ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

20 krp 01
Published on

ಕೆ.ಆರ್.ಪೇಟೆ: ಹಣ ಇರುವವರಲ್ಲಿ ಬೆರಳೆಣಿಕೆಯಷ್ಟು ಜನ ಮಾತ್ರ ಸಂಕಷ್ಟದಲ್ಲಿರುವವರ ಕಣ್ಣೀರು ಒರೆಸುವ ಕೆಲಸ ಮಾಡುತ್ತಾರೆ. ಅವರಲ್ಲಿ ಆರ್‌ಟಿಒ ಅಧಿಕಾರಿ ಮಲ್ಲಿಕಾರ್ಜುನ್ ಕೂಡ ಒಬ್ಬರು ಎಂದು ಕ್ಷೇತ್ರಶಿಕ್ಷಣಾಧಿಕಾರಿ ಆರ್.ಎಸ್.ಸೀತಾರಾಮು ತಿಳಿಸಿದರು.
ಪಟ್ಟಣದ ಜಯನಗರ ಬಡಾವಣೆಯ ಆರ್‌ಟಿಒ ಮಲ್ಲಿಕಾರ್ಜುನ್ ಕಚೇರಿಯ ಆವರಣದಲ್ಲಿ ಮಲ್ಲಿಕಾರ್ಜುನ ಅಭಿಮಾನಿ ಬಳಗದ ವತಿಯಿಂದ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮಲ್ಲಿಕಾರ್ಜುನ್ ಅವರು ತಾಲೂಕಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡುತ್ತಿರುವುದು ಸಂತಸದ ವಿಷಯ. ತಾಲೂಕಿನ ಅನೇಕ ದೇವಾಲಯಗಳ ನಿರ್ಮಾಣಕ್ಕೆ ಸಹಾಯ ಧನ, ಅನಾರೋಗ್ಯ ಪೀಡಿತರು ಹಾಗೂ ಅತಿವೃಷ್ಟಿ, ಅನಾವೃಷ್ಟಿಯಲ್ಲಿ ತೊಂದರೆಗೆ ಒಳಗಾದ ರೈತರಿಗೆ ಆರ್ಥಿಕ ನೆರವು ನೀಡುತ್ತಿರುವುದು ಶ್ಲಾಘನೀಯ ಎಂದರು.
ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿದ ಸುಮಾರು 300 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಬಿಜಿಎಸ್ ಸಂಸ್ಥೆಯ ಆಡಳಿತಾಧಿಕಾರಿ ಡಾ.ಜೆ.ಎನ್.ರಾಮಕೃಷ್ಣೇಗೌಡ, ಆರ್.ಟಿ.ಒ ಮಲ್ಲಿಕಾರ್ಜುನ್, ರಾಖೇಶ್ ಸಂಜೀವ್‌ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಮಮತಾಶೆಟ್ಟಿ, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಶಿವಕುಮಾರ್, ಟೊಯೊಟಾ ಕಿರ್ಲೋಸ್ಕರ್ ಕಂಪನಿ ಮುಖ್ಯಸ್ಥ ರಮೇಶ್, ಮಾನಸಗಂಗೋತ್ರಿಯ ಪ್ರಾಧ್ಯಾಪಕಿ ಡಾ.ಲೋಕಿಲಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net