ಪೊಲೀಸ್ ಸಾಂಸ್ಕೃತಿಕ ವೇದಿಕೆಯ ರಚನೆ ಅದ್ಭುತ ಚಿಂತನೆಯಾಗಿದೆ. ಇದು ಬದುಕಿನ ಜಂಜಾಟವನ್ನು ಮರೆತು ಕೌಟುಂಬಿಕ ಸಂಬಂಧಗಳನ್ನು ಗಟ್ಟಿಗೊಳಿಸಲು ಮತ್ತು ಒಂದೆಡೆ ಸೇರಿ ಪ್ರತಿಭೆಯನ್ನು ವಿನಿಮಯ ಮಾಡಿಕೊಳ್ಳಲು ಸಹಕಾರಿಯಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್ ರಾಜ್, ಡಿವೈಎಸ್‌ಪಿಗಳಾದ ಮಡಿಕೇರಿಯ ಪಿ.ಎ.ಸೂರಜ್, ಸೋಮವಾರಪೇಟೆಯ ಗಂಗಾಧರಪ್ಪ ಆರ್.ವಿ, ವಿರಾಜಪೇಟೆಯ ಮಹೇಶ್ ಕುಮಾರ್, ಸೆನ್ ಡಿವೈಎಸ್‌ಪಿ ರವಿ, ವೃತ್ತ ನಿರೀಕ್ಷಕರಾದ ಐ.ಪಿ.ಮೇದಪ್ಪ, ಅನೂಪ್ ಮಾದಪ್ಪ ಆರ್.ಪಿ.ಚೆನ್ನ ನಾಯಕ, ಠಾಣಾಧಿಕಾರಿಗಳಾದ ತಮ್ಮಯ್ಯ, ಲತಾ, ನವೀನ್, ಮಂಜುನಾಥ್, ಗೀತಾ ಹೆಚ್.ಟಿ ಮತ್ತಿತರ ಪೊಲೀಸರ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಂದ ಮೂಡಿ ಬಂದ ಜನಪದ ಗೀತೆ ಮತ್ತು ಭಾವಗೀತೆ ಕಲಾಭಿಮಾನಿಗಳ ಮನಸೂರೆಗೊಂಡಿತು. ಪ್ರತಿಭೆಯನ್ನು ಅನಾವರಣಗೊಳಿಸಿದ ಪೊಲೀಸರಿಗೆ ನೆನಪಿನ ಕಾಣಿಕೆ ನೀಡಿ ಪ್ರೋತ್ಸಾಹಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net