ಪ್ರೋತ್ಸಾಹ ಧನಕ್ಕೆ ಒತ್ತಾಯಿ ಎಸ್ಎಫ್‌ಐ ಕಾರ್ಯಕರ್ತರ ಪ್ರತಿಭಟನೆ

8
Published on

ಮೈಸೂರು: ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ಪ್ರೋತ್ಸಾಹ ಧನ ನೀಡಬೇಕೆಂದು ಆಗ್ರಹಿಸಿ ಭಾರತೀಯ ವಿದ್ಯಾರ್ಥಿ ಫೆರಡೇಷನ್‌ನಿಂದ (ಎಸ್‌ಎಫ್‌ಐ) ನಗರದಲ್ಲಿ ಪ್ರತಿಭಟನೆ ನಡೆಯಿತು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು, ಸಮಾಜ ಕಲ್ಯಾಣ ಇಲಾಖೆಯಿಂದ ಶೇ. 50ರಷ್ಟು ಪ್ರೋತ್ಸಾಹಧನವನ್ನು ಮಾತ್ರ ನೀಡಲಾಗಿದ್ದು, ಉಳಿದ ಹಣ ಬಿಡುಗಡೆ ಮಾಡಿಲ್ಲ ಎಂದು ದೂರಿದರು.
ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್‌ಗಳಿಗೆ ಅನುಗುಣವಾಗಿ 30 ಸಾವಿರ ರೂ.ವರೆಗೂ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ಕೋವಿಡ್ ಸಂದರ್ಭದಲ್ಲಿ ಶೇ.50ರಷ್ಟು ಮೊತ್ತವನ್ನು ಮಾತ್ರ ನೀಡಲು ಮುಂದಾಗಿದೆ. ಇದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸ, ಸ್ಪರ್ಧಾತ್ಮಕ ಪರೀಕ್ಷೆ ಕನಸಿಗೆ ಅಡ್ಡಿಯುಂಟಾಗಿದೆ ಎಂದು ಆರೋಪಿಸಿದರು.
ಮೊದಲ ಹಂತದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ 30 ಸಾವಿರ ರೂ. ಪ್ರೋತ್ಸಾಹಧನವನ್ನು ನೀಡಲಾಗಿದೆ. ಆದರೆ ಬಳಿಕ ಬಿಡುಗಡೆ ಮಾಡಿದ ವಿದ್ಯಾರ್ಥಿಗಳಿಗೆ ಶೇ.50ರಷ್ಟು 15 ಸಾವಿರ ರೂ. ಮಾತ್ರ ಬಿಡುಗಡೆಗೊಂಡಿದೆ. ಇದು ವಿದ್ಯಾರ್ಥಿಗಳ ನಡುವೆಯೇ ತಾರತಮ್ಯ ಮಾಡಿದಂತಾಗುತ್ತದೆ. ಎಸ್‌ಎಸ್‌ಎಲ್‌ಸಿ, ಮೆಟ್ರಿಕ್ ನಂತರದ ವಿವಿಧ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಪೂರ್ಣ ಪ್ರಮಾಣದಲ್ಲಿ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಎಸ್‌ಎಫ್‌ಐ ಜಿಲ್ಲಾ ಸಂಚಾಲಕ ವಿಜಯ್‌ಕುಮಾರ್, ಮೈಸೂರು ವಿವಿ ಘಟಕದ ಕಾರ್ಯದರ್ಶಿ ವೀರಭದ್ರ ಹಿರೇಮಠ್, ನಗರ ಸಮಿತಿ ಕಾರ್ಯದರ್ಶಿ ಅಭಿ, ಮುಖಂಡ ತಿಪ್ಪೇಸ್ವಾಮಿ, ನಿಖಿಲ್, ಪ್ರವೀಣ್, ಗಿರೀಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net