

ಮೈಸೂರು: ನೇರ ಪಾವತಿಯಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರು ಹಾಗೂ ಯುಜಿಡಿ ಕಾರ್ಮಿಕರನ್ನು ಕಾಯಂಗೊಳಿಸಲು ರಾಜ್ಯ ಸರ್ಕಾರ ಕ್ರಮ ವಹಿಸಲಿದೆ ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಕೋಟೆ ಎಂ. ಶಿವಣ್ಣ ಹೇಳಿದರು.
ಸಮಾಜ ಕಲ್ಯಾಣ ಇಲಾಖೆ, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಮತ್ತು ಅಭಿವೃದ್ಧಿ ನಿಗಮ ವತಿಯಿಂದ ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ ಮತ್ತು ನಿಯಮ-2013 ರ ಪರಿಣಾಮಕಾರಿ ಅನುಷ್ಠಾನದ ಕುರಿತು ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದರು.
ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರ ಮಾಹಿತಿ ತಕ್ಷಣ ದೊರೆಯುತ್ತದೆ. ಆದರೆ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಮಾಲ್ ಸೇರಿದಂತೆ ವಿವಿಧೆಡೆ ಕೆಲಸ ಮಾಡುವ ಪೌರ ಕಾರ್ಮಿಕರ ಮಾಹಿತಿ ದೊರೆಯುತ್ತಿಲ್ಲ. ಅಂತಹ ಪೌರಕಾರ್ಮಿಕರನ್ನು ಗುರುತಿಸಿ ಸವಲತ್ತುಗಳನ್ನು ಒದಗಿಸಲು ಪ್ರಾಯೋಗಿಕವಾಗಿ ಮೈಸೂರು ಮತ್ತು ಬಳ್ಳಾರಿಯಲ್ಲಿ ಅವರುಗಳನ್ನು ಗುರುತಿಸಲು ಸರ್ವೇ ಕಾರ್ಯ ಮಾಡುತ್ತಿದ್ದೇವೆ ಎಂದರು.
ಪೌರ ಕಾರ್ಮಿಕರಿಗೆ ಪ್ರಸ್ತುತ ನೀಡುತ್ತಿರುವ ಸಮವಸ್ತ್ರ ಸಾಕಷ್ಟು ಪೌರಕಾರ್ಮಿಕರಿಗೆ ಹೊಂದಾಣಿಕೆ ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗೆ ಹೊಂದಾಣಿಕೆ ಆಗುವ ರೀತಿಯ ಹಾಗೂ ರಾಜ್ಯದಲ್ಲಿ ಏಕರೂಪದ ಸಮವಸ್ತ್ರ ತರಲಾಗುವುದು. ನೇರ ಪಾವತಿಯ ಪೌರ ಕಾರ್ಮಿಕರು ಮೃತಪಟ್ಟರೆ ಅವರ ಕುಟುಂಬದವರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ದೊರೆಯುತ್ತಿಲ್ಲ. ಇನ್ನು ಮುಂದೆ ಅನುಕಂಪದ ಆಧಾರದ ಉದ್ಯೋಗ ಹಾಗೂ 10 ಲಕ್ಷ ಪರಿಹಾರ ರೂ. ನೀಡಲು ಕ್ರಮ ವಹಿಸಲಾಗುವುದು. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪೌರ ಕಾರ್ಮಿಕರಿಗೆ ವಿಶ್ರಾಂತಿ ಗೃಹ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.