ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಕ್ರಮ

Abhinandana Samarambh
Published on

ಬೀದರ್: ಗುತ್ತಿಗೆ ಆಧಾರಿತ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂಖಾನ್ ಭರವಸೆ ನೀಡಿದರು.
ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಬೀದರ್ ಶಾಖೆ ವತಿಯಿಂದ ನಗರದ ಝೀರಾ ಕನ್ವೆನ್ಶನ್ ಹಾಲ್‍ನಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಬೇಡಿಕೆಗಳ ಬಗ್ಗೆ ಸರ್ಕಾರ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು. ನಿಯಮಾನುಸಾರ ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ರಾಜ್ಯ ಅಧ್ಯಕ್ಷ ಕೆ. ಪ್ರಭಾಕರ ಅವರು, ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಮೇಲ್ವಿಚಾರಕರು, ಲೋಡರ್ಸ್, ಕ್ಲೀನರ್ಸ್, ಕಸ ಸಾಗಣೆ ವಾಹನ ಚಾಲಕರು, ವಾಟರ್ ಮೆನ್, ಕಂಪ್ಯೂಟರ್ ಆಪರೇಟರ್‍ಗಳ ಸೇವೆ ಕಾಯಂಗೊಳಿಸಬೇಕು ಎಂದು ಬೇಡಿಕೆ ಮಂಡಿಸಿದರು.
ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಸಂಘದ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಜಿ. ಎಸ್. ಮಂಜುನಾಥ, ನಗರ ಅಭಿವೃದ್ಧಿ ಯೋಜನಾ ಕೋಶದ ನಿರ್ದೇಶಕ ಮೋತಿಲಾಲ್ ಲಮಾಣಿ, ಬೀದರ್ ನಗರಸಭೆ ಆಯುಕ್ತ ಶಿವರಾಜ ರಾಠೋಡ್, ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಗುರುನಾಥ, ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಖಾನ್, ಪ್ರಧಾನ ಕಾರ್ಯದರ್ಶಿ ಸುಭಾಷ್ ಧನ್ನೂರೆ, ನಗರಸಭೆ ಸದಸ್ಯರು, ಪುರಸಭೆ, ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳು ಇದ್ದರು.
ಜಿಲ್ಲೆಯ ವಿವಿಧೆಡೆಯ ನೂರಾರು ಪೌರ ಕಾರ್ಮಿಕರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net