

ಚಿಕ್ಕಬಳ್ಳಾಪುರ: 2024ರ ವೇಳೆ ಎತ್ತಿನಹೊಳೆ ಯೋಜನೆ ಮೂಲಕ ಪ್ರತಿ ಹಳ್ಳಿಗೆ ನೀರು ಹರಿಸುವುದು, ಚಿಕ್ಕಬಳ್ಳಾಪುರವನ್ನು ಉಪ ನಗರವನ್ನಾಗಿ ಪರಿಗಣಿಸಿ ಮೆಟ್ರೊ ರೈಲು ವಿಸ್ತರಣೆ, ಆರೋಗ್ಯ ಕೇಂದ್ರಗಳ ಮೇಲ್ದರ್ಜೆಗೇರಿಸುವಿಕೆ ಸೇರಿ ಮಹತ್ತರವಾದ ಕೊಡುಗೆಗಳು ಜಿಲ್ಲೆಗೆ ಸಿಗುವಂತಾಗಲು ಶ್ರಮಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಮಾಹಿತಿಯನ್ನೊಳಗೊಂಡ ‘ಸವಾಲುಗಳ ಎರಡು ವರ್ಷ, ಸಮೃದ್ಧಿಯ ಹರ್ಷ’ ಕಿರುಹೊತ್ತಿಗೆಯನ್ನು ಸೋಮವಾರ ಜಿಲ್ಲಾಡಳಿತ ಭವನದಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು.
ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿ ವೇಗ ಹೆಚ್ಚಾಗಿದೆ. 600 ಕೋಟಿ ರೂ. ವೆಚ್ಚದ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ಕಾಮಗಾರಿ ಭರದಿಂದ ನಡೆಯುತ್ತಿದೆ. ಈಗಾಗಲೇ 200 ಕೋಟಿ ರೂ. ವೆಚ್ಚದ ಕೆಲಸ ಪೂರ್ಣಗೊಂಡಿದೆ ಎಂದರು.
ಈ ಭಾಗದ ಅಂತರ್ಜಲಮಟ್ಟ ಹೆಚ್ಚಿಸುವ ಉದ್ದೇಶದಿಂದ ಎಚ್.ಎನ್.ವ್ಯಾಲಿ ಯೋಜನೆಯ ಮೂಲಕ ಸಣ್ಣ ನೀರಾವರಿ ಇಲಾಖೆಗೆ ಸೇರಿದ 32 ಕೆರೆಗಳಿಗೆ ಹರಿಸಲಾಗುತ್ತಿದೆ. ಕರ್ನಾಟಕದಲ್ಲಿ ಮೊದಲ ಬಾರಿಗೆ ಚಿಂತಾಮಣಿಯಿಂದ ದೆಹಲಿಗೆ ಕಿಸಾನ್ ರೈಲು ಸಂಚಾರಕ್ಕೆ ಚಾಲನೆ ನೀಡಲಾಗಿದೆ ಎಂದು ಸುಧಾಕರ್ ತಿಳಿಸಿದರು.
ಕೋಟ್ಯಂತರ ರೂ. ಅನುದಾನದಲ್ಲಿ ಜಿಲ್ಲೆಯನ್ನು ಅಭಿವೃದ್ಧಿಪಡಿಸುವ ಪ್ರಕ್ರಿಯೆ ನಿರೀಕ್ಷೆಗೂ ಮೀರಿದ ವೇಗದಲ್ಲಿ ನಡೆಯುತ್ತಿದೆ, ಇದಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ರಾಜ್ಯ ಮಾವು ಮತ್ತು ಮಾರುಕಟ್ಟೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜ್ ಮನವಿ ಮಾಡಿದರು.
ಜಿಪಂ ಸಿಇಒ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಎಂ.ಜುಂಜಣ್ಣ, ವಾರ್ತಾ ಸಹಾಯಕ ಎಂ.ಆರ್.ಮಂಜುನಾಥ್ ಮತ್ತಿತರರು ಇದ್ದರು.