ಪ್ರಧಾನಿಗಳಿಂದ ಶರಾವತಿ ಸಂತ್ರಸ್ತರಿಗೆ ಹಕ್ಕುಪತ್ರ ಕೊಡಿಸಿ: ತೀ.ನಾ.ಶ್ರೀನಿವಾಸ್ ಆಗ್ರಹ

WEB NEWWSS
Published on

ಸಾಗರ: ಪ್ರಧಾನಿ ನರೇಂದ್ರ ಮೋದಿ ಫೆ.27ರಂದು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು, ಅವರ ಕೈಯಿಂದಲೇ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ಕೊಡಿಸುವ ಮೂಲಕ ಬಿಜೆಪಿ ಕೊಟ್ಟ ಮಾತು ಉಳಿಸಿಕೊಳ್ಳಲಿ ಎಂದು ಮಲೆನಾಡು ರೈತ ಹೋರಾಟ ವೇದಿಕೆ ಜಿಲ್ಲಾ ಸಂಚಾಲಕ ತೀ.ನಾ.ಶ್ರೀನಿವಾಸ್ ಆಗ್ರಹಿಸಿದರು.

ಕಲಬುರಗಿಯಲ್ಲಿ ತಾಂಡದ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಿದ ಮಾದರಿಯಲ್ಲೇ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಶರಾವತಿ ಮುಳುಗಡೆ ಸಂತ್ರಸ್ತರಿಗೂ ಹಕ್ಕುಪತ್ರ ವಿತರಿಸಿ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಗುರುವಾರ ಮುಳುಗಡೆ ಸಂತ್ರಸ್ತರ ಕುರಿತು ಬೆಂಗಳೂರಿನಲ್ಲಿ ಸಭೆ ನಡೆಸಿದ ಮಾಹಿತಿ ಬಂದಿದೆ. ಚುನಾವಣೆ ಸಮೀಪಿಸುತ್ತಿದೆ ಎಂಬ ಕಾರಣಕ್ಕೆ ಸಭೆ ನಡೆಸಿ ಕಣ್ಣೊರೆಸುವ ತಂತ್ರ ಮಾಡಬಾರದು. ಮೊದಲು ಈ ಪ್ರಕರಣಗಳಿಗೆ ಸಂಬಂಧಿಸಿದ ಕಡತಗಳನ್ನು ಸಾಗರದಿಂದ ಶಿವಮೊಗ್ಗಕ್ಕೆ ಕಳುಹಿಸಬೇಕು ಎಂದು ಆಗ್ರಹಪಡಿಸಿದ ಅವರು, ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ನೀಡದೆ ಹೋದಲ್ಲಿ ವಿಧಾನಸಭಾ ಚುನಾವಣೆ ವೇಳೆ ಕರಪತ್ರ ಅಭಿಯಾನದ ಮೂಲಕ ಆಡಳಿತ ಮತ್ತು ವಿಪಕ್ಷಗಳ ವಿರುದ್ಧ ಜನಾಂದೋಲನ ರೂಪಿಸಲಾಗುವುದು ಎಂದರು.

ಒಂದೂವರೆ ವರ್ಷದ ಹಿಂದೆ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ಸಭೆ ನಡೆಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಹೇಳಿದ್ದರು. ಹೈಕೋರ್ಟ್ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿಲ್ಲ ಎಂದು ಪ್ರಕರಣವನ್ನು ರದ್ದುಪಡಿಸಿತ್ತು. ರಾಜ್ಯ ಸರ್ಕಾರ ಕನಿಷ್ಠ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ಕೆಲಸ ಮಾಡಿಲ್ಲ. ಯಡಿಯೂರಪ್ಪ ಅವರು ಶಿವಮೊಗ್ಗದಲ್ಲಿ ಸಭೆ ನಡೆಸಿ 20 ದಿನದೊಳಗೆ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಹಾಲಪ್ಪ ಹರತಾಳು ಸರ್ಕಾರದ ಮೇಲೆ ಒತ್ತಡ ತಂದು ಮುಳುಗಡೆ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಸಾಧ್ಯವಾಗದೆ ಸಂತ್ರಸ್ತರನ್ನು ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಿರುವುದು ಅವರ ಅಸಹಾಯಕತೆ, ಅಸಮರ್ಥತೆಗೆ ಸಾಕ್ಷಿಯಾಗಿದೆ ಎಂದರು. ಸಮಿತಿ ತಾಲೂಕು ಸಂಚಾಲಕ ಧರ್ಮೇಂದ್ರ ಶಿರವಾಳ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net