ಪ್ರತಿಯೊಂದು ಕ್ಷೇತ್ರದಲ್ಲೂ ಛಾಪುಮೂಡಿಸಿರುವ ಮಹಿಳೆಯರು

17rajesh3
Published on

ಚಾಮರಾಜನಗರ: ಭಾರತೀಯ ಸಂಸ್ಕೃತಿಯ ಪ್ರಕಾರ ಮಹಿಳೆ ಒಂದು ವಿಶ್ವವಿದ್ಯಾಲಯವಿದ್ದಂತೆ. ನಮ್ಮ ಸಂಸ್ಕೃತಿ ಪರಂಪರೆ ಮಹಿಳೆಯರಿಗೆ ಅಷ್ಟೊಂದು ಶಕ್ತಿಯನ್ನು ನೀಡಿದೆ ಎಂದು ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ಬಣ್ಣಿಸಿದರು.

ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಜೆಎಸ್‌ಎಸ್ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಹಲವಾರು ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದುಕೊಂಡಿದ್ದಾರೆ. ಇದು ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸ್ಪೂರ್ತಿಯನ್ನು ನೀಡಿದೆ ಎಂದು ಭಾವಿಸಿಕೊಳ್ಳಬೇಕು. ಪ್ರಸ್ತುತ ಸಂದರ್ಭದಲ್ಲಿ ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಛಾಪನ್ನು ಮೂಡಿಸಿದ್ದಾರೆ ಎಂದು ಹೇಳಿದರು.

ಪ್ರಸ್ತುತ ಇಡೀ ಪ್ರಪಂಚದಾದ್ಯಂತ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳು ಇದ್ದು, ಅಕ್ಷರ, ಅನ್ನ ಮತ್ತು ಆರೋಗ್ಯ ದಾಸೋಹವನ್ನು ನೀಡುವ ಮೂಲಕ ಶರಣ ಪರಂಪರೆಯನ್ನು ಉಳಿಸಿಕೊಂಡು ಹೋಗುತ್ತಿದೆ. ಬಸವಣ್ಣನವರ ಕಾಯಕವೇ ಕೈಲಾಸ ತತ್ವವನ್ನು ಅಳವಡಿಸಿಕೊಂಡು ಮುನ್ನಡೆಯುತ್ತಿದೆ. ಈ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿಕೊಂಡು ಹೋಗುತ್ತಿದೆ. ಇದಕ್ಕೆ ಪ್ರತಿಯೊಬ್ಬರೂ ಆಬಾರಿಯಾಗಿರಬೇಕು ಎಂದರು.

ಈ ವೇಳೆ ಸಾಂಸ್ಕೃತಿ ವೇದಿಕೆ ಸಂಚಾಲಕಿ ಜಮುನಾ ಅವರು ಸಾಂಸ್ಕೃತಿಕ ವರದಿಯನ್ನು ಮಂಡಿಸಿದರು. ಕ್ರೀಡಾ ಕಾರ್ಯದರ್ಶಿ ರಂಜಿತಾ ಸವಿಸ್ತಾರವಾಗಿ ಕ್ರೀಡಾ ವರದಿಯನ್ನು ಮಂಡಿಸಿದರು. ಬಳಿಕ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾಗಿದ್ದ ವಿದ್ಯಾರ್ಥಿನಿಯರಿಗೆ ಗಣ್ಯರು ಪ್ರಶಸ್ತಿ ಪ್ರಧಾನ ಮಾಡಿದರು.

ನಗರಸಭೆ ಪೌರಾಯುಕ್ತ ಎಸ್.ವಿ.ರಾಮದಾಸ್, ರಾಷ್ಟ್ರೀಯ ಕುಸ್ತಿಪಟು ರೀಟಾ ಪ್ರಿಯಾಂಕಾ, ಜೆಎಸ್‌ಎಸ್ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ.ಎನ್.ಮಹದೇವಸ್ವಾಮಿ, ಸಾಂಸ್ಕೃತಿಕ ವೇದಿಕೆ ಸಂಚಾಲಕಿ ಜಮುನಾ, ದೈಹಿಕ ಶಿಕ್ಷಣ ನಿರ್ದೇಶಕ ಎಸ್.ಉಮೇಶ್, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆರ್.ಬಿ.ಕೃತಿಕಾ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net