

ಹಾಸನ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಶ್ರೇಯೋಭಿವೃದ್ಧಿಗೆ ಸರ್ಕಾರ ಇಲಾಖಾವಾರು ರೂಪಿಸಿರುವ ಯೋಜನೆಗಳ ಸೌಲಭ್ಯವನ್ನು ಅಧಿಕಾರಿಗಳು ಕಾಲಮಿತಿಯೊಳಗೆ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕೆಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿ ವಿವಿಧ ಇಲಾಖೆಗಳು ಅನುಷ್ಠಾನ ಮಾಡುತ್ತಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಡಿಸೆಂಬರ್ ಒಳಗಾಗಿ ಎಲ್ಲಾ ಇಲಾಖೆಗಳು ಶೇಕಡ ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸಿರಬೇಕು ಎಂದು ತಾಕೀತು ಮಾಡಿದರು.
ಅನುದಾನ ದುರ್ಬಳಕೆಯಾಗದಂತೆ ನಿಗಾವಹಿಸುವುದರ ಜೊತೆಗೆ ಅಗತ್ಯ ಅನುದಾನ ವೆಚ್ಚಮಾಡದಿದ್ದರೆ ಅಧಿಕಾರಿಗಳೇ ಹೊಣೆಗಾರರಾಗಬೇಕಾಗುತ್ತದೆ. ಕೆಲವು ಇಲಾಖೆಗಳ ಪ್ರಗತಿ ಕುಂಠಿತವಾಗಿದೆ. ಹಂಚಿಕೆ ಮಾಡಬೇಕಾದ ಅನುದಾನವನ್ನು ನಿಯಮಾನುಸಾರ ಸಕಾಲಕ್ಕೆ ಒದಗಿಸಬೇಕು. ವೈಯಕ್ತಿಕ ಫಲಾನುಭವಿಗಳ ಆಯ್ಕೆ ಶೀಘ್ರ ಪೂರ್ಣಗೊಳಿಸಬೇಕು. ಶಾಸಕರಿಂದ ಹಾಗೂ ತಾಲೂಕು ಪಂಚಾಯಿತಿಗಳಿಂದ ಅಗತ್ಯ ಇರುವ ಅನುದಾನದ ಅನುಮೋದನೆ ಪಡೆದು ಡಿಸೆಂಬರ್ ಅಂತ್ಯದೊಳಗೆ ವೆಚ್ಚಮಾಡಬೇಕು ಎಂದು ನಿರ್ದೇಶನ ನೀಡಿದರು.
ಎಲ್ಲ ನಗರ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆ ಪ್ರಗತಿ ಕುಂಠಿತವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಅರ್ಚನಾ, ಸಂಬಂಧಪಟ್ಟ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸುವಂತೆ ಪೌರಾಡಳಿತ ನಿರ್ದೇಶನಾಲಯದ ಅಧಿಕಾರಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ. ಪುನೀತ್, ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಎಸ್. ಪ್ರಕಾಶ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಕೆ.ಎಂ. ಸತೀಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಯೋಗೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಿವಸ್ವಾಮಿ, ನಗರಸಭೆ ಆಯುಕ್ತ ಪರಮೇಶ್ವರಪ್ಪ ಮತ್ತಿತರರು ಭಾಗವಹಿಸಿದ್ದರು.