

ಬೀದರ್: ಜಿಲ್ಲೆಯಲ್ಲಿ ಆ.13 ರಿಂದ 15 ರವರೆಗೆ ಪ್ರತಿಯೊಬ್ಬರೂ ತಮ್ಮ ತಮ್ಮ ಮನೆ ಮೇಲೆ ತಪ್ಪದೆ ರಾಷ್ಟ್ರ ಧ್ವಜ ಹಾರಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಮನವಿ ಮಾಡಿದರು.
ಇಲ್ಲಿಯ ವಾಣಿಜ್ಯ ತೆರಿಗೆ ಇಲಾಖೆ ಕಚೇರಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ರಾಷ್ಟ್ರ ಧ್ವಜ ಉಚಿತವಾಗಿ ವಿತರಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲಾ ಆಡಳಿತ ಹಮ್ಮಿಕೊಂಡ ವಿವಿಧ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಸಕ್ರೀಯವಾಗಿ ಪಾಲ್ಗೊಂಡಿದ್ದಾರೆ. ಸೈಕಲ್ ಜಾಥಾ, ಬೈಕ್ ರ್ಯಾಲಿ, ತಿರಂಗಾ ಯಾತ್ರೆ, ಭಾವೈಕ್ಯತೆ ರ್ಯಾಲಿಯ ಯಶಸ್ಸಿಗೆ ಶ್ರಮಿಸಿದ್ದಾರೆ ಎಂದು ತಿಳಿಸಿದರು.
ಅಮೃತ ಮಹೋತ್ಸವ ಸವಿ ನೆನಪಿಗಾಗಿ ಆ.15 ರಂದು ನೌಕರರ ಸಮುದಾಯ ಭವನದಲ್ಲಿ 75 ಸಸಿಗಳನ್ನು ನೆಡಲಾಗುವುದು ಎಂದು ತಿಳಿಸಿದರು.
ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ಶಂಕರೆಪ್ಪ ಡೊಂಗರೆ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರಾದ ಶಾಂತಕುಮಾರ ರಾಠೋಡ್, ಸತೀಶ್, ವಾಣಿಜ್ಯ ತೆರಿಗೆ ಅಧಿಕಾರಿಗಳಾದ ಸಿದ್ದಣ್ಣ ಕುಂಬಾರ, ಮಹೇಶ ಮಾಶೆಟ್ಟಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಡಾ. ರಾಜಕುಮಾರ ಹೊಸದೊಡ್ಡೆ, ಪ್ರಧಾನ ಕಾರ್ಯದರ್ಶಿ ರಾಜಶೇಖರ ಮಂಗಲಗಿ ಇದ್ದರು.