ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹ

ctd--bjp..
Published on

ಚಿತ್ರದುರ್ಗ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಹಾಗೂ ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು

ನಗರದ ವೀರವನಿತೆ ಒನಕೆ ಓಬವ್ವ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಪೋಸ್ಟರ್ ಹಾಗೂ ಭಿತ್ತಿಪತ್ರ ಹಿಡಿದು ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು.

ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಮಾತನಾಡಿ, ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್ ಪಾಂಚಾಳ ಡೆತ್‌ನೋಟ್ ಬರೆದಿಟ್ಟಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸಂಪುಟದಿಂದ ತಕ್ಷಣ ಕೈಬಿಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಅಘೋಷಿತ ತುರ್ತುಪರಿಸ್ಥಿತಿ ನಿರ್ಮಾಣಗೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಸೂಪರ್ ಸಿಎಂ ರೀತಿ ವರ್ತಿಸುತ್ತಿದ್ದಾರೆ. ಕುರ್ಚಿ ಭಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದು ಮುಂದುವರಿದರೆ ರಾಜ್ಯ ಸರ್ಕಾರ ವಜಾಕ್ಕೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಎಚ್ಚರಿಸಿದರು.

ಇನ್ನು ರಾಜ್ಯ ಸರ್ಕಾರ ಏಕಾಏಕಿ ಬಸ್ ಪ್ರಯಾಣ ದರ ಹೆಚ್ಚಿಸಿ ಬಡಜನರ ಮೇಲೆ ಬರೆ ಎಳೆಯುವ ಕೆಲಸ ಮಾಡಿದೆ. ಕೂಡಲೇ ಪ್ರಯಾಣ ದರ ಏರಿಕೆ ತೀರ್ಮಾನ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಶ್ಯಾಮಲಾ ಪ್ರಕಾಶ್ ಮಾತನಾಡಿ, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಕುಂಠಿತಗೊಂಡಿವೆ. ಹಾಲು ಹಾಗೂ ಬಸ್ ಪ್ರಯಾಣ ದರ ಏರಿಕೆ ಜನಸಾಮಾನ್ಯರಿಗೆ ಹೊರೆಯಾಗಿದೆ. ಬಾಣಂತಿಯರ ಸಾವಿನ ಪ್ರಕರಣಗಳು ಸರ್ಕಾರದ ವೈಪಲ್ಯಕ್ಕೆ ಸಾಕ್ಷಿಯಾಗಿವೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಪದಾಧಿಕಾರಿಗಳಾದ ಸಂಪತ್‌ಕುಮಾರ್, ನಾಗರಾಜ್ ಬೇದ್ರೆ, ಕಲ್ಲೇಶಯ್ಯ, ಛಲವಾದಿ ತಿಪ್ಪೇಸ್ವಾಮಿ, ಮುರಾರ್ಜಿ, ಯೋಗೇಶ್ ಸಹ್ಯಾದ್ರಿ, ಶ್ಯಾಮಲಾ ಶಿವಪ್ರಕಾಶ್, ಅರುಣಾ, ಮಂಜುಳಾ, ಬಸಮ್ಮ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net