

ಮೈಸೂರು: ಕೇಂದ್ರ ಸರ್ಕಾರದ ‘ಪ್ರಸಾದ್’ ಯೋಜನೆಯಡಿ ಚಾಮುಂಡಿಬೆಟ್ಟದಲ್ಲಿ ಅಭಿವೃದ್ಧಿ ಕೆಲಸ ಕೈಗೊಳ್ಳುವ ಮುನ್ನ ಭೂವಿಜ್ಞಾನಿಗಳು, ಪರಿಸರ ತಜ್ಞರು ಮತ್ತು ಪರಂಪರೆ ತಜ್ಞರ ಅಭಿಪ್ರಾಯ ಪಡೆಯುವುದು ಸೂಕ್ತ ಎಂದು ಶಾಸಕ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ.
ವಿವಿಧ ತಜ್ಞರು ತಮ್ಮ ಅಭಿಪ್ರಾಯ ನೀಡುವ ತನಕ ಬೆಟ್ಟದ ಮೇಲೆ ಯಾವುದೇ ರೀತಿಯ ಕೆಲಸ ಮಾಡಬಾರದು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ. ಜಿಲ್ಲಾಧಿಕಾರಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ವಿವಿಧ ತಜ್ಞರ ಜತೆಗೆ ಸಮಾಲೋಚನೆ ನಡೆಸಬೇಕು ಎಂದು ಸೂಚಿಸಿದ್ದಾರೆ.
ಈ ಯೋಜನೆಯಡಿ ರಾಜ್ಯ ಪ್ರವಾಸೋದ್ಯಮ ಇಲಾಖೆ ಮಾಡಲು ಉದ್ದೇಶಿಸಿರುವ ಅಭಿವೃದ್ಧಿ ಕೆಲಸಗಳು ಬೆಟ್ಟದ ಪ್ರಾಕೃತಿಕ ಸಂರಚನೆಗೆ, ಸಹಜ ಸೌಂದರ್ಯಕ್ಕೆ, ಧಾರ್ಮಿಕ ಪಾವಿತ್ರ್ಯಕ್ಕೆ ಕುಂದು ತರಬಹುದು ಎಂದು ಪರಿಸರ ಕಾಳಜಿವುಳ್ಳ ನಾಗರಿಕರು, ಭಕ್ತರು ಕಳವಳ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ಕೆಲಸಕ್ಕೂ ಮುನ್ನ ತಜ್ಞರ ಅಭಿಪ್ರಾಯ ಪಡೆಯಬೇಕು, ಪರಿಸರಕ್ಕೆ ಪೂರಕವಾದ ಕೆಲಸ ಮಾತ್ರ ಮಾಡಬೇಕು ಎಂದಿದ್ದಾರೆ.
ಈ ಕುರಿತು ಮಾಧ್ಯಮಗಳಲ್ಲಿ ಬಂದಿರುವ ವರದಿಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಕೆಲವು ತಜ್ಞರು ಮತ್ತು ಪರಿಸರ ಪ್ರೇಮಿಗಳ ಜತೆಗೆ ಚರ್ಚೆ ಮಾಡಿದಾಗ ಇವರೆಲ್ಲ ವ್ಯಕ್ತಪಡಿಸುತ್ತಿರುವ ಅಭಿಪ್ರಾಯ ಸರಿಯಿದೆ ಎಂದೆನಿಸಿದೆ. ಬೆಟ್ಟದ ಪ್ರಾಕೃತಿಕ ಸಂರಚನೆ ಸೂಕ್ಷ್ಮ ಮತ್ತು ದುರ್ಬಲವಾಗಿದೆ ಎಂದು ತಜ್ಞರು ಅಭಿಪ್ರಾಯಿಸಿದ್ದಾರೆ. ಹೀಗಿರುವಾಗ ಬೆಟ್ಟದ ಧಾರಣಾ ಸಾಮರ್ಥ್ಯ ತಿಳಿಯದೆ ಕಾಂಕ್ರೀಟ್ ಕಟ್ಟಡಗಳನ್ನು ಕಟ್ಟುವುದು ಅಪಾಯಕಾರಿ ಆಗುವ ಸಂಭವವಿದೆ ಎಂದು ಹೇಳಿದ್ದಾರೆ.