ಪ್ರಿಯಾಂಕ್ ಖರ್ಗೆಗೆ ಕೊಲೆ ಬೆದರಿಕೆ; ಬಿಜೆಪಿ ಮುಖಂಡನ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

26
Published on

ಮೈಸೂರು: ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನಕ್ಕೆ ಆಗ್ರಹಿಸಿ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು ನಗರದ ಪುರಭವನದ ಎದುರಿನ ಅಂಬೇಡ್ಕರ್ ಪ್ರತಿಮೆ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು.


ಚುನಾಯಿತ ಶಾಸಕ, ಎರಡು ಬಾರಿ ಸಚಿವರಾಗಿದ್ದ ಪ್ರಿಯಾಂಕ್ ಖರ್ಗೆ ಅವರನ್ನು ಶೂಟ್ ಮಾಡುವುದಾಗಿ ಬಿಜೆಪಿ ಮುಖಂಡ ಮಣಿಕಂಠ ಬಹಿರಂಗ ಹೇಳಿಕೆ ನೀಡಿದ್ದಾರೆ. ಇದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವುದಕ್ಕೆ ಸಾಕ್ಷಿಯಾಗಿದೆ. ಶಾಂತಿಯ ನೆಲೆಬೀಡಾಗಿದ್ದ ಕರ್ನಾಟಕ ಈಗ ಗೂಂಡಾ ರಾಜ್ಯವಾಗುತ್ತಿದೆ. ಬಹಿರಂಗವಾಗಿ ಈ ರೀತಿಯ ಹೇಳಿಕೆ ನೀಡಿ ಅಶಾಂತಿ ಸೃಷ್ಟಿಸುತ್ತಿರುವ ಬಿಜೆಪಿ ಮುಖಂಡನನ್ನು ಬಂಧಿಸಿ ಕಾನೂನು ಪ್ರಕಾರ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.


ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲವಾಗಿರುವ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಮುಖಂಡರಾದ ನರೇಂದ್ರ, ಅಹಿಂದ ಜವರಪ್ಪ, ಮರಿದೇವಯ್ಯ, ವಿಜಯ್‌ಕುಮಾರ್, ರೇವಣ್ಣ, ಮಹದೇವು, ನಟರಾಜು ಶಿವಣ್ಣ, ಪ್ರಕಾಶ್ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net